ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಕೊಪ್ಪಳ: ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧೆಡೆ ಹೊಸದಾಗಿ ಬಿಇಒ ಕಚೇರಿಗಳನ್ನು ಸ್ಥಾಪಿಸುವ ಪ್ರಯತ್ನ ನಡೆಯುತ್ತಿದೆ. ಇಲಾಖೆಯಲ್ಲಿ ಬಡ್ತಿ ಸೇರಿದಂತೆ ವಿವಿಧ ಹಂತಗಳಲ್ಲಿ ಆಂತರಿಕ ಪ್ರಕ್ರಿಯೆಗಳು ನಡೆಯುತ್ತಿವೆ. ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಮಟ್ಟದಲ್ಲಿಯೂ ಪ್ರಯತ್ನ ನಡೆದಿದೆ. ದೊಡ್ಡ ಇಲಾಖೆಯಾಗಿರುವುದರಿಂದ ಆದ್ಯತೆಯ ಮೇರೆಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದರು.

ಅನುದಾನಿತ ಶಿಕ್ಷಣ ಸಂಸ್ಥೆಗಳ ಬೇಡಿಕೆಗಳನ್ನು ನಿಯಮಾನುಸಾರ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಳೆದ ವರ್ಷ 1.39 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು. ಪ್ರಸಕ್ತ ವರ್ಷ 1.81 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಪಠ್ಯಪುಸ್ತಕ ವಿತರಣೆಯಲ್ಲಿ ವಿಳಂಬವಾಗಿದೆ ಎಂದು ಸ್ಪಷ್ಟಪಡಿಸಿದರು.

ಶೂ ಕಳಪೆಯಾಗಿಲ್ಲ, ಅಳತೆಯಲ್ಲಿ ವ್ಯತ್ಯಾಸ: ಶಾಲಾ ಮಕ್ಕಳಿಗೆ ವಿತರಿಸಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಶೂಗಳು ಕಳಪೆಯಾಗಿಲ್ಲ. ಆದರೆ ಕೆಲವು ಕಡೆ ಅಳತೆಯಲ್ಲಿ ವ್ಯತ್ಯಾಸವಾಗಿದೆ. ಒಂದು ವೇಳೆ ಕಳಪೆ ಗುಣಮಟ್ಟದ ಶೂಗಳನ್ನು ವಿತರಿಸಿರುವುದು ಕಂಡುಬಂದರೆ ತೋರಿಸಲಿ, ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಹಿಳಾ ಸಚಿವರ ವಿಚಾರ ಸಿಎಂ, ಹೈಕಮಾಂಡ್‌ಗೆ ಬಿಟ್ಟದ್ದು: ರಾಜ್ಯ ಸಚಿವ ಸಂಪುಟದಲ್ಲಿ ಮಹಿಳಾ ಸಚಿವರಿಗೆ ಅವಕಾಶ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಕುರಿತು ಮುಖ್ಯಮಂತ್ರಿ ಹಾಗೂ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಈಗಾಗಲೇ ಈ ವಿಚಾರದಲ್ಲಿ ತಡವಾಗಿದೆ. ಈ ಹಿಂದೆ ಎರಡನೇ ಬಾರಿಗೆ ಸಂಪುಟ ವಿಸ್ತರಣೆಯಾದ ಸಂದರ್ಭದಲ್ಲಿ ನನ್ನನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು ಎಂದರು.

ಬಸವ ಮಂಟಪ ಪುಸ್ತಕ ವಿಚಾರ: ಬಸವ ಮಂಟಪದ ಪುಸ್ತಕ ವಿಚಾರವಾಗಿ ಮಾತನಾಡಿದ ಸಚಿವರು, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ರೀತಿಯ ಬರಹಗಳನ್ನು ಬರೆಯಲಾಗುತ್ತಿದೆ. ಬಸವಣ್ಣನವರು ನಮ್ಮ ಸಾಂಸ್ಕೃತಿಕ ನಾಯಕರು. ಈ ವಿಚಾರದಲ್ಲಿ ಕಾನೂನಾತ್ಮಕವಾಗಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ.