ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಕ್ರಮ

| Published : Dec 18 2024, 12:48 AM IST

ಸಾರಾಂಶ

ರಾಮನಗರ: ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಅಗತ್ಯವಿರುವ ಕ್ರಮಗಳನ್ನು ಕೈಗೊಂಡು ಫಲಿತಾಂಶದಲ್ಲಿ ಸುಧಾರಣೆ ತರುವಂತೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸಲಹೆ ನೀಡಿದರು.

ರಾಮನಗರ: ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಅಗತ್ಯವಿರುವ ಕ್ರಮಗಳನ್ನು ಕೈಗೊಂಡು ಫಲಿತಾಂಶದಲ್ಲಿ ಸುಧಾರಣೆ ತರುವಂತೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸಲಹೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿಂತಾಶ ಉತ್ತಮ ಪಡಿಸಲು ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,

ಜಿಲ್ಲೆಯಲ್ಲಿ ಈ ಬಾರಿ 13,579 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಅವರೆಲ್ಲರೂ ಉತ್ತೀರ್ಣರಾಗಲು ಅಗತ್ಯ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಕಲಿಕೆ ಅಥವಾ ವಿಷಯ ನ್ಯೂನತೆ ಇರುವ ಮಕ್ಕಳನ್ನು ಗುರುತಿಸಿ ಅವರಿಗೆ ಶಿಕ್ಷಕರು ಸರಿಯಾದ ಮಾರ್ಗದರ್ಶನ ನೀಡಬೇಕು ಎಂದರು.

ಶಿಕ್ಷಕರು ಮಾಡುವ ಈ ಸಣ್ಣ ಪ್ರಯತ್ನ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುತ್ತದೆ. ಕೀಳರಿಮೆ ಇರುವ ಮಕ್ಕಳನ್ನು ಗುರುತಿಸಿ ಅವರಲ್ಲಿ ಆತ್ಮ ವಿಶ್ವಾಸ ತುಂಬಬೇಕು. ಆ ಮೂಲಕ ಶಾಲೆಯಲ್ಲಿ ಸಕಾರಾತ್ಮಕ ವಾತಾವರಣ ಸೃಷ್ಟಿಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅನುಕೂಲಕರ ವಾತಾವರಣವಿದೆ. ಮುಖ್ಯವಾಗಿ ಗಣಿತ ಹಾಗೂ ಇಂಗ್ಲಿಷ್ ವಿಷಯಗಳ ತರಗತಿಗಳನ್ನು ವಿದ್ಯಾರ್ಥಿಗಳಿಗೆ ಸರಳವಾಗುವ ರೀತಿಯಲ್ಲಿ ಅರ್ಥಮಾಡಿಸಬೇಕು. ನಿಜ ಜೀವನದ ಉದಾಹರಣೆಗಳೊಂದಿಗೆ ಅವರಿಗೆ ವಿವರಿಸಿದಾಗ ಆ ಪಾಠಗಳು ಹೆಚ್ಚು ಕಾಲ ಅವರ ಮನಸ್ಸಿನಲ್ಲಿ ಉಳಿಯುತ್ತದೆ ಎಂದು ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 90 ದಿನಗಳು ಬಾಕಿ ಉಳಿದಿದ್ದು, ಈ ದಿನಗಳನ್ನು ಸೂಕ್ತವಾಗಿ ಬಳಸಿಕೊಂಡಲ್ಲಿ ಉತ್ತಮ ಫಲಿತಾಂಶ ಸಾಧ್ಯ. ಗೈರು ಹಾಜರಾದ ಮಕ್ಕಳ ಬಗ್ಗೆ ಹೆಚ್ಚು ಗಮನಹರಿಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಆಯಾ ಶಾಲೆಯ ಶಿಕ್ಷಕರು ಅವರೊಂದಿಗೆ ಚರ್ಚಿಸಿ ಅವರಲ್ಲಿನ ಸಮಸ್ಯೆಗಳನ್ನು ಪತ್ತೆ ಮಾಡಿ ಅವುಗಳನ್ನು ಪರಿಹರಿಸುವ ಮೂಲಕ ಆ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿಸಬೇಕು. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವ ಶಕ್ತಿ ಶಿಕ್ಷಕರಲ್ಲಿದೆ. ಆದ್ದರಿಂದ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸವನ್ನು ತುಂಬುವಂತೆ ಯಶವಂತ್ ವಿ.ಗುರುಕರ್ ಕರೆ ನೀಡಿದರು.

ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಈ ಬಾರಿ ಕಟ್ಟುನಿಟ್ಟಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಲಾಗುವುದು ಶಿಕ್ಷಕರು ಪರೀಕ್ಷೆಗೆ ಉಳಿದಿರುವ 3 ತಿಂಗಳ ಕಾಲಾವಧಿಯಲ್ಲಿ ವಿದ್ಯಾರ್ಥಿಗಳ ಮೇಲೆ ಗಮನಕೇಂದ್ರೀಕರಿಸಿ ಉತ್ತಮ ಫಲಿತಾಂಶ ತರುವ ಕೆಲಸ ಮಾಡಬೇಕು. ಹಿಂದಿನ ವರ್ಷದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸುವ ಮೂಲಕ ಅವರಲ್ಲಿ ಆತ್ಮ ವಿಶ್ವಾಸ ತುಂಬಿ ಹೆಚ್ಚು ಅಂಕ ಗಳಿಸುವಂತೆ ಸಹಾಯ ಮಾಡಲು ಕ್ರಮ ವಹಿಸುವಂತೆ ತಿಳಿಸಿದರು.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಬಸವರಾಜೇಗೌಡ, 5 ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರ್ಕಾರ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.

17ಕೆಆರ್ ಎಂಎನ್ 8.ಜೆಪಿಜಿ

ರಾಮನಗರದ ಜಿಪಂ ಸಭಾಂಗಣದಲ್ಲಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿಂತಾಶ ಉತ್ತಮ ಪಡಿಸಲು ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯನ್ನು ಜಿಲ್ಲಾಧಿಕಾರಿ ಯಶವಂತ್ ಉದ್ಘಾಟಿಸಿದರು.