ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರ
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೈಗಾರಿಕ ಪ್ರದೇಶಗಳಲ್ಲಿ ಬಳಕೆಇತ್ತೀಚೆಗೆ ಜಿಲ್ಲೆಯ ಕೈಗಾರಿಕ ಪ್ರದೇಶಗಳಲ್ಲಿ ಹೆಚ್ಚು ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕೆಗಳ ಮುಖ್ಯಸ್ಥರನ್ನು ಕರೆಸಿ ಸಭೆಯನ್ನು ನಡೆಸಿ ಅವರವರ ಕಂಪನಿಗಳಲ್ಲಿ ಮಾದಕ ವಸ್ತುಗಳ ನಿಯಂತ್ರಣ ಸಮಿತಿಯನ್ನು ರಚನೆ ಮಾಡುವಂತೆ ತಿಳಿಸಲಾಗುವುದು ಎಂದರು.ಪದವಿ ಕಾಲೇಜುಗಳಲ್ಲಿ ಸಮಿತಿಯನ್ನು ರಚಿಸಿ ಒಂದು ವರ್ಷದ ಯೋಜನೆಯನ್ನು ರೂಪಿಸಿಕೊಂಡು ಸಂಪೂರ್ಣವಾಗಿ ಮಾದಕ ವಸ್ತುಗಳ ನಿಯಂತ್ರಣ ಮಾಡಬೇಕು ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ತಿಳಿಸಿದರು. ಮಾದಕ ವಸ್ತುಗಳಿಗೆ ಯುವ ಸಮುದಾಯ ಹೆಚ್ಚು ಆಕರ್ಷಿತವಾಗುತ್ತಿದೆ. ಇವುಗಳ ಬಳಕೆಯಿಂದ ದೇಹದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಈಗಾಗಲೇ ಕೆಲವು ವಿದ್ಯಾಸಂಸ್ಥೆಗಳಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ದುಶ್ಚಟಗಳಿಗೆ ಕಾರ್ಮಿಕರು ಬಲಿತಂಬಾಕು ಉತ್ಪನ್ನಗಳು ಸೇರಿದಂತೆ ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ವ್ಯಸನಿಗಳಾಗುತ್ತಿದ್ದಾರೆ. ಇವರಿಗೂ ಸಹ ಅರಿವು ಮೂಡಿಸುವುದು ಸೇರಿದಂತೆ ಮನಪರಿವರ್ತಿತ ಕಾರ್ಯಕ್ರಮಗಳನ್ನು ಕಾರ್ಮಿಕ ಇಲಾಖೆಯ ವತಿಯಿಂದ ಅವರು ಕಾರ್ಯನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಹಮ್ಮಿಕೊಂಡು ಇವುಗಳಿಂದ ದೂರ ಉಳಿಯುವ ಹಾಗೆ ನೋಡಿಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅಂಚೆ ಇಲಾಖೆಯ ಪಾರ್ಸೆಲ್‌ಗಳಲ್ಲಿ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿರುವ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ಅದೇ ರೀತಿ ಖಾಸಗಿ ಪಾರ್ಸೆಲ್ ಸರ್ವೀಸ್‌ಗಳ ಕಚೇರಿಗಳನ್ನು ಹಾಗೂ ಆನ್‌ಲೈನ್ ಮಾರುಕಟ್ಟಯೆ ಗೋದಾಮುಗಳನ್ನು ಪರಿಶೀಲಿಸಬೇಕು. ರೈಲ್ವೆ ಇಲಾಖೆಯ ಸಿಬ್ಬಂದಿ ಸಹ ನಿಲ್ದಾಣದಲ್ಲಿ ಮಾದಕ ವಸ್ತುಗಳ ಸರಬರಾಜು ಬಗ್ಗೆ ನಿಗಾ ವಹಿಸಬೇಕು. ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅವರ ಬಗ್ಗೆ ತನಿಖೆ ಮಾಡಬೇಕು ಎಂದು ಸೂಚನೆ ನೀಡಿದರು.ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಿಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ನಿಖಿಲ್ ಅವರು ಮಾತನಾಡಿ, ಮತ್ತುಬರಿಸುವ ಔಷಧಿಗಳು ಜನ ಸಾಮಾನ್ಯರೆಲ್ಲರಿಗೂ ಮಾರಾಟ ಮಾಡುವ ಹಾಗಿಲ್ಲ. ಈ ಬಗ್ಗೆ ಜಿಲ್ಲೆಯ ಮಾದಕ ವಸ್ತುಗಳ ನಿಯಂತ್ರಣ ಅಧಿಕಾರಿಗಳು ಔಷಧಿ ಅಂಗಡಿಗಳ ಬಗ್ಗೆ ಎಚ್ಚರವಹಿಸಬೇಕು. ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.ಜಿಲ್ಲೆಯ ಎಲ್ಲಾ ಶಾಲಾಕಾಲೇಜುಗಳಲ್ಲಿ ಮಾದಕ ದ್ರವ್ಯ ನಿಯಂತ್ರಣ ಸಮಿತಿಗಳನ್ನು ರಚಿಸಿ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು ಮತ್ತು ಸಮಿತಿಯ ಪ್ರತಿತಿಂಗಳ ಚಟುವಟಿಕೆಗಳ ವರದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದರು.ಅ.4ರಂದು ಬೈಕ್ ಜಾಥಾಮುಂಬರುವ ಅಕ್ಟೋಬರ್ ತಿಂಗಳ ೪ ನೇ ತಾರೀಕು ಶನಿವಾರ ಜಿಲ್ಲಾದ್ಯಂತ ಬೈಕ್ ಜಾಥಾ ನಡೆಸುವ ಮೂಲಕ ಸಾರ್ವಜನಿಕರಲ್ಲಿ ನಶೆ ಮುಕ್ತ ಕೋಲಾರ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಜಿಲ್ಲಾಡಳಿತದಿಂದ ಮಾಡಲಾಗುವುದು. ಪ್ರತಿ ತಾಲೂಕಿನಲ್ಲಿಯೂ ಆ ಕ್ಷೇತ್ರದ ಶಾಸಕರು ಪಾಲ್ಗೊಳ್ಳುತ್ತಾರೆ. ಇದರಿಂದ ಜನರಿಗೆ ನಾವೆಲ್ಲರೂ ಉತ್ತಮ ಸಂದೇಶವನ್ನು ನೀಡಬಹುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಕೆಜಿಎಫ್ ಎಸ್ಪಿ ಶೀವಂಶು ರಜಪೂತ್, ಡಿಎಚ್‌ಒ ಶ್ರೀನಿವಾಸ,ಸಮಾಜ ಕಲ್ಯಾಣ ಅಧಿಕಾರಿ ಶ್ರೀನಿವಾಸನ್,ಅಬಕಾರಿ ಉಪ ಆಯುಕ್ತರಾದ ಸೈಯದ್ ಅಜ್ಮತ್ ಆಫ್ರಿನ್, ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಅಲ್ಮಾಸ್ ಪರ್ವೀನ್ ತಾಜ್,ಸೇರಿದಂತೆ ಇತರರು ಉಪಸ್ಥಿತರಿದ್ದರು.