ಹಲವು ಪ್ರಶ್ನೆ, ಸಲಹೆಗಳನ್ನು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಎದುರಿಸಿದರು.

ಅಹವಾಲು ಸ್ವೀಕಾರ, ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು

ಕನ್ನಡಪ್ರಭ ವಾರ್ತೆ ಕಾರವಾರ

ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಗೆ ಏನು ಮಾಡಿದ್ದೀರಿ, ಶಾಲಾ-ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳ ಬಳಕೆ ನಿಷೇಧ ಕಡ್ಡಾಯವಾಗಿ ಜಾರಿಗೊಳಿಸಿ, ಬಾಲ ಕಾರ್ಮಿಕ ನಿಷೇಧ ಪದ್ದತಿ ಪರಿಣಾಮಕಾರಿಯಾಗಿ ಜಾರಿಗೊಳಿಸಿ, ದೌರ್ಜನ್ಯ ಸಂದರ್ಭದಲ್ಲಿ ಪೊಲೀಸ್ ಸಹಾಯವಾಣಿ 112, ಮಕ್ಕಳ ಸಹಾಯವಾಣಿ 1098, ಅಕ್ಕ ಪಡೆ ಇವುಗಳಲ್ಲಿ ಯಾವುದು ತುರ್ತಾಗಿ ಸ್ಪಂದಿಸಲಿದೆ ಹೀಗೆ ಮುಂತಾದ ಹಲವು ಪ್ರಶ್ನೆ, ಸಲಹೆಗಳನ್ನು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಎದುರಿಸಿದರು.

ಅಂಕೋಲಾದ ಪಿ.ಎಂ. ಹೈಸ್ಕೂಲ್‌ನಲ್ಲಿ ಆರ್.ಟಿ.ಇ ಕುರಿತು ಅಹವಾಲು ಸ್ವೀಕಾರ ಹಾಗೂ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅಂಕೋಲಾದ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶ್ನೆ, ಸಲಹೆಗಳನ್ನು ನೀಡಿದರು.ವಿದ್ಯಾರ್ಥಿನಿ ಸುಶ್ಮಿತಾ ನಾಯಕ್ ಮಾತನಾಡಿ, ವಿದ್ಯಾರ್ಥಿನಿಯರ ಮೇಲೆ ನಡೆಯುವ ದೌರ್ಜನ್ಯ ತಡೆಯಲು ಏನೇನು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು. ಪೊಲೀಸ್ ಇಲಾಖೆಯಿಂದ ತೆರೆದ ಮನೆ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗುತ್ತಿದೆ ಹಾಗೂ ಶಾಲೆಗಳಲ್ಲಿ ಕೂಡಾ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಅಂಕೋಲಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ತಿಳಿಸಿದರು, ರಾಜ್ಯದಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆಯುವ ದೌರ್ಜನ್ಯ ನಿಯಂತ್ರಿಸಲು ಅಕ್ಕ ಪಡೆ ರಚಿಸಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ತಿಳಿಸಿದರು.ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ., ದೇಶದ ಜನಸಂಖ್ಯೆಯಲ್ಲಿ ಶೇ.40ಕ್ಕೂ ಅಧಿಕ 18 ವರ್ಷದೊಳಗಿನ ಮಕ್ಕಳಿದ್ದಾರೆ, ಅವರ ಅಭಿಪ್ರಾಯ ಸಮಸ್ಯೆ ಆಲಿಸಿ ಅವುಗಳಿಗೆ ಪರಿಹಾರ ಒದಗಿಸುವುದು ಉತ್ತಮ ಪ್ರಜಾಪ್ರಭುತ್ವದ ಲಕ್ಷಣ. ಅವರ ಸರ್ವತೋಮುಖ ವಿಕಾಸಕ್ಕೆ ಎಲ್ಲಾ ಅವಕಾಶಗಳನ್ನು ನೀಡುವ ಜೊತೆಗೆ ಅವರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕು, ಮಕ್ಕಳು ತುರ್ತು ಸಹಾಯವಾಣಿ ಸಂಖ್ಯೆಗಳಾದ ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ಸಹಾಯವಾಣಿ 1098 ಗೆ ತಮ್ಮ ಎಲ್ಲಾ ರೀತಿಯ ದೂರುಗಳನ್ನು ಮತ್ತು ಸಮಸ್ಯೆ ಸಲ್ಲಿಸಬಹುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಅಂಕೋಲಾ ತಹಸೀಲ್ದಾರ್ ಡಾ. ಚಿಕ್ಕಪ್ಪ ನಾಯ್ಕ್, ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿಅನುಷ್ಠಾನಾಧಿಕಾರಿಗಳು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು, ಮಕ್ಕಳೊಂದಿಗೆ ಅವರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಬೇಕು ಎಂದರು. ಅಂಕೋಲಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಚಂದ್ರಶೇಖರ್ ಮಠಪತಿ, ತಾಲೂಕು ಆರೋಗ್ಯಾಧಿಕಾರಿ ಡಾ. ಜಗದೀಶ್ ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕುಮಾರ್, ಪಿ.ಎಂ. ಹೈಸ್ಕೂಲ್‌ನ ಮುಖ್ಯಾಧ್ಯಾಪಕ ಚಂದ್ರಶೇಖರ್ ಕಡೀಮನಿ, ಕ್ಷೇತ್ರ ಶಿಕ್ಷಣಾಧಿಕಾರಿ (ಪ್ರಭಾರ) ನಾಗರಾಜ್ ನಾಯಕ್, ಭಾಸ್ಕರ್ ಗಾಂವಕರ್ ಮತ್ತಿತರರು ಇದ್ದರು.ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ಉತ್ತರ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.