ಸಾರಾಂಶ
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಪಂದಿಸಿ ಬಾಲ್ಯ ವಿವಾಹ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆದ ವಿವಿಧ ಸಮಿತಿ ಸಭೆಯಲ್ಲಿ ಮಾತನಾಡಿದರು.ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರಡಿ ಜಿಲ್ಲೆಯಲ್ಲಿ 2024ರ ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ಒಟ್ಟು-16 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ದೇವನಹಳ್ಳಿಯಲ್ಲಿ 6, ದೊಡ್ಡಬಳ್ಳಾಪುರ 9, ಹೊಸಕೋಟೆಯಲ್ಲಿ 1 ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಪ್ರತಿ ಮನೆಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕಾನೂನುಗಳ ಕರಪತ್ರವನ್ನು ಹಂಚುವ ಮೂಲಕ ಬಾಲ್ಯ ವಿವಾಹ ನಿಷೇಧ ಕುರಿತಂತೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಹೇಳಿದರು.ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ-1098, ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ರಕ್ಷಣಾ ಘಟಕ 080-29560034 ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆ ಗಮನಕ್ಕೆ ತರಬಹುದಾಗಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 1277 ಅಂಗನವಾಡಿ ಕೇಂದ್ರಗಳಿದ್ದು, ಅವುಗಳಲ್ಲಿ 999 ಸ್ವಂತ ಅಂಗನವಾಡಿ ಕಟ್ಟಡ, 4 ಪಂಚಾಯಿತಿ ಕಟ್ಟಡಗಳಲ್ಲಿ, 50 ಅಂಗನವಾಡಿ ಸಮುದಾಯ ಭವನದಲ್ಲಿ, 88 ಅಂಗನವಾಡಿ ಶಾಲೆಗಳಲ್ಲಿ ಹಾಗೂ 132 ಅಂಗನವಾಡಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಿ ಸಿ.ಎಸ್.ಆರ್ ಅನುದಾನದಡಿ ಅಂಗನವಾಡಿ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಶೌಚಾಲಯ, ವಿದ್ಯುತ್, ನೀರು ಮೂಲ ಸೌಕರ್ಯಕ್ಕೆ ತೊಂದರೆಯಾಗದಂತೆ ಕ್ರಮವಹಿಸಿ ಎಂದು ಸೂಚಿಸಿದರು.ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ರಡಿ ನಿಯಮ ಪ್ರಸಕ್ತ ಸಾಲಿನಲ್ಲಿ ಸಖಿ ಯೋಜನೆಯ ಅಡಿ ದಾಖಲಾದ 94 ಪ್ರಕರಣಗಳಲ್ಲಿ 83 ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ. ಸಂರಕ್ಷಣಾಧಿಕಾರಿಗಳ ಹಂತದಲ್ಲಿ ದಾಖಲಾದ 17 ಪ್ರಕರಣಗಳಲ್ಲಿ 11 ಪ್ರಕರಣಗಳನ್ನು ಸಮಾಲೋಚನೆಯಿಂದ ಇತ್ಯರ್ಥಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಕಾನೂನು ಪ್ರಾಧಿಕಾರ ಸದಸ್ಯರಾದ ನ್ಯಾಯಮೂರ್ತಿ ಬೋಲಾ ಪಂಡಿತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಅನಿತಾಲಕ್ಷ್ಮೀ, ಹೊಸಕೋಟೆ ವಿಭಾಗದ ಡಿವೈಎಸ್ಪಿ ಶಂಕಗೌಡ ಅಣ್ಣಾ ಸಾಹೇಬ್ ಪಾಟೀಲ್, ದೊಡ್ಡಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ ಇದ್ದರು.ಹಿಂಸೆಗೊಳಗಾದ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಿಕೌಟುಂಬಿಕ ಹಿಂಸೆಗೊಳಗಾದ ಮಹಿಳೆಯರಿಗೆ ಸಕಾಲದಲ್ಲಿ ಆಪ್ತ ಸಮಾಲೋಚನೆ ನಡೆಸಿ ಆತ್ಮಸ್ಥೈರ್ಯ ತುಂಬಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ, ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ ನ್ಯಾಯ ಒದಗಿಸಬೇಕು ಎಂದು ಡೀಸಿ ಡಾ.ಎನ್. ಶಿವಶಂಕರ್ ಹೇಳಿದರು.ಅಪೌಷ್ಟಿಕತೆಯಿಂದ ಬಳಲುತ್ತಿರುವ ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಪೋಷಣ್ ಅಭಿಯಾನದಡಿ ಪೌಷ್ಟಿಕ ಆಹಾರ ನೀಡಿ ಅವರನ್ನು ಸದೃಢರನ್ನಾಗಿಸಬೇಕು. ಐ.ಸಿ.ಡಿ.ಎಸ್ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯನ್ನು ಅಪೌಷ್ಟಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು.
ಡಾ.ಎನ್. ಶಿವಶಂಕರ್ ಜಿಲ್ಲಾಧಿಕಾರಿ