ಮುಂಗಾರು ಪೂರ್ವ ಮಳೆ ವಿಪತ್ತು ನಿರ್ವಹಣೆಗೆ ಕಾರ್ಯತಂತ್ರ

| Published : May 21 2024, 12:38 AM IST / Updated: May 21 2024, 02:50 PM IST

ಸಾರಾಂಶ

ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಪ್ರದೇಶಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿ ನೀರು ಪೂರೈಸಲು ಮೊದಲ ಆದ್ಯತೆ ನೀಡಲಾಗಿದೆ. ಅವಶ್ಯವಿದ್ದಲ್ಲಿ ಖಾಸಗಿ ಟ್ಯಾಂಕರ್ ಗಳ ಮೂಲಕ ನೀರನ್ನು ಪೂರೈಸಲು ಕ್ರಮ ವಹಿಸಿ. ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಜಿಲ್ಲಾಡಳಿತ ಗಮನಕ್ಕೆ ತರಬೇಕು.

 ದೊಡ್ಡಬಳ್ಳಾಪುರ : ಮುಂಗಾರು ಪೂರ್ವ ಮಳೆಯಿಂದಾಗುವ ವಿಪತ್ತು ನಿರ್ವಹಿಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ನಡೆದ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಮಳೆಯ ಸಿದ್ಧತೆ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಉತ್ತಮ ಮಳೆಯಾಗುತ್ತಿದ್ದು, ರೈತರ ಜಮೀನುಗಳಿಗೆ ಹಾಗೂ ಜನನಿಬಿಡ ಪ್ರದೇಶಗಳಿಗೆ ನೀರು ನುಗ್ಗುವುದನ್ನು ತಪ್ಪಿಸಲು ಮಳೆ ನೀರು ಸರಾಗವಾಗಿ ಹರಿದು ಹೋಗಲು ಜಿಲ್ಲೆಯ ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಚರಂಡಿ, ರಾಜಕಾಲುವೆಗಳ ತ್ಯಾಜ್ಯವನ್ನು ಒಂದು ವಾರದೊಳಗೆ ತೆರವುಗೊಳಿಸಿ ವರದಿ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನಿಗಾ:

ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿ ನೀರು ಪೂರೈಸಲು ಮೊದಲ ಆದ್ಯತೆ ನೀಡಲಾಗಿದೆ. ಅವಶ್ಯವಿದ್ದಲ್ಲಿ ಖಾಸಗಿ ಟ್ಯಾಂಕರ್ ಗಳ ಮೂಲಕ ನೀರನ್ನು ಪೂರೈಸಲು ಕ್ರಮ ವಹಿಸಿ. ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಜಿಲ್ಲಾಡಳಿತ ಗಮನಕ್ಕೆ ತರಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ ಎಂದು ಹೇಳಿದರು.

ಬಿತ್ತನೆ ಬೀಜ, ರಸಗೊಬ್ಬರ ವ್ಯವಸ್ಥಿತ ಪೂರೈಕೆ:

ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದು ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ರೈತರಿಗೆ ಸಿಗುವಂತೆ ಕ್ರಮ ಕೈಗೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

15 ಹೆಕ್ಟೇರ್ ಬೆಳೆ ನಾಶ:

ಮುಂಗಾರು ಪೂರ್ವ ಮಳೆಯಿಂದ 14.92 ಹೆಕ್ಟರ್ ತೋಟಗಾರಿಕೆ ಬೆಳೆ ನಾಶವಾಗಿದೆ. ಪ್ರಮುಖವಾಗಿ ಬಾಳೆ, ಮಾವು, ತರಕಾರಿ ಬೆಳೆ ಹಾಳಾಗಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕರು ಮಾಹಿತಿ ನೀಡಿದರು.

ಬರ ಪರಿಹಾರ ಹಣ ಅರ್ಹ ರೈತರಿಗೆ ನೀಡಲಾಗಿದೆ. ಬೆಳೆ ನಷ್ಟವಾಗಿರುವ ಪ್ರದೇಶಗಳಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ವರದಿ ಸಿದ್ಧಪಡಿಸಿದ ನಂತರ ಶೀಘ್ರ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್ ಎಂ, ಸೇರಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.