ವಿಘ್ನೇಶ್ ಎಂ. ಭೂತನಕಾಡು

ಕನ್ನಡಪ್ರಭ ವಾರ್ತೆ ಮಡಿಕೇರಿ

ಮಡಿಕೇರಿ ನಗರದ ಹಲವು ಕಡೆಗಳಲ್ಲಿ ಬೀದಿ ನಾಯಿ ಹಾವಳಿ ಮಿತಿ ಮೀರಿದ್ದು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಓಡಾಡಲು ಭಯದ ವಾತಾವರಣ ಉಂಟಾಗಿದೆ. ಕೂಡಲೇ ನಗರಸಭೆ ಬೀದಿ ನಾಯಿಗಳ ಹಾವಳಿ ಯಂತ್ರಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

ಈಗಾಗಲೇ ಮಡಿಕೇರಿಯ ಹಿಲ್ ರಸ್ತೆಯಲ್ಲಿ ಬೀದಿ ನಾಯಿಗಳ ದಾಳಿಗೊಳಗಾಗಿ ಮೂವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ. ನಗರಸಭೆಯ ಮಾಜಿ ಉಪಾಧ್ಯಕ್ಷರೊಬ್ಬರ ಮಗಳಿಗೂ ನಾಯಿ ಕಚ್ಚಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಎಲ್ಲೆಂದರಲ್ಲಿ ನಾಯಿಗಳು ಗುಂಪು ಗುಂಪಾಗಿ ಕಾಣಿಸಿಕೊಂಡು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಮೇಲೆ ದಾಳಿ ನಡೆಸುತ್ತಿದ್ದರೂ ನಗರಸಭೆ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಮಡಿಕೇರಿ ನಗರಾದ್ಯಂತ ಸುಮಾರು 700ಕ್ಕೂ ಅಧಿಕ ಬೀದಿ ನಾಯಿಗಳಿವೆ ಎಂದು ಅಂದಾಜಿಸಲಾಗಿದೆ. ಮಡಿಕೇರಿ ನಗರದ ಮಾರುಕಟ್ಟೆಯಲ್ಲಂತೂ ಅತಿ ಹೆಚ್ಚು ನಾಯಿಗಳಿದ್ದು, ಸಾರ್ವಜನಿಕರ ಮೇಲೆ ದಾಳಿ ನಡೆಸುತ್ತಿರುವ ದೃಶ್ಯಗಳು ಸಾಮಾನ್ಯವಾಗಿದೆ. ಇದರಿಂದ ಸಾರ್ವಜನಿಕರು ಕೈಯಲ್ಲಿ ಕೋಲು ಹಿಡಿದುಕೊಂಡು ನಡೆದಾಡಬೇಕಾದ ಪರಿಸ್ಥಿತಿ ಉಂಟಾಗಿದೆ.

ನಗರದಾದ್ಯಂತ ಬೀದಿನಾಯಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ನಾಯಿ ಕಡಿತದ ಪ್ರಕರಣಗಳೂ ಹೆಚ್ಚುತ್ತಿವೆ. ಹೊಟೇಲ್, ಮಾಂಸದಂಗಡಿಗಳು ಹಾಗೂ ಬಸ್ ನಿಲ್ದಾಣಗಳ ಬಳಿ ನಾಯಿಗಳ ಗುಂಪು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಸವಾರರಿಗೆ ಕಿರಿಕಿರಿಯಾಗುತ್ತಿದೆ. ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಂತಾನಶಕ್ತಿ ಹರಣ ಚಿಕಿತ್ಸೆ ನಡೆದಿಲ್ಲ. ಇದರಿಂದ ನಾಯಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ನಗರಸಭೆ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವಲ್ಲಿ ಹಾಗೂ ಸಂತಾನಶಕ್ತಿ ಹರಣ ಚಿಕಿತ್ಸೆ ಮುಂದುವರಿಸುವಲ್ಲಿ ವಿಫಲವಾಗಿದೆ. ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಮತ್ತು ಸಾರ್ವಜನಿಕ ಸುರಕ್ಷತೆಗಾಗಿ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.


ಶಾಲೆಗೆ ತೆರಳುವ ಮಕ್ಕಳು ಹಾಗೂ ಆಸ್ಪತ್ರೆಗೆ ಹೋಗುವ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಾಯಿಗಳ ಕಡಿತದ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ಆತಂಕದಲ್ಲೇ ದಿನ ಕಳೆಯಬೇಕಾಗಿದೆ.

ಟೆಂಡರ್ ಆಗಿದೆ, ಪರಿಹಾರ ಯಾವಾಗ?: ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವ ಸಲುವಾಗಿ ನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಲು ನಗರಸಭೆಯಿಂದ ಟೆಂಡರ್ ಕರೆಯಲಾಗಿದೆ. ಈ ಹಿಂದೆ 3-4 ಬಾರಿ ಟೆಂಡರ್ ಕರೆದರೂ ಯಾವುದೇ ಪ್ರಯೋಜನ ಆಗಿಲ್ಲ. ಇದೀಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆದಷ್ಟು ಬೇಗ ನಾಯಿಗಳ ಹಾವಳಿ ನಿಯಂತ್ರಿಸುವುದಾಗಿ ನಗರಸಭೆಯ ಪೌರಾಯುಕ್ತರು ಸ್ಪಷ್ಟನೆ ನೀಡಿದ್ದು, ಯಾವಾಗ ಈ ಕೆಲಸ ಆರಂಭ ಆಗಲಿದೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ನಗರದ ಜನರ ಹಿತ ದೃಷ್ಟಿಯಿಂದ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ನಗರಸಭೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ನಾಯಿ ದಾಳಿಗೊಳಗಾಗಿ ಅಪಾಯ ಎದುರಾಗುವ ಸಾಧ್ಯತೆ ಇದೆ. ನಗರಸಭೆ ಗಂಭೀರವಾಗಿ ಪರಿಗಣಿಸಬೇಕು. -ಸುನೀಲ್ ಸುಬ್ರಮಣಿ, ಮಾಜಿ ವಿಧಾನ ಪರಿಷತ್ ಸದಸ್ಯರು *ಬೀದಿ ನಾಯಿಗಳನ್ನು ಸೆರೆ ಹಿಡಿದು, ಶೆಲ್ಟರ್ ನಲ್ಲಿ ಹಾಕಬೇಕೆಂದು ಸುಪ್ರೀಂ ಕೋರ್ಟ್ ಆದೇಶ ಮಾಡಿತ್ತು. ಆದರೆ ಈ ಆದೇಶ ಈಗಾಗಲೇ ಹಿಂಪಡೆದಿದೆ. ಇದರಿಂದ ನಗರದಲ್ಲಿನ ನಾಯಿಗಳಿ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಿಸುವ ಸಲುವಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆದಷ್ಟು ಬೇಗ ನಾಯಿಗಳ ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು. -ರಮೇಶ್, ಪೌರಾಯುಕ್ತ ಮಡಿಕೇರಿ ನಗರಸಭೆ