ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಕೀಲರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅವರಿಗೆ ಸೂಕ್ತ ರಕ್ಷಣೆ ಒದಗಿಸುವಲ್ಲಿ ಸರಕಾರ ವಿಫಲವಾಗಿದೆ.
ವಕೀಲರಿಂದ ನ್ಯಾಯಾಲಯದ ಕಲಾಪಗಳ ಬಹಿಷ್ಕಾರ । ಗ್ರೇಡ್-2 ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಕೆ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರರಾಜ್ಯದಲ್ಲಿ ವಕೀಲರ ಮೇಲೆ ನಡೆಯುತ್ತಿರುವ ಮಾರಣಾಂತಿಕ ಹಲ್ಲೆ ಪ್ರಕರಣಗಳನ್ನು ಖಂಡಿಸಿ, ವಕೀಲರ ಸಂರಕ್ಷಣಾ ಕಾಯ್ದೆ-2023 ಅನ್ನು ಮತ್ತಷ್ಟು ಬಲಿಷ್ಠಗೊಳಿಸುವಂತೆ ಆಗ್ರಹಿಸಿ ವಕೀಲರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು.
ವಕೀಲರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಅಭಿಲಾಷ್ ಅವರ ನೇತೃತ್ವದಲ್ಲಿ ನ್ಯಾಯಾಲಯದ ಆವರಣದಿಂದ ಅಂಬೇಡ್ಕರ್ ವೃತ್ತದ ಮೂಲಕ ಬಿ.ಬಿ. ರಸ್ತೆಯಲ್ಲಿ ಮೆರವಣಿಗೆ ನಡೆಸಿದ ವಕೀಲರು, ಬಳಿಕ ತಾಲೂಕು ಕಚೇರಿ ಆವರಣದಲ್ಲಿ ಜಮಾಯಿಸಿ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ಖಂಡಿಸಿದ ಅವರು, ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಗ್ರೇಡ್-2 ತಹಸೀಲ್ದಾರ್ ಮೂಲಕ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಬಲಿಷ್ಠಗೊಳಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಕೀಲರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅವರಿಗೆ ಸೂಕ್ತ ರಕ್ಷಣೆ ಒದಗಿಸುವಲ್ಲಿ ಸರಕಾರ ವಿಫಲವಾಗಿದೆ. ಇಂತಹ ಅಹಿತಕರ ಘಟನೆಗಳನ್ನು ತಡೆಗಟ್ಟಲು ವಕೀಲರ ಸಂರಕ್ಷಣಾ ಕಾಯ್ದೆ-2023 ಅನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು. ವಕೀಲರ ಮೇಲೆ ಹಲ್ಲೆ ನಡೆದ ಸಂದರ್ಭದಲ್ಲಿ ಪೊಲೀಸ್ ಠಾಣೆಗಳಲ್ಲಿ ದಾಖಲಿಸುವ ಎಫ್ಐಆರ್ನಲ್ಲಿ ಈ ಕಾಯ್ದೆಯ ಕಲಂಗಳನ್ನು ಕಡ್ಡಾಯವಾಗಿ ನಮೂದಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಅಲ್ಲದೆ, ಸಾರ್ವಜನಿಕ ಅಧಿಕಾರಿಗಳ ಮೇಲೆ ಹಲ್ಲೆ ನಡೆದ ಸಂದರ್ಭದಲ್ಲಿ ಅನ್ವಯಿಸುವ ಐಪಿಸಿ ಸೆಕ್ಷನ್ 353 ಹಾಗೂ ಪ್ರಸ್ತುತ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 132ರ ಅಡಿಯಲ್ಲಿ ದೊರೆಯುವ ಕಾನೂನು ರಕ್ಷಣೆ ವಕೀಲರಿಗೂ ಅನ್ವಯವಾಗುವಂತೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.ಮುಂದಿನ ದಿನಗಳಲ್ಲಿ ವಕೀಲರ ಮೇಲಿನ ಹಲ್ಲೆ ಪ್ರಕರಣಗಳು ಮರುಕಳಿಸಿದರೆ ರಾಜ್ಯದ ಜಿಲ್ಲಾ ಮತ್ತು ತಾಲೂಕು ವಕೀಲರ ಸಂಘಗಳು ಹಾಗೂ ರಾಜ್ಯ ವಕೀಲರ ಪರಿಷತ್ ವತಿಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ವಕೀಲ ಆರ್. ಮಟಮಪ್ಪ, ದೇಶವನ್ನು ಕಾಯುವ ಸೈನಿಕರು, ಅನ್ನ ನೀಡುವ ರೈತರು ಹಾಗೂ ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸಲು ಶ್ರಮಿಸುವ ವಕೀಲರಿಗೆ ರಕ್ಷಣೆ ನೀಡುವ ಜವಾಬ್ದಾರಿ ಸರಕಾರಗಳ ಮೇಲಿದೆ. ಯಾರಿಗಾದರೂ ಸಮಸ್ಯೆ ಎದುರಾದಾಗ ನ್ಯಾಯಕ್ಕಾಗಿ ವಕೀಲರ ಅಗತ್ಯವಿರುತ್ತದೆ. ಆದರೆ, ವಕೀಲರ ಮೇಲೆಯೇ ನಿರಂತರವಾಗಿ ಹಲ್ಲೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿ. ವಕೀಲ ವೃತ್ತಿಯ ಮಹತ್ವವನ್ನು ಸರಕಾರ ಮರೆಯಬಾರದು. ಕೂಡಲೇ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಬಲಿಷ್ಠಗೊಳಿಸಿ ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಅಭಿಲಾಷ್, ಉಪಾಧ್ಯಕ್ಷ ಮುನಿರಾಜು, ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಖಜಾಂಚಿ ಅಯ್ಯುಬ್ ಖಾನ್, ಚಂದ್ರಶೇಖರ್, ಮುನಿರಾಜು, ಪ್ರವೀಣ್ ಕುಮಾರ್, ಶ್ರೀನಿವಾಸ್, ತಮ್ಮೆಗೌಡ, ಸೌಜನ್ಯಗಾಂಧಿ, ಮಂಜುನಾತರೆಡ್ಡಿ, ಮುನಿರಾಜು ಸೇರಿದಂತೆ ಮತ್ತಿತರ ವಕೀಲರು ಇದ್ದರು.ಸಿಕೆಬಿ-2 ವಕೀಲರ ಸಂರಕ್ಷಣಾ ಕಾಯ್ದೆ ಬಲಿಷ್ಠಗೊಳಿಸಲು ಆಗ್ರಹಿಸಿ ವಕೀಲರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಅಭಿಲಾಷ್ ನೇತೃತ್ವದಲ್ಲಿ ಗ್ರೇಡ್-2 ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.