ಕನ್ನಡಪ್ರಭ ವಾರ್ತೆ ಬಾಗಲಕೋಟೆ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಂದು ಬೂತ್‌ನಲ್ಲಿಯೂ ಸಂಘಟನೆ ಬಲಪಡಿಸಿ, ಹಿಂದುಳಿದ ವರ್ಗಗಳ ಕಾರ್ಯಕರ್ತರನ್ನು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಡಿ.ಟಿ.ಶ್ರೀನಿವಾಸ ಹೇಳಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಂದು ಬೂತ್‌ನಲ್ಲಿಯೂ ಸಂಘಟನೆ ಬಲಪಡಿಸಿ, ಹಿಂದುಳಿದ ವರ್ಗಗಳ ಕಾರ್ಯಕರ್ತರನ್ನು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಡಿ.ಟಿ.ಶ್ರೀನಿವಾಸ ಹೇಳಿದರು.ಬಾಗಲಕೋಟೆಯಲ್ಲಿ ನಡೆದ ಹಿಂದುಳಿದ ವರ್ಗಗಳ ವಿಭಾಗದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ಸ್ಪಂದಿಸುವುದರ ಜೊತೆಗೆ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಯುವಕರು, ಮಹಿಳೆಯರು ಹಾಗೂ ಹೊಸ ಕಾರ್ಯಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಸಂಘಟನೆಯೊಂದಿಗೆ ಜೋಡಿಸಬೇಕು ಎಂದು ಕರೆ ನೀಡಿದರು.ಶಾಸಕ ಉಮೇಶ ಮೇಟಿ ಮಾತನಾಡಿ, ಕಾಂಗ್ರೆಸ್ ಪಕ್ಷವು ಸದಾ ಸಾಮಾಜಿಕ ನ್ಯಾಯ ಹಾಗೂ ಸಮಾನತೆಯ ಪರವಾಗಿ ನಿಂತಿರುವ ಪಕ್ಷ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರಗಳು ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೆ ತಂದಿವೆ. ಪಕ್ಷದ ತತ್ವ-ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ ಎಂದು ಹೇಳಿದರು.ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ಬ್ಲಾಕ್ ಹಾಗೂ ಬೂತ್ ಮಟ್ಟದಲ್ಲಿ ನಿರಂತರವಾಗಿ ಸಭೆಗಳನ್ನು ನಡೆಸಬೇಕು. ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಅಗತ್ಯ ಮಾರ್ಗದರ್ಶನ ನೀಡುವ ಮೂಲಕ ಸಂಘಟನೆಯನ್ನು ಚುರುಕುಗೊಳಿಸಲಾಗುವುದು ಎಂದು ಶಾಸಕ ಉಮೇಶ ಮೇಟಿ ಹೇಳಿದರು.ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಯಾನಂದ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸಲು ಆದ್ಯತೆ ನೀಡಲಾಗುತ್ತಿದೆ. ಹಿಂದುಳಿದ ವರ್ಗಗಳ ವಿಭಾಗದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರತಿ ಬೂತ್‌ಗೆ ಭೇಟಿ ನೀಡಿ ಜನರೊಂದಿಗೆ ನೇರ ಸಂಪರ್ಕ ಸಾಧಿಸಬೇಕು. ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಪ್ರತಿಯೊಬ್ಬಕಾರ್ಯಕರ್ತರೂ ಸಕ್ರಿಯವಾಗಿ ಭಾಗವಹಿಸುವಂತೆ ತಿಳಿಸಿದರು.ಮುಂದಿನ ದಿನಗಳಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ವಿಸ್ತರಣೆ, ಯುವಕರು ಮತ್ತು ಮಹಿಳೆಯರ ಸೇರ್ಪಡೆ, ಹಿಂದುಳಿದ ವರ್ಗಗಳ ಮುಖಂಡರನ್ನು ಗುರುತಿಸಿ ಜವಾಬ್ದಾರಿ ನೀಡುವುದು ಹಾಗೂ ಪಕ್ಷದ ಜನಪರ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವುದು ಸೇರಿದಂತೆ ವಿವಿಧ ಸಂಘಟನಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಎಂದರು.ಸಭೆಯಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಮುದಕಪ್ಪ ಅಂಬಿಗೇರ, ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ನಾಗರಾಜ ಹದ್ಲಿ, ರವೀಂದ್ರ ಕಲಬುರ್ಗಿ, ಅಕ್ಬರ ಮುಲ್ಲಾ, ಅಬ್ದುಲರಜಾಕ ಬೇಣೂರ, ಶ್ರೀನಿವಾಸ ಬಳ್ಳಾರಿ, ಪ್ರಭು ಹಳ್ಳೂರ, ಅಭಿಷೇಕ ತಳ್ಳಿಕೇರಿ, ವಿಲಾಸ ಮೆಣಸಗಿ, ಹನುಮಂತ ಗೊರವರ, ಅಮರೇಶ ಮದ್ದಿಕಟ್ಟಿ, ಕೃಷ್ಣ ಜಡ್ಡಿನ್ನವರ, ನಾಗಪ್ಪ ಇವನ್ನವರ, ಶಂಕರ ಕನಗೀರಿ, ನಿಂಗಣ್ಣ ಮಂಟೂರ, ಪಡಿಯಪ್ಪ ಕರಿಗಾರ, ಸಂಗಪ್ಪ ಅಮಾತಿ, ಸುಧಾ ಪಾಟೀಲ, ಮಂಜುಳಾ ಭೂಸಾರೆ, ರೇಣುಕಾ ನಾರಾಯಣಕರ, ಮುಮತಾಜ ಬೈರಕಿದಾರ, ಜೈಬುನಿ ಇಲಕಲ್ಲ ಹಾಗೂ ಪದಾಧಿಕಾರಿಗಳು, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
------ಕೋಟ್‌ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಕಾರ್ಯಕರ್ತರು. ಬೂತ್ ಮಟ್ಟದಲ್ಲಿ ಸಂಘಟನೆ ಬಲಿಷ್ಠವಾದರೆ ಮಾತ್ರ ಪಕ್ಷ ಮತ್ತಷ್ಟು ಸದೃಢವಾಗಲಿದೆ. ಹೀಗಾಗಿ, ಪ್ರತಿಯೊಂದು ಬೂತ್, ವಾರ್ಡ್ ಹಾಗೂ ಬ್ಲಾಕ್ ಮಟ್ಟದಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರನ್ನು ಸಂಘಟಿಸಿ, ಅವರಿಗೆ ಸೂಕ್ತ ಜವಾಬ್ದಾರಿಗಳನ್ನು ನೀಡಬೇಕು.ಡಿ.ಟಿ.ಶ್ರೀನಿವಾಸ, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ