ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಕಲಿ ವಿಕಲಚೇತನ ಪ್ರಮಾಣಪತ್ರ ಪಡೆದು ಸರ್ಕಾರಕ್ಕೆ ವಂಚಿಸುವ ವ್ಯಕ್ತಿಗಳು ಮತ್ತು ಸುಳ್ಳು ಪ್ರಮಾಣಪತ್ರ ನೀಡಿದ ವೈದ್ಯರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ ಹಾಗೂ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಕಲಚೇತನರ ಮೀಸಲಾತಿಯನ್ನು ಅರ್ಹರಲ್ಲದವರು ಕಿತ್ತುಕೊಳ್ಳುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇಂತಹ ವಂಚನೆಗಳನ್ನು ತಡೆಯಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ. ವಿಕಲಚೇತನರ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಡಳಿತ ಬದ್ಧವಾಗಿದೆ. ಯಾವುದೇ ಅಕ್ರಮಗಳು ಕಂಡುಬಂದಲ್ಲಿ ಲಿಖಿತ ದೂರು ನೀಡಿದರೆ, ಸಂಶಯಾಸ್ಪದ ಪ್ರಕರಣಗಳಲ್ಲಿ ವಿಕಲಚೇತನ ಪ್ರಮಾಣ ಪತ್ರ ಪಡೆದವರನ್ನು ತಜ್ಞ ವೈದ್ಯರ ಸಮಿತಿಯಿಂದ ಮರು ತಪಾಸಣೆಗೆ ಒಳಪಡಿಸಲಾಗುವುದು. ಒಂದು ವೇಳೆ ಅಕ್ರಮ ನಡೆದಿರುವುದು ಕಂಡುಬಂದರೆ ಯಾವುದೇ ಮುಲಾಜು ತೋರದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.ವಿಕಲಚೇತನರು ಸೌಲಭ್ಯಗಳಿಗಾಗಿ ಕಚೇರಿಗಳಿಗೆ ಅಲೆಯಬಾರದು. ಅವರ ಸಮಸ್ಯೆಗಳನ್ನು ಆಲಿಸಿ, ದಾಖಲೆಗಳನ್ನು ಪರಿಶೀಲಿಸಿ ಅರ್ಹರಿಗ ತಕ್ಷಣವೇ ಸೌಲಭ್ಯ ತಲುಪಿಸುವುದು ಅಧಿಕಾರಿಗಳ ಕರ್ತವ್ಯ. ಇದರಲ್ಲಿ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
ಜಿಲ್ಲಾ ಆಸ್ಪತ್ರೆಯಲ್ಲಿ ವಿಕಲಚೇತನರು ತಪಾಸಣೆಗಾಗಿ ಗಂಟೆಗಟ್ಟಲೆ ಕಾಯುವುದನ್ನು ತಪ್ಪಿಸಲು, ಅವರಿಗೆ ವಿಶೇಷ ಆದ್ಯತೆ ನೀಡಿ, ನಿಗದಿತ ಸಮಯದಲ್ಲಿ ತಪಾಸಣೆ ಪೂರ್ಣಗೊಳಿಸಿ ಪ್ರಮಾಣಪತ್ರ ನೀಡಬೇಕು. ಜಿಲ್ಲಾ ಆಸ್ಪತ್ರೆಯ ಅಧಿಕಾರಿಗಳು ಪ್ರತಿ 15 ದಿನಕ್ಕೊಮ್ಮೆ ವಿತರಣೆಯಾದ ಮತ್ತು ಅಪ್‌ಲೋಡ್ ಆದ ಕಾರ್ಡ್ಗಳ ಬಗ್ಗೆ ವರದಿ ನೀಡಬೇಕು ಎಂದು ಸೂಚಿಸಿದರು.
*ವಿಕಲಚೇತನರ ಅನುದಾನ ಬಳಕೆಗೆ ನಿರ್ದೇಶನ:
ಗ್ರಾಮ ಪಂಚಾಯತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿಕಲಚೇತನರಿಗಾಗಿ ಮೀಸಲಿರುವ ಶೇ.5% ಅನುದಾನ ಮತ್ತು ಯೋಜನೆಗಳ ವಿವರವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಪಿಡಿಒಗಳು ವಿಕಲಚೇತರೊಂದಿಗೆ ಸಂಯಮದಿಂದ ವರ್ತಿಸಬೇಕು ಎಂದರು.ಕೆಎಸ್‌ಆರ್‌ಟಿಸಿ ಬಸ್ ಪಾಸ್ ಪಡೆಯಲು ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು 50 ರು.ಶುಲ್ಕ ನಿಗದಿ ಮಾಡಲಾಗಿದೆ. ಆದರೆ ಕೆಲವೆಡೆ 100 ರು. ಶುಲ್ಕವನ್ನು ಪಡೆಯುತ್ತಿದ್ದಾರೆ ಎಂದು ವಿಕಲಚೇತನರು ದೂರಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿರಿದ್ದರು.
ಮಾಶಾಸನ ವಿಳಂಬ ಸರಿಪಡಿಸಲು ತಾಕೀತು:
ಚಿತ್ರದುರ್ಗ ತಾಲೂಕು ವ್ಯಾಪ್ತಿಯಲ್ಲಿ ಮಾಶಾಸನ ವಿಳಂಬವಾಗುತ್ತಿರುವ ಕುರಿತು ವಿಕಲಚೇತನರು ಸಭೆಯಲ್ಲಿ ಅಹವಾಲು ತೋಡಿಕೊಂಡರು. ಇದಕ್ಕೆ ಸ್ಪಂದಿಸಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಂಬಂದಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ, ವಾರದಲ್ಲಿ ಸಮಸ್ಯೆ ಪರಿಹರಿಸುವಂತೆ ತಾಕೀತು ಮಾಡಿದರು.