ವಿಕೋಪದಿಂದ ಸಾವು, ನೋವು ಸಂಭವಿಸಿದರೆ ಕ್ರಮ: ಕೃಷ್ಣ ಭೈರೇಗೌಡ

| Published : Aug 18 2024, 01:51 AM IST

ವಿಕೋಪದಿಂದ ಸಾವು, ನೋವು ಸಂಭವಿಸಿದರೆ ಕ್ರಮ: ಕೃಷ್ಣ ಭೈರೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸದೆ ಸಾವು ನೋವು ಉಂಟಾದರೆ ಅವುಗಳ ಜವಾಬ್ದಾರಿ ವಹಿಸಿರುವವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷ್ಣ ಬೈರೇಗೌಡ ಎಚ್ಚರಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ರಾಜ್ಯದಲ್ಲಿ ಭಾರಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ವಿಡಿಯೊ ಕಾನ್ಫೆರೆನ್ಸ್ ನಡೆಯಿತು.

ಈ ಸಂದರ್ಭ ಮಾತನಾಡಿದ ಸಚಿವರು, ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆಯಿಂದ ಹಲವಾರು ಹಾನಿ ಉಂಟಾಗಿದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿದರು.

ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಸ್ಥಾಪಿಸಬೇಕು. ಶಿಥಿಲ ಅವಸ್ಥೆಯಲ್ಲಿರುವಂತಹ ಶಾಲೆಗಳು, ಅಂಗನವಾಡಿಗಳನ್ನು ಗುರುತಿಸಿ ಕೂಡಲೆ ಸ್ಥಳಾಂತರಿಸಬೇಕು ಹಾಗೂ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಶಿಥಿಲಾವಸ್ಥೆಯಲ್ಲಿರುವ ಕಾಲುಸಂಕ, ಸೇತುವೆಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಈಗಾಗಲೇ ರಾಜ್ಯದಲ್ಲಿ ನೀರಿನಿಂದ ಕೊಚ್ಚಿ ಹೋಗಿ ಸಾವು ನೋವು ಉಂಟಾದ ಘಟನೆಗಳು ಹಲವಾರು ನಡೆದಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಯಾವುದೇ ರೀತಿಯಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸದೆ ಸಾವು ನೋವು ಉಂಟಾದರೆ ಅವುಗಳ ಜವಾಬ್ದಾರಿ ವಹಿಸಿರುವವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷ್ಣ ಬೈರೇಗೌಡ ಎಚ್ಚರಿಸಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದಂತೆ ಕೂಳೂರು ಸೇತುವೆ ಹಾಗೂ ಕೆತ್ತಿಕಲ್ಲು ಗುಡ್ಡದಿಂದ ಮುಂಬರುವ ದಿನಗಳಲ್ಲಿ ಉಂಟಾಗಬಹುದಾದ ಅಪಾಯದ ಬಗ್ಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಶೀಘ್ರದಲ್ಲೇ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳುವಂತೆ ಹಾಗೂ ಉನ್ನತ ಮಟ್ಟದ ತಾಂತ್ರಿಕತೆ ಬಳಸಿಕೊಂಡು ಕ್ರಮ ಕೈಗೊಳ್ಳಲು ಸೂಚಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಜಿ. ಸಂತೋಷ್ ಕುಮಾರ್, ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮಹಾಪಾತ್ರ, ಮಂಗಳೂರು ಎಸಿ ಹರ್ಷವರ್ಧನ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.