ತಾಲೂಕಿನ ಎಲ್ಲ ಸಾರ್ವಜನಿಕ ಗಣೇಶೋತ್ಸವ ಆಯೋಜಕರು ನಿಗದಿತ ಅವಧಿಯೊಳಗೆ ಅಗತ್ಯ ಅನುಮತಿಗಳನ್ನು ಪಡೆದುಕೊಂಡು, ಇಲಾಖೆಗಳು ನೀಡಿರುವ ಸುರಕ್ಷತಾ ಸೂಚನೆಗಳನ್ನು ಪಾಲಿಸುವ ಮೂಲಕ ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಗಣೇಶೋತ್ಸವ ಆಚರಿಸಬೇಕು ಎಂದು ಡಿವೈಎಸ್ಪಿ ಮಲ್ಲೇಶ್ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಹೊಸಕೋಟೆ

ತಾಲೂಕಿನಾದ್ಯಂತ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಆಯೋಜಕರು ಸರ್ಕಾರ ಹಾಗೂ ವಿವಿಧ ಇಲಾಖೆಗಳು ಸೂಚಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಡಿವೈಎಸ್ಪಿ ಮಲ್ಲೇಶ್ ಸೂಚಿಸಿದರು.

ನಗರದ ಖಾಸಗಿ ಸಭಾ ಭವನದಲ್ಲಿ ಗಣೇಶೋತ್ಸವದ ಹಿನ್ನೆಲೆ ಪೊಲೀಸ್ ಇಲಾಖೆ, ನಗರಸಭೆ, ಬೆಸ್ಕಾಂ, ಅಗ್ನಿಶಾಮಕ ಇಲಾಖೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಾರ್ವಜನಿಕ ಗಣೇಶೋತ್ಸವ ಆಯೋಜಕರ ಸಭೆ ನಡೆಸಿ, ಸುರಕ್ಷತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಿ ಮಾತನಾಡಿದರು.

ಗಣೇಶೋತ್ಸವ ಆಚರಣೆಗೆ ಅನುಮತಿ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಲು ನಗರಸಭೆ ಹಾಗೂ ಸಂಬಂಧಪಟ್ಟ ಸ್ಥಳಗಳಲ್ಲಿ ಸಿಂಗಲ್ ವಿಂಡೋ ವ್ಯವಸ್ಥೆ ಕಲ್ಪಿಸಲಾಗಿದೆ. ಪೊಲೀಸ್, ನಗರಸಭೆ, ಬೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಈ ವ್ಯವಸ್ಥೆಯಲ್ಲಿ ಲಭ್ಯವಿದ್ದು, ಆಯೋಜಕರು ಒಂದೇ ಸ್ಥಳದಲ್ಲಿ ಅರ್ಜಿ ಸಲ್ಲಿಸಿ ಅಗತ್ಯ ಅನುಮತಿಗಳನ್ನು ಪಡೆಯಬಹುದಾಗಿದೆ. ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಪ್ರತಿಷ್ಠಾಪನೆಯಿಂದ ವಿಸರ್ಜನೆಯವರೆಗೆ ಆಯೋಜಕರು ನಿರಂತರವಾಗಿ ಭದ್ರತಾ ವ್ಯವಸ್ಥೆಯ ಮೇಲೆ ನಿಗಾ ವಹಿಸಬೇಕು. ಅನುಮತಿ ಪಡೆಯುವ ಸಂದರ್ಭದಲ್ಲಿ ತಿಳಿಸಿರುವ ಸ್ಥಳದಲ್ಲಿಯೇ ಮೆರವಣಿಗೆ ಹಾಗೂ ವಿಸರ್ಜನೆ ನಡೆಸಬೇಕು. ಅನುಮತಿ ಪಡೆದ ಬಳಿಕ ಸ್ಥಳ ಅಥವಾ ದಿನಾಂಕ ಬದಲಾವಣೆ ಮಾಡಬಾರದು. ಅನಿವಾರ್ಯ ಪರಿಸ್ಥಿತಿಯಲ್ಲಿ ಬದಲಾವಣೆ ಮಾಡಬೇಕಾದರೆ ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆಯಬೇಕು ಎಂದು ಸೂಚಿಸಿದರು.

ಗಣೇಶೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪ್ರಸಾದ ಹಾಗೂ ಆಹಾರ ವಿತರಿಸುವ ಆಯೋಜಕರು ಆಹಾರ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಆಹಾರ ಇಲಾಖೆಯ ಅಧಿಕಾರಿಗಳು ಆಹಾರದ ಗುಣಮಟ್ಟವನ್ನು ಪರಿಶೀಲಿಸುವಂತೆ ತಿಳಿಸಿದರು.

ಡಿಜೆ, ಪಟಾಕಿಗೆ ನಿರ್ಬಂಧ: ಸರ್ಕಾರದ ಆದೇಶದ ಹಿನ್ನೆಲೆ ಗಣೇಶೋತ್ಸವದಲ್ಲಿ ಡಿಜೆ ಹಾಗೂ ಹೆಚ್ಚಿನ ಶಬ್ದ ಉಂಟುಮಾಡುವ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ. ಪಟಾಕಿ ಸಿಡಿಸುವುದಕ್ಕೂ ನಿರ್ಬಂಧವಿದ್ದು, ಆಯೋಜಕರು ಇದನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಗದಿತ ಸಮಯದೊಳಗೆ ಗಣೇಶ ಮೂರ್ತಿಯ ವಿಸರ್ಜನೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಗ್ರಾಪಂ ಹಾಗೂ ನಗರಸಭೆ ವತಿಯಿಂದ ನಿಗದಿಪಡಿಸಿರುವ ವಿಸರ್ಜನಾ ಸ್ಥಳಗಳಲ್ಲಿಯೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕು. ವಿಸರ್ಜನಾ ಸ್ಥಳಗಳಲ್ಲಿ ಬೆಳಕಿನ ವ್ಯವಸ್ಥೆ, ಕ್ರೇನ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದ್ದು, ಆಯೋಜಕರು ಅವುಗಳನ್ನು ಬಳಸಿಕೊಳ್ಳಬೇಕು. ಯಾವುದೇ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ, ಗಲಭೆಗೆ ಕಾರಣವಾಗುವ ಹೇಳಿಕೆಗಳು ಅಥವಾ ಇನ್ನೊಬ್ಬರಿಗೆ ತೊಂದರೆಯಾಗುವ ರೀತಿಯಲ್ಲಿ ಕಾರ್ಯಕ್ರಮ ನಡೆಸುವುದು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಸುಳ್ಳು ಮಾಹಿತಿಗಳು ಅಥವಾ ಪ್ರಚೋದನಕಾರಿ ಪೋಸ್ಟ್ಗಳನ್ನು ಪ್ರಕಟಿಸುವುದು ಹಾಗೂ ಅವುಗಳನ್ನು ಹಂಚಿಕೆ ಅಥವಾ ಫಾರ್ವರ್ಡ್ ಮಾಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ತಾಲೂಕಿನ ಎಲ್ಲ ಸಾರ್ವಜನಿಕ ಗಣೇಶೋತ್ಸವ ಆಯೋಜಕರು ನಿಗದಿತ ಅವಧಿಯೊಳಗೆ ಅಗತ್ಯ ಅನುಮತಿಗಳನ್ನು ಪಡೆದುಕೊಂಡು, ಇಲಾಖೆಗಳು ನೀಡಿರುವ ಸುರಕ್ಷತಾ ಸೂಚನೆಗಳನ್ನು ಪಾಲಿಸುವ ಮೂಲಕ ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಗಣೇಶೋತ್ಸವ ಆಚರಿಸಬೇಕು ಎಂದು ಡಿವೈಎಸ್ಪಿ ಮಲ್ಲೇಶ್ ಮನವಿ ಮಾಡಿದರು.

ನಗರಸಭೆ ಪೌರಾಯುಕ್ತ ನೀಲಲೋಚನ ಪ್ರಭು, ಬೆಸ್ಕಾಂ ಎಇಇ ಪುಟ್ಟಸ್ವಾಮಿ ಸೇರಿ ಪೊಲೀಸ್ ಇನ್ಸ್ ಪೆಕ್ಟರ್‌ಗಳಾದ ಬಿ.ಟಿ.ಗೋವಿಂದ್, ರಾಜಣ್ಣ, ಸುಂದರ್, ವಸಂತ್ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.