ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ

| Published : Mar 18 2024, 01:51 AM IST

ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದ್ದು, ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದ್ದು, ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣಾ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜೂ 6 ರವರೆಗೆ ನೀತಿ ಸಂಹಿತೆ:

ಚುನಾವಣಾ ಆಯೋಗ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದೆ. ಚುನಾವಣೆ ಪ್ರಕ್ರಿಯೆಯು ಮುಕ್ತಾಯಗೊಳ್ಳುವ ಜೂ. 6 ರ ವರೆಗೂ ಸದಾಚಾರ ಸಂಹಿತೆ ಜಾರಿಯಲ್ಲಿರುತ್ತದೆ. ರಾಜಕೀಯ ಪಕ್ಷಗಳು ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ನೀತಿ ಸಂಹಿತೆ ಪಾಲನೆ ಸಂಬಂಧ ನಿಗಾ ವಹಿಸಲು ವಿವಿಧ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದರು.ನಾಮಪತ್ರ ಸಲ್ಲಿಸಲು ಏ.4 ಕಡೆಯ ದಿನ:

ಮಾ. 28ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಏ. 4 ಕಡೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನಾ ಕಾರ್ಯ ಏ. 5ರಂದು ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಏ. 8 ಕೊನೆಯ ದಿನವಾಗಿದೆ. ಏ. 26ರಂದು ಮತದಾನ ನಡೆಯಲಿದೆ. ಜೂ. 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಜೂ. 6ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುತ್ತದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರದ ನಮೂನೆ-2ಎ ಜೊತೆಗೆ ತಿದ್ದುಪಡಿಯಾಗಿರುವ ನಮೂನೆ-26ರ ಅಫಿಡವಿಟ್ ಸಲ್ಲಿಸಬೇಕು. ಅಲ್ಲದೆ ಅಭ್ಯರ್ಥಿಗಳು ಸರ್ಕಾರಕ್ಕೆ ಪಾವತಿಸಬೇಕಾದ ಬಾಕಿ ಯಾವುದು ಇರುವುದಿಲ್ಲ ಎಂಬ ಬಗ್ಗೆ ದೃಢೀಕರಣ ಪತ್ರ ನೀಡಬೇಕು. ನಾಮಪತ್ರದೊಂದಿಗೆ ಇತರೆ ಸಂಬಂಧಪಟ್ಟ ಸೂಚಿಸಿರುವ ದಾಖಲಾತಿಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ತರಹದ ಧ್ವನಿವರ್ಧಕಗಳನ್ನು ಚುನಾವಣಾ ಪ್ರಚಾರಕ್ಕಾಗಿ ಬಳಸುವಂತಿಲ್ಲ. ರಾಜಕೀಯ ಪಕ್ಷಗಳು, ಸ್ಪರ್ಧಿಸುವ ಅಭ್ಯರ್ಥಿಗಳು ಸಭೆ, ಸಮಾರಂಭ ನಡೆಸಲು ಮತ್ತು ಚುನಾವಣಾ ಪ್ರಚಾರಕ್ಕಾಗಿ ಅನುಮತಿ ನೀಡುವ ಸಂಬಂಧ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ೮ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾ ಆಧಿಕಾರಿಗಳ ಕಚೇರಿಯಲ್ಲಿ ಏಕಗವಾಕ್ಷಿ ಕೇಂದ್ರ (ಸಿಂಗಲ್ ವಿಂಡೋ ಸಿಸ್ಟಮ್) ಸ್ಥಾಪಿಸಲಾಗಿದೆ. ಕನಿಷ್ಠ 3 ದಿನಗಳ ಮೊದಲು ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ ಎಂದು ತಿಳಿಸಿದರು.ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಚುನಾವಣಾ ವೆಚ್ಚದ ಗರಿಷ್ಠ ಮಿತಿ 95 ಲಕ್ಷ ರು. ಗಳಾಗಿದೆ. ಅಭ್ಯರ್ಥಿಗಳು ಪ್ರತಿದಿನ ಚುನಾವಣಾ ಖರ್ಚು ವೆಚ್ಚಗಳನ್ನು ಸಲ್ಲಿಸಬೇಕಾಗಿದೆ. ಸ್ಪರ್ಧಿಸುವ ಪ್ರತಿ ಅಭ್ಯರ್ಥಿಯು ಚುನಾವಣಾ ಫಲಿತಾಂಶ ಘೋಷಣೆಯಾದ 30 ದಿನದೊಳಗೆ ಚುನಾವಣಾ ವೆಚ್ಚಗಳ ಲೆಕ್ಕದ ಯಥಾ ಪ್ರತಿಯೊಂದನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ನಸ್ರುಲ್ಲಾ ಖಾನ್, ನಾಗಯ್ಯ, ವೃಷಭೇಂದ್ರಪ್ಪ, ಮಹದೇವಪ್ರಸಾದ್, ಎಸ್. ಮಹೇಶ್ ಗೌಡ, ಬ್ಯಾಡಮೂಡ್ಲು ಬಸವಣ್ಣ ಸಭೆಯಲ್ಲಿ ಉಪಸ್ಥಿತರಿದ್ದರು.