ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಡಿಸಿ ಪ್ರಶಾಂತಕುಮಾರ್ ಮಿಶ್ರಾ

| Published : Mar 19 2024, 12:55 AM IST

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಡಿಸಿ ಪ್ರಶಾಂತಕುಮಾರ್ ಮಿಶ್ರಾ
Share this Article
  • FB
  • TW
  • Linkdin
  • Email

ಸಾರಾಂಶ

ಸಾರ್ವಜನಿಕ ಸಭೆ, ಸಮಾರಂಭ ನಡೆಸಲು, ಸಂಚಾರಿ ವಾಹನ, ಧ್ವನಿವರ್ಧಕಗಳ ಬಳಕೆಗೆ ಕಡ್ಡಾಯವಾಗಿ ಅನುಮತಿ ಪಡಯಬೇಕು.

ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಾ.16ರಿಂದ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕ ಸಭೆ, ಸಮಾರಂಭ ನಡೆಸಲು, ಸಂಚಾರಿ ವಾಹನ, ಧ್ವನಿವರ್ಧಕಗಳ ಬಳಕೆಗೆ ಕಡ್ಡಾಯವಾಗಿ ಅನುಮತಿ ಪಡಯಬೇಕು. ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಚಿಹ್ನೆಯ ವಾಹನ, ಫ್ಲೆಕ್ಸ್ ಹಾಗೂ ಇನ್ನಿತರೆ ರಾಜಕೀಯ ಸಂಬಂಧ ಬ್ಯಾನರ್ ಗಳಿದ್ದಲ್ಲಿ ಸ್ವಯಂ ಪ್ರೇರಿತವಾಗಿ ತೆರವುಗೊಳಿಸಬೇಕು. ರಾಜಕೀಯ ಪಕ್ಷದವರು ಯಾವುದೇ ರಾಲಿ ಮಾಡಲು, ಸಭೆ, ಸಮಾರಂಭ ಮಾಡಲು ಅನುಮತಿ ಪಡೆದುಕೊಳ್ಳಬೇಕು. ಪ್ರಚಾರ ಕಾರ್ಯದಲ್ಲಿ ಯಾವುದೇ ಧಾರ್ಮಿಕ ಸಂಸ್ಥೆ, ಸ್ಥಳಗಳನ್ನು ಬಳಸುವಂತಿಲ್ಲ ಎಂದರು.18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಬಳಸಿಕೊಳ್ಳಬಾರದು. ಮದುವೆ, ಸಭೆ-ಸಮಾರಂಭಗಳಲ್ಲಿ ಮತ ಪ್ರಚಾರ ಮಾಡುವಂತಿಲ್ಲ ಎಂದು ಸೂಚಿಸಿದರು. ಲೋಕಸಭೆ ಚುನಾವಣೆಯನ್ನು ನಿಷ್ಪಕ್ಷಪಾತ, ನ್ಯಾಯಸಮ್ಮತವಾಗಿ ನಡೆಸಲು ಚುನಾವಣೆ ಆಯೋಗದ ನಿರ್ದೇಶನದ ಅನ್ವಯ ಕಾರ್ಯಚಟುವಟಿಕೆಗಳನ್ನು ನಡೆಸಿ ಜಿಲ್ಲಾಡಳಿತಕ್ಕೆ ಯಶಸ್ವಿ ಚುನಾವಣೆ ನಡೆಸಲು ಎಲ್ಲ ಪಕ್ಷದವರು ಸಹಕರಿಸಬೇಕು ಎಂದು ಮನವಿ ಮಾಡಿದರು.ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಡಿಸಿ ಮೊಹಮ್ಮದ್ ಝುಬೇರ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.