ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾದ ಮಾದರಿ ನೀತಿ ಸಂಹಿತೆಯನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗ ಜಾರಿಗೊಳಿಸಿದ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರೂ ಸಹಕರಿಸಬೇಕೆಂದು ತಿಳಿಸಿದರು.

ಎಂಸಿಸಿ ಜಿಲ್ಲಾ ನೋಡಲ್ ಅಧಿಕಾರಿ ಆಗಿರುವ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಮಾತನಾಡಿ, ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷದವರು ಸಭೆ, ರ್‍ಯಾಲಿ, ವಾಹನಗಳಿಗೆ, ತಾತ್ಕಾಲಿಕ ಪಕ್ಷದ ಕಚೇರಿಗೆ, ಧ್ವನಿವರ್ಧಕಗಳಿಗೆ, ಹೆಲಿಪ್ಯಾಡ್‌ ಹಾಗೂ ಹೆಲಿಕ್ಯಾಪ್ಟರ್‌ ಪರವಾನಗಿ ಕೋರಿ ಸುವಿಧಾ ಅಡಿ ಅರ್ಜಿ ಸಲ್ಲಿಸಿ, ಅನುಮತಿ ಪಡೆಯಬಹುದಾಗಿದೆ. ನೀತಿ ಸಂಹಿತೆಗೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಚುನಾವಣಾ ವೇಳಾ ಪಟ್ಟಿಯಂತೆ ಮಾರ್ಚ 16 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಕೆಗೆ ಮಾರ್ಚ 23 ಕೊನೆಯ ದಿನವಾಗಿದೆ. ಮಾರ್ಚ 24 ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಮಾರ್ಚ 26 ಕೊನೆಯ ದಿನವಾಗಿದೆ. ಏ.9ರಂದು ಮತದಾನ ನಡೆಯಲಿದ್ದು, ಮತ ಏಣಿಕೆ ಮೇ 4ರಂದು ನಡೆಯಲಿದೆ. ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿರಲಿದೆ ಎಂದು ತಿಳಿಸಿದರು.

ಭಾರತ ಚುನಾವಣಾ ಆಯೋಗ ಸಿವಿಜಿಲ್ ಮೊಬೈಲ್ ಆ್ಯಪ್ ಮೂಲಕ ಯಾವುದೇ ವ್ಯಕ್ತಿ ಚುನಾವಣೆಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು ಅವಕಾಶವಿದೆ.ಯೀ ಆ್ಯಪ್‌ ಮೂಲಕ ಬಂದ ದೂರುಗಳ ಬಗ್ಗೆ ಮಾದರಿ ನೀತಿ ಸಂಹಿತೆ ತಂಡಕ್ಕೆ ಆನ್‌ಲೈನ್‌ ಮೂಲಕ ತಿಳಿಸುವುದರ ಜೊತೆಗೆ ನಿಗದಿಪಡಿಸಿದ ಸಮಯದೊಳಗೆ ಕ್ರಮ ಜರುಗಿಸಲಾಗುತ್ತದೆ. ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಸಹಕರಿಸಬೇಕೆಂದು ತಿಳಿಸಿದರು.


ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ಬಾಗಲಕೋಟೆ ತಹಶೀಲ್ದಾರ ವಾಸುದೇವ ಸ್ವಾಮಿ, ಹುನಗುಂದ ತಹಶೀಲ್ದಾರ ಡಾ.ಪ್ರದೀಪಕುಮಾರ ಸೇರಿದಂತೆ ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳು ಉಪಸ್ಥಿತರಿದ್ದರು.