ಜೀತ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ: ಸಿವಿಲ್ ನ್ಯಾಯಾಧೀಶೆ ಎಸ್.ಸಿ.ನಳಿನ

| Published : Feb 11 2024, 01:45 AM IST

ಸಾರಾಂಶ

ದೇಶದಲ್ಲಿ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ 1ನೇ ಅಪರ ಸಿವಿಲ್ ನ್ಯಾಯಾಧೀಶೆ ಎಸ್.ಸಿ.ನಳಿನ ಹೇಳಿದರು.

ಕನ್ನಡಪ್ರಭವಾರ್ತೆ ಮದ್ದೂರು

ದೇಶದಲ್ಲಿ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ 1ನೇ ಅಪರ ಸಿವಿಲ್ ನ್ಯಾಯಾಧೀಶೆ ಎಸ್.ಸಿ.ನಳಿನ ಹೇಳಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ, ಪಂಚಾಯತ್ ರಾಜ್, ಕಾರ್ಮಿಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಜೀತ ಪದ್ಧತಿ ನಿರ್ಮೂಲನೆ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಜೀತಪದ್ಧತಿ ನಿರ್ಮೂಲನಕ್ಕೆ ಸರ್ಕಾರ ಹಲವು ಕಾಯ್ದೆ ಕಾನೂನುಗಳನ್ನು ಜಾರಿಗೆ ತಂದಿದೆ. ಆದರೆ, ಕಾನೂನುಗಳು ಸಮರ್ಪಕವಾಗಿ ಅನುಷ್ಠಾನ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಅನಕ್ಷರತೆ ಮತ್ತು ಆರ್ಥಿಕ ಕಾರಣದಿಂದಾಗಿ ಜೀತ ಪದ್ಧತಿ ಜೀವಂತವಾಗಿದೆ. ಮೂಲ ಹಕ್ಕುಗಳಲ್ಲಿ ಅತ್ಯಗತ್ಯವಾದ ಶಿಕ್ಷಣವನ್ನು ಪ್ರತಿಯೊಬ್ಬರು ಪಡೆದುಕೊಂಡು ಜೀತ ಪದ್ಧತಿಗೆ ಅಂತ್ಯ ಗೊಳಿಸಬೇಕು. ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.ತಹಸೀಲ್ದಾರ್ ಕೆ.ಎಸ್.ಸೋಮಶೇಖರ್ ಮಾತನಾಡಿ, ಜೀತ ಪದ್ಧತಿ ದೇಶದ ಅಭಿವೃದ್ಧಿಗೆ ಮಾರಕವಾಗಿದೆ. ಇದರ ನಿರ್ಮೂಲನೆಗೆ ಇಲಾಖೆ ಅಧಿಕಾರಿಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಾರ್ಮಿಕ ನಿರೀಕ್ಷಕ ಎಂ.ಕೃಷ್ಣ ಮಾತನಾಡಿದರು. ಜೀತ ನಿರ್ಮೂಲನೆ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು. ಜೆಎಂಎಫ್‌ಸಿ ನ್ಯಾಯಾಲಯದ 2ನೇ ಅಪರ ಸಿವಿಲ್ ನ್ಯಾಯಾಧೀಶ ಎನ್. ವಿ. ಕೋನಪ್ಪ, ವಕೀಲ ಸಂಘದ ಅಧ್ಯಕ್ಷ ಎಂ .ಎನ್. ಶಿವಣ್ಣ, ಕಾರ್ಯದರ್ಶಿ ಎಂ.ಜೆ.ಸುಮಂತ್, ತಾಪಂ ಸಹಾಯಕ ನಿರ್ದೇಶಕ ಮಂಜುನಾಥ, ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ರಾಜೇಶ್ವರಿ ಇದ್ದರು.