ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿ: ಸಿದ್ರಾಮೇಶ್ವರ

| Published : Sep 13 2024, 01:34 AM IST

ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿ: ಸಿದ್ರಾಮೇಶ್ವರ
Share this Article
  • FB
  • TW
  • Linkdin
  • Email

ಸಾರಾಂಶ

ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಹಮ್ಮಿಕೊಳ್ಳುತ್ತಿರುವ ಮಾನವ ಸರಪಳಿ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸುವಂತೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೂಚಿಸಿದರು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮ ನಿಮಿತ್ತ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಪಂ ಇಒಗಳು, ಪಿಡಿಒಗಳೊಂದಿಗೆ ಹಮ್ಮಿಕೊಂಡ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ಹಾದುಹೋಗುವ ಗ್ರಾಪಂ, ನಗರ ಪ್ರದೇಶದ ಎಲ್ಲ ಪ್ರಾಥಮಿಕ ಶಾಲೆಗಳ 6 ರಿಂದ 10ನೇ ತರಗತಿ, ಪಿಯುಸಿ, ಪದವಿ ವಿದ್ಯಾರ್ಥಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಗ್ರಾಪಂ ಮಹಿಳಾ ಒಕ್ಕೂಟದ ಸದಸ್ಯರು, ನರೇಗಾ ಕೂಲಿಕಾರರು, ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳು, ಜಿಲ್ಲೆಯ ಎಲ್ಲ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಸೆ.15ರ ಬೆಳಗ್ಗೆ 9 ಗಂಟೆಗೆ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ ಆಯೋಜಿಸಲು ತಿರ್ಮಾನಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರು, ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಬೆಳಗಿನ ಉಪಾಹಾರ ವ್ಯವಸ್ಥೆ ಮಾಡಲು, ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಲ್ಪೋಪಹಾರದ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಿ. ಭದ್ರತೆ ಹಿತದೃಷ್ಟಿಯಿಂದ ಮಾನವ ಸರಪಳಿ ಕಾರ್ಯಕ್ರಮ ಜರುಗುವ ಸ್ಥಳಗಳಲ್ಲಿ ಸೂಕ್ತ ಪೋಲಿಸ್ ಬಂದೋಬಸ್ತ ಒದಗಿಸಲು ಪೋಲಿಸ್ ಇಲಾಖೆಯವರು ಕ್ರಮ ವಹಿಸಬೇಕು. ಎಲ್ಲರೂ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಮಾತನಾಡಿ, ಸೆ.15ರಂದು ಮುಂಜಾನೆ 8.30ರಿಂದ ಜಿಲ್ಲೆಯ ರಾಜ್ಯ ಹೆದ್ದಾರಿ ಬೆಳಗಟ್ಟಿ (ಹಟ್ಟಿ ಗ್ರಾಪಂ) ಗ್ರಾಮದಿಂದ ಪ್ರಾರಂಭವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕೊಪ್ಪಳ ಭೌಗೋಳಿಕ ಸರಹದ್ದಾದ ಮುನಿರಾಬಾದ್ ಡ್ಯಾಮ್ ವರೆಗೆ ಒಟ್ಟು 53 ಕಿಮೀ ಮಾನವ ಸರಪಳಿ ರಚಿಸಲು ಉದ್ದೇಶಿಸಲಾಗಿದೆ. ಪ್ರತಿ ಕಿಮೀ ಮಾನವ ಸರಪಳಿಗೆ ಸುಮಾರು 1000 ಜನ ಅವಶ್ಯವಿದ್ದು, ಒಟ್ಟು 53,000 ವಿದ್ಯಾರ್ಥಿಗಳು, ಸಾರ್ವಜನಿಕರು ಬೇಕಾಗುತ್ತದೆ. ವಿದ್ಯಾರ್ಥಿಗಳು, ಸಾರ್ವಜನಿಕರನ್ನು ಕರೆತರಲು ಸೂಕ್ತ ವಾಹನ ವ್ಯವಸ್ಥೆ ಕಲ್ಪಿಸಿರುವದಾಗಿ ತಿಳಿಸಿದರು. ಕಾರ್ಯಕ್ರಮ ಯಶಸ್ವಿಗೆ ಮಾನವ ಸರಪಳಿ ಹಾದುಹೋಗುವ ಗ್ರಾಮ, ಪಟ್ಟಣದಲ್ಲಿ ಪ್ರತಿ 100 ಮೀಟರ್‌ಗೆ ಒಬ್ಬರಂತೆ ನೋಡಲ್ ಅಧಿಕಾರಿಗಳು, ಪ್ರತಿ ಒಂದು ಕಿಮೀ ಒಬ್ಬರಂತೆ ತಾಲೂಕು ಮಟ್ಟದ ಅಧಿಕಾರಿಗಳನ್ನು ಹಾಗೂ ಪ್ರತಿ 3 ಕಿಮೀಗೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಜಿಲ್ಲಾ ನೋಡಲ್ ಅಧಿಕಾರಿಗಳೆಂದು ನೇಮಕ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜು ತಳವಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್ ಜಿ.ಎಚ್. ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಪಂ ಇಒಗಳು ಹಾಗೂ ಮತ್ತಿತರರಿದ್ದರು.

11ಕೆಪಿಎಲ್21 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಆಯೋಜಿಸಲಾಗುವ ಮಾನವ ಸರಪಳಿ ಕಾರ್ಯಕ್ರಮದ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.