ಸಾರಾಂಶ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಕೊಪ್ಪಳ ತಾಲೂಕಿನಲ್ಲಿ ಸೆ. 15ರಂದು ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಕರೆ ನೀಡಿದರು.
ಕೊಪ್ಪಳ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಕೊಪ್ಪಳ ತಾಲೂಕಿನಲ್ಲಿ ಸೆ. 15ರಂದು ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಕರೆ ನೀಡಿದರು.
ನಗರದ ತಾಪಂ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮ ಯಶಸ್ವಿಗೊಳಿಸಲು ಮಾನವ ಸರಪಳಿ ಹಾದುಹೋಗುವ ಗ್ರಾಮ, ಪಟ್ಟಣದಲ್ಲಿ ಪ್ರತಿ 100 ಮೀಟರ್‌ಗೆ ಒಬ್ಬರಂತೆ ನೋಡಲ್ ಅಧಿಕಾರಿಗಳು, ಪ್ರತಿ ಒಂದು ಕಿಮೀ ಒಬ್ಬರಂತೆ ತಾಲೂಕು ಮಟ್ಟದ ಅಧಿಕಾರಿಗಳನ್ನು ತಾಲೂಕು ನೋಡಲ್ ಆಫಿಸರ್ ಹಾಗೂ ಪ್ರತಿ 3 ಕಿ.ಮೀ.ಗೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಜಿಲ್ಲಾ ನೋಡಲ್ ಅಧಿಕಾರಿಗಳೆಂದು ನೇಮಕ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದರು. ಮಕ್ಕಳಿಗೆ ಕುಡಿಯುವ ನೀರು, ಬಿಸ್ಕಟ್ ವ್ಯವಸ್ಥೆ ಮಾಡುವಂತೆ ಸಭೆಯಲ್ಲಿ ಸೂಚಿಸಿದರು.ಜಿಪಂ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ್ ಮಾತನಾಡಿ, ಮಾನವ ಸರಪಳಿಗೆ ಗ್ರಾಮಸ್ಥರನ್ನು ಕರೆ ತರಲು ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು. ತಹಸೀಲ್ದಾರ ವಿಠ್ಠಲ್ ಚೌಗಲಾ ಮತ್ತು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಮಾತನಾಡಿ, ಮಾನವ ಸರಪಳಿಗೆ ಗ್ರಾಮಸ್ಥರನ್ನು ಕರೆತರಲು ವಾಹನದ ವ್ಯವಸ್ಥೆಯನ್ನು ಕಡ್ಡಾಯವಾಗಿ ಗ್ರಾಪಂ ವತಿಯಿಂದ ಮಾಡುವಂತೆ ಸೂಚಿಸಿದರು. ಗ್ರಾಪಂ ವ್ಯಾಪ್ತಿಯಲ್ಲಿ ಸ್ವಚ್ಛವಾಹಿನಿ ಮೂಲಕ ವ್ಯಾಪಕ ಪ್ರಚಾರ ಕೈಗೊಂಡು, ಪ್ರತಿ ಕಾಲನಿಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜು ತಳವಾರ, ಸಹಾಯಕ ನಿರ್ದೇಶಕ ಶರಣಪ್ಪ ಚವ್ಹಾಣ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ, ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು ಹಾಜರಿದ್ದರು.