ಶಾಲಾ ಮಟ್ಟದಲ್ಲಿ ನಿಯಮಿತ ಪರೀಕ್ಷೆಗಳು, ಮರುಪಠಣ ತರಗತಿಗಳು ಹಾಗೂ ಪೋಷಕರೊಂದಿಗೆ ಸಮನ್ವಯ ಸಭೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳ ಸಾಧನೆಯನ್ನು ಹೆಚ್ಚಿಸಬೇಕು. ಶಿಕ್ಷಕರು ಸಮಯಪಾಲನೆ, ಬದ್ಧತೆ ಮತ್ತು ಗುಣಮಟ್ಟದ ಬೋಧನೆಗೆ ಆದ್ಯತೆ ನೀಡಬೇಕು.
ಗದಗ: ಮಕ್ಕಳ ವಿಷಯವಾರು ದುರ್ಬಲತೆಗಳನ್ನು ವಿಶ್ಲೇಷಿಸಿ, ಗುರಿ ನಿರ್ದಿಷ್ಟ ಕಾರ್ಯ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಪರ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕುರಿತು ನಡೆದ ಕಾರ್ಯಾಗಾರ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿ, ಎಸ್ಸೆಸ್ಸೆಲ್ಸಿಯಲ್ಲಿ ಗುಣಾತ್ಮಕ ಫಲಿತಾಂಶ ತರುವ ಉದ್ದೇಶದಿಂದ ಈ ಕಾರ್ಯಾಗಾರ ನಡೆಸಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶವನ್ನು ಶೇಕಡಾವಾರು ಹೆಚ್ಚಿಸುವುದು ಪ್ರತಿಯೊಬ್ಬ ಶಿಕ್ಷಕರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಗುರುತಿಸಿ, ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಬೇಕು ಎಂದು ಸೂಚಿಸಿದರು.
ಶಾಲಾ ಮಟ್ಟದಲ್ಲಿ ನಿಯಮಿತ ಪರೀಕ್ಷೆಗಳು, ಮರುಪಠಣ ತರಗತಿಗಳು ಹಾಗೂ ಪೋಷಕರೊಂದಿಗೆ ಸಮನ್ವಯ ಸಭೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳ ಸಾಧನೆಯನ್ನು ಹೆಚ್ಚಿಸಬೇಕು. ಶಿಕ್ಷಕರು ಸಮಯಪಾಲನೆ, ಬದ್ಧತೆ ಮತ್ತು ಗುಣಮಟ್ಟದ ಬೋಧನೆಗೆ ಆದ್ಯತೆ ನೀಡಬೇಕು. ಜಿಲ್ಲೆಯ ಪ್ರತಿಯೊಂದು ಶಾಲೆಯೂ ಫಲಿತಾಂಶ ಸುಧಾರಣೆಗೆ ಸಮಗ್ರ ಪ್ರಯತ್ನ ಕೈಗೊಳ್ಳಬೇಕು. ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಾಗಾರದ ಉದ್ದೇಶವನ್ನು ವಿವರಿಸಿದರು.ಈ ವೇಳೆ ಅಪರ ಆಯುಕ್ತರ ಕಚೇರಿ ಶಾಲಾ ಶಿಕ್ಷಣ ಇಲಾಖೆ(ಧಾರವಾಡ) ನಿರ್ದೇಶಕ ಈಶ್ವರ ನಾಯಕ, ಡಯಟ್ ಪ್ರಾ. ಜಿ.ಎಂ. ಮುಂದಿನಮನಿ ಸೇರಿದಂತೆ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರು, ಸಮನ್ವಯಾಧಿಕಾರಿಗಳು, ಡಯಟ್ ಉಪನ್ಯಾಸಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೌಢಶಾಲಾ ಮುಖ್ಯ ಶಿಕ್ಷಕರು, ನೋಡಲ್ ಅಧಿಕಾರಿಗಳು ಇದ್ದರು.