ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಪ್ರಗತಿ ಕುರಿತು ಮಹತ್ವದ ಸಭೆಯು ಬಿ.ಸಿ.ರೋಡ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಪ್ರಗತಿ, ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಸ್ಥಿತಿಗತಿ, ಬಾಕಿ ಉಳಿದಿರುವ ಅರ್ಜಿಗಳ ಮಾಹಿತಿ ಹಾಗೂ ಆನ್‌ಲೈನ್ ಅಪ್‌ಲೋಡ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸುವ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು, ಯಾವುದೇ ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಹಾಗೂ ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪದೋಷಗಳು ಕಂಡುಬರದಂತೆ ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.ಸಭೆಯಲ್ಲಿ ವಿವಿಧ ಗ್ರಾಮಗಳ ಎಸ್‌ಐಆರ್ ಕಾರ್ಯದ ಪ್ರಗತಿಯ ಕುರಿತು ಪ್ರತ್ಯೇಕವಾಗಿ ಪರಿಶೀಲನೆ ನಡೆಸಲಾಯಿತು. ಕಾರ್ಯಕರ್ತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವುಗಳಿಗೆ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಕುರಿತು ಚರ್ಚಿಸಿ ಅಗತ್ಯ ಮಾರ್ಗದರ್ಶನ ನೀಡಲಾಯಿತು. ಎಸ್‌ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಎಲ್ಲ ಹಂತಗಳಲ್ಲಿಯೂ ಸಮನ್ವಯತೆ ಹಾಗೂ ಸಂಘಟಿತ ಕಾರ್ಯಾಚರಣೆಗೆ ಆದ್ಯತೆ ನೀಡುವ ಸಂಕಲ್ಪವನ್ನು ವ್ಯಕ್ತಪಡಿಸಲಾಯಿತು.ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಹಾಗೂ ಬಂಟ್ವಾಳದ ಪ್ರಭಾರಿ ರಾಕೇಶ್ ರೈ ಕಡೆಂಜಿ, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಚೆನ್ನಪ್ಪ ಕೊಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ್ ಹಾಗೂ ಶಿವಪ್ರಸಾದ್ ಶೆಟ್ಟಿ ಕರೋಪಾಡಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದೇವಪ್ಪ ಪೂಜಾರಿ, ಪ್ರಮುಖರಾದ ಬಿ. ದೇವದಾಸ್ ಶೆಟ್ಟಿ, ಹರಿಕೃಷ್ಣ ಬಂಟ್ವಾಳ, ರಾಮದಾಸ್ ಬಂಟ್ವಾಳ, ಮಾಧವ ಮಾವೆ, ಸುಲೋಚನಾ ಜಿ.ಕೆ. ಭಟ್ ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳು, ಶಕ್ತಿಕೇಂದ್ರದ ಪ್ರಮುಖರು, ಬೂತ್ ಮಟ್ಟದ ಜವಾಬ್ದಾರರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.