ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿರುವ ಬೆನ್ನಲ್ಲೇ ಕುಂದಾಪುರದ ಹಿರಿಯ ಕಾಂಗ್ರೆಸ್ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಪೈಪೋಟಿ ನಡೆದಿದೆ.

ಕುಂದಾಪುರ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿರುವ ಬೆನ್ನಲ್ಲೇ ಕುಂದಾಪುರದ ಹಿರಿಯ ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಬೀಜಾಡಿ ಹೆಸರು ಜಿಲ್ಲೆಯ ರಾಜಕೀಯ ವಲಯದಲ್ಲಿ ಪ್ರಮುಖವಾಗಿ ಕೇಳಿಬರುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅವರ ಪರ ಬೆಂಬಲದ ಅಭಿಯಾನ ದಿನದಿಂದ ದಿನಕ್ಕೆ ವೇಗ ಪಡೆದುಕೊಳ್ಳುತ್ತಿದ್ದು, ಅನುಭವಿ ಹಾಗೂ ಸಂಘಟನಾ ಸಾಮರ್ಥ್ಯ ಹೊಂದಿರುವ ನಾಯಕನಿಗೆ ಅವಕಾಶ ನೀಡಬೇಕು ಎಂಬ ಅಭಿಪ್ರಾಯ ಕಾರ್ಯಕರ್ತರಿಂದ ವ್ಯಕ್ತವಾಗುತ್ತಿದೆ.

ಹುಟ್ಟು ಕಾಂಗ್ರೆಸಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಅಶೋಕ ಪೂಜಾರಿ, ಹಲವು ದಶಕಗಳಿಂದ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಸಂಘಟನೆಯಲ್ಲಿ ಸಕ್ರಿಯವಾಗಿ ದುಡಿಯುತ್ತಿರುವ ನಾಯಕ. ಅಧಿಕಾರಕ್ಕಿಂತ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡುತ್ತಾ ಸುದೀರ್ಘ ರಾಜಕೀಯ ಪಯಣ ನಡೆಸಿದವರು.ಕುಂದಾಪುರ ತಾ.ಪಂ. ಸದಸ್ಯರಾಗಿ ಹಾಗೂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಸಾರ್ವಜನಿಕರವರೆಗೆ ವಿಶ್ವಾಸ ಗಳಿಸಿರುವ ನಾಯಕ ಎಂಬ ಹೆಗ್ಗಳಿಕೆ ಅವರದ್ದಾಗಿದೆ.

ಸಕ್ರಿಯ ಸಹಕಾರಿ: ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿರುವ ಅವರು, ಸಹಕಾರಿ ಸಂಸ್ಥೆಗಳ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಸಮಾಜ ಸೇವಕರಾಗಿಯೂ ಶಿಕ್ಷಣ, ಆರೋಗ್ಯ ಹಾಗೂ ವಿವಿಧ ಸಾಮಾಜಿಕ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.ಕುಂದಾಪುರ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾಗಿರುವ ಅಶೋಕ ಪೂಜಾರಿ, ಸಮಾಜ ಸಂಘಟಿಸುವ ಜೊತೆಗೆ ಎಲ್ಲ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ಗೆ ಹೊಸ ಚೈತನ್ಯ ತುಂಬಬಲ್ಲ, ತಳಮಟ್ಟದ ಕಾರ್ಯಕರ್ತರನ್ನು ಸಂಘಟಿಸಿ ಪಕ್ಷವನ್ನು ಮತ್ತಷ್ಟು ಬಲಪಡಿಸಬಲ್ಲ ನಾಯಕತ್ವದ ಅಗತ್ಯವಿದೆ ಎಂಬ ಚರ್ಚೆಯ ನಡುವೆ ಅಶೋಕ ಪೂಜಾರಿ ಹೆಸರು ಮುನ್ನೆಲೆಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲೂ ಅವರ ಪರ ಬೆಂಬಲ ವ್ಯಕ್ತವಾಗುತ್ತಿದ್ದು, ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಅವಕಾಶ ನೀಡುವಂತೆ ಪಕ್ಷದ ವರಿಷ್ಠರಿಗೆ ಪರೋಕ್ಷ ಮನವಿ ಮಾಡುವ ಅಭಿಯಾನ ಜೋರಾಗಿದೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಅಂತಿಮವಾಗಿ ಯಾರಿಗೆ ಅವಕಾಶ ಸಿಗಲಿದೆ ಎಂಬ ಕುತೂಹಲ ಮುಂದುವರಿದಿದೆ..