ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿಗರೇ ಹೆಚ್ಚಾಗಿದ್ದಾರೆ.

ಹಗರಿಬೊಮ್ಮನಹಳ್ಳಿ: ಇಲ್ಲಿನ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿಗರೇ ಹೆಚ್ಚಾಗಿದ್ದಾರೆ. ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಶಾಸಕರನ್ನು ಆಯ್ಕೆ ಮಾಡಲು ಕಾರ್ಯಕರ್ತರ ಶ್ರಮ ಮತ್ತು ತಳಮಟ್ಟದ ಗಟ್ಟಿ ಸಂಘಟನೆಯ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಟ್ಟಣದ ಹರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಭಾನುವಾರ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆನಂತರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಲ್ಲಾಹುಣಸಿ ರಾಮಣ್ಣನವರ ನಿವಾಸಕ್ಕೆ ತೆರಳಿ ಕಾರ್ಯಕರ್ತರೊಂದಿಗೆ ಸಂವಹನ ನಡೆಸಿದರು.

ಈಗಾಗಲೇ ರಾಜ್ಯದಲ್ಲಿ ಅಭಿವೃದ್ಧಿ ಕ್ಷೀಣವಾಗಿದೆ. ಕಾಂಗ್ರೆಸ್ ವಿರೋಧಿ ಅಲೆ ವ್ಯಾಪಕವಾಗಿದೆ. ಗ್ಯಾರಂಟಿ ಯೋಜನೆಗಳ ಕುರಿತು ಜನರಿಗೆ ಭ್ರಮನಿರಸನವಾಗಿದೆ. ಇತ್ತೀಚಿಗೆ ನಡೆದ ಉಪ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ವಿಶ್ವಾಸ ಪಡೆಯುವಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿದೆ ಎಂದರು.

ಮುಂಬರುವ ಗ್ರಾಪಂ, ತಾಪಂ, ಜಿಪಂ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಕೋರಿದರು. ಕಾರ್ಯಕರ್ತರನ್ನು ಪಕ್ಷ ಕೈಬಿಡುವ ಮಾತಿಲ್ಲ ಎಂದರು.

ಶಾಸಕ ಕೃಷ್ಣಾನಾಯ್ಕ, ಬಂಗಾರು ಹನುಮಂತು, ಜಿಲ್ಲಾಧ್ಯಕ್ಷ ಸಂಜೀವರೆಡ್ಡಿ, ನಗರ ಘಟಕದ ಅಧ್ಯಕ್ಷ ಮಂಜುನಾಥ ಹಿರೇಮಠ, ಮಂಡಲ ಅಧ್ಯಕ್ಷ ಬೆಣಕಲ್ ಪ್ರಕಾಶ, ಮತ್ತಿಹಳ್ಳಿ ಮಂಜುನಾಥ, ಕಾಳೇಶ್, ಪುರಸಭೆ ಸದಸ್ಯರಾದ ನವೀನ ಕುಮಾರ್, ಮಾಜಿ ಸದಸ್ಯ ಕನಕಪ್ಪ ಮತ್ತಿತರರಿದ್ದರು.