ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ರಾಜಕಾರಣಿಗಳ ಆಯ್ಕೆಗೆ ತೀವ್ರ ವಿರೋಧ

| Published : Oct 31 2024, 12:56 AM IST

ಸಾರಾಂಶ

ಸಮ್ಮೇಳನಾಧ್ಯಕ್ಷರನ್ನಾಗಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅಥವಾ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರನ್ನು ಆಯ್ಕೆ ಮಾಡಬೇಕೇ ಹೊರತು ಸಮ್ಮೇಳನಾಧ್ಯಕ್ಷರಾಗಿ ರಾಜಕಾರಣಿಗಳು, ಉದ್ಯಮಿಗಳು ಅಥವಾ ಬೇರೆ ಕ್ಷೇತ್ರದವರನ್ನು ಆಯ್ಕೆ ಮಾಡಬಾರದು. ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಆಯ್ಕೆ ಮಾಡಬೇಕು.

ಕನ್ನಡಪ್ರಭ ವಾರ್ತೆ ಮದ್ದೂರು

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಜಕಾರಣಿಗಳನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡುವುದಕ್ಕೆ ಚುಂಚಶ್ರೀ ಗೆಳೆಯರ ಬಳಗ ಹಾಗೂ ಕೆಂಪೇಗೌಡ ಒಕ್ಕಲಿಗರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಪಟ್ಟಣದ ಬಿಜೆಎಸ್ ಗ್ರಂಥಾಲಯದಲ್ಲಿ ಬುಧವಾರ ಚುಂಚಶ್ರೀ ಗೆಳೆಯರ ಬಳಗದ ಅಧ್ಯಕ್ಷ ಡಾ. ಬಿ.ಕೃಷ್ಣ ಸಾಹಿತ್ಯ ಸಮ್ಮೇಳನದಲ್ಲಿ ರಾಜಕಾರಣಿಗಳನ್ನು ಅಧ್ಯಕ್ಷರನ್ನಾಗಿ ಮಾಡುವ ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಅವರ ಹೇಳಿಕೆ ವಿರೋಧಿಸಿದರು.

ಸಮ್ಮೇಳನಾಧ್ಯಕ್ಷರನ್ನಾಗಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅಥವಾ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರನ್ನು ಆಯ್ಕೆ ಮಾಡಬೇಕೇ ಹೊರತು ಸಮ್ಮೇಳನಾಧ್ಯಕ್ಷರಾಗಿ ರಾಜಕಾರಣಿಗಳು, ಉದ್ಯಮಿಗಳು ಅಥವಾ ಬೇರೆ ಕ್ಷೇತ್ರದವರನ್ನು ಆಯ್ಕೆ ಮಾಡಬಾರದು. ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದರು.

ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಪಟ್ಟಾಭಿಷೇಕವಾಗಿ 14 ವರ್ಷಗಳಾಗಿವೆ. ಈ ಅವಧಿಯಲ್ಲಿ ಅವರು ಜ್ಞಾನ ವಿಜ್ಞಾನ, ತಂತ್ರಜ್ಞಾನ, ಧಾರ್ಮಿಕ, ಸಾಹಿತ್ಯ, ಜಾನಪದ ಮತ್ತು ಸೇವಾ ಕ್ಷೇತ್ರ ಸೇರಿದಂತೆ ಪ್ರತಿಯೊಂದು ಕ್ಷೇತ್ರಕ್ಕೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇದನ್ನು ಗಮನಿಸಿ ನಾಲ್ಕು ಪ್ರತಿಷ್ಠಿತ ವಿಶ್ವ ವಿದ್ಯಾಲಯಗಳು ಗೌರವ ಡಾಕ್ಟರೇಟ್ ನೀಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಯನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಿದಲ್ಲಿ ಸಮ್ಮೇಳನಕ್ಕೆ ಅರ್ಥ ಬರುತ್ತದೆ ಎಂದರು.

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ರಾಜಕಾರಣಿಯಾಗಿ ಉತ್ತಮ ಕೆಲಸ ಮಾಡಿದ್ದಾರೆ. ಜೊತೆಗೆ ಸಾಹಿತಿಗಳಾಗಿ ಸಾಕಷ್ಟು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಇವರು ಬರೆದಿರುವ ಗ್ರಂಥವಾದ ರಾಮಾಯಣ ಮಹಾನ್ವೇಷಣೆ ಎಂಬ ಗ್ರಂಥಕ್ಕೆ ಸರಸ್ವತಿ ಸಮ್ಮಾನ್ ಪ್ರಶಸ್ತಿ ಬಂದಿದೆ. ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅಥವಾ ವೀರಪ್ಪ ಮೊಯ್ಲಿ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡುವುದು ಸೂಕ್ತ ಎಂದು ಡಾ.ಪಿ.ಕೃಷ್ಣ ಸಲಹೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ನಾಡಪ್ರಭು ಕೆಂಪೇಗೌಡರ ಸಂಘದ ಉಪಾಧ್ಯಕ್ಷ ಸಿ.ಎಸ್.ಶಂಕರಯ್ಯ, ಕಾರ್ಯದರ್ಶಿ ವಿ.ಟಿ. ರವಿಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ಎಸ್.ಚಂದ್ರು, ಮಾಜಿ ಸದಸ್ಯ ನಾಗಾನಂದ, ಮುಖಂಡರಾದ ದೊರೆಸ್ವಾಮಿ, ಸಿ. ಸುರೇಶ್, ರಾಮಕೃಷ್ಣ, ಚಲುವರಾಜು, ರಾಮಚಂದ್ರ, ಚನ್ನಪ್ಪ ಇದ್ದರು.