ಸಾರಾಂಶ
ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಬಾಣಂತಿ ಮತ್ತು ನವಜಾತ ಶಿಶು ಮರಣದ ಸಂಖ್ಯೆ ಹೆಚ್ಚಾಗುತ್ತಿದ್ದು ನೋವಿನ ಸಂಗತಿ. ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಈ ಪರಿಸ್ಥಿತಿ ಎದುರಾಗಿದೆ.
ಧಾರವಾಡ:
ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕಾಗಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ಜಿಲ್ಲಾ ಸಮಿತಿಯಿಂದ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು. ಶೈಕ್ಷಣಿಕ, ಸಾಮಾಜಿಕ, ಔದ್ಯೋಗಿಕ ಹಾಗೂ ಕೌಟುಂಬಿಕ ಕ್ಷೇತ್ರಗಳಲ್ಲಿ ಸಮಾನತೆ-ಸ್ವಾತಂತ್ರ‍್ಯ ಎಂಬುದು ಮರೀಚಿಕೆಯಾಗಿದೆ. ಹೆಣ್ಣು ಮಕ್ಕಳ ಸಾಕ್ಷರತೆಯ ಪ್ರಮಾಣ ಕೇವಲ ಶೇ.58ರಷ್ಟಿದ್ದು ಇನ್ನೂ ಶೇ.43ರಷ್ಟು ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಅವರ ಉನ್ನತ ವ್ಯಾಸಂಗದ ಸಂಖ್ಯೆ ಶೇ. 1ರಷ್ಟು ಇರುವುದು ಕಳವಳಕಾರಿ ಸಂಗತಿ ಎಂದು ಮನವಿಯಲ್ಲಿ ತಿಳಿಸಿದ್ದಾರೆ.ಇಷ್ಟೆಲ್ಲ ಕಷ್ಟ-ಕಾರ್ಪಣ್ಯಗಳ ನಡುವೆ ವಿದ್ಯಾಭ್ಯಾಸ ಮುಗಿಸಿ ಸ್ವಾವಲಂಬಿ ಬದುಕು ನಡೆಸಲು ಮುಂದೆ ಬರುವ ಮಹಿಳೆಯರಿಗೆ ಉದ್ಯೋಗದ ಅವಕಾಶಗಳಿಲ್ಲ. ಖಾಸಗಿ ಹಾಗೂ ಅಸಂಘಟಿತ ವಲಯದಲ್ಲಿ ಸಂಬಳಕ್ಕಾಗಿ ಹಗಲಿರುಳು ದುಡಿಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಇತೀಚೆಗೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಬಾಣಂತಿ ಮತ್ತು ನವಜಾತ ಶಿಶು ಮರಣದ ಸಂಖ್ಯೆ ಹೆಚ್ಚಾಗುತ್ತಿದ್ದು ನೋವಿನ ಸಂಗತಿ. ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಈ ಪರಿಸ್ಥಿತಿ ಎದುರಾಗಿದೆ. ಇದರ ಬಗ್ಗೆ ಸರ್ಕಾರವು ಸರಿಯಾದ ಕ್ರಮ ತೆಗೆದುಕೊಳ್ಳಬೇಕು. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಸರ್ಕಾರವು ತ್ವರಿತಗತಿಯಲ್ಲಿ ಸ್ಪಂದಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಜಿಲ್ಲಾಧ್ಯಕ್ಷೆ ಮಧುಲತಾ ಗೌಡರ್, ಉಪಾಧ್ಯಕ್ಷೆ ದೇವಮ್ಮ ದೇವತ್ಕಲ್, ಕಾರ್ಯದರ್ಶಿ ಗಂಗೂಬಾಯಿ ಕೋಕರೆ ಇದ್ದರು.