ಕನ್ನಡಪ್ರಭ ವಾರ್ತೆ ಸಿದ್ದಾಪುರ
ಕಾನಸೂರಿನ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಸಾವಿನ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ತಾಲೂಕು ಬಿಜೆಪಿ ಮತ್ತು ಜೆಡಿಎಸ್ ವತಿಯಿಂದ ಪಟ್ಟಣದ ತಹಶೀಲ್ದಾರ ಕಚೇರಿಯ ಎದುರು ಪ್ರತಿಭಟನೆ ನಡೆಯಿತು. ತಾಲೂಕಿನ ಕಾನಸೂರು ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಗೋಕುಲ ಗೌಡ ಸಾವಿನ ತನಿಖೆ ಸರಿಯಾದ ರೀತಿಯಲ್ಲಿ ನಡೆದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ. ನಾಯ್ಕ ಹಣಜೀಬೈಲ್ ಆಗ್ರಹಿಸಿದರು.ಬಿಜೆಪಿ ಮಂಡಲಾಧ್ಯಕ್ಷ ಎಂ.ಕೆ. ತಿಮ್ಮಪ್ಪ ಮಾತನಾಡಿ, ವಸತಿ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹೇಳಿಕೆಗಳು ಭಿನ್ನವಾಗಿದೆ. ಇದರಿಂದ ಇದು ಆತ್ಮಹತ್ಯೆಯಲ್ಲ ಕೊಲೆಯೆಂಬುದು ಸಾಬೀತಾಗುತ್ತದೆ. ಸೂಕ್ತ ತನಿಖೆ ನಡೆದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ವಿದ್ಯಾರ್ಥಿ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ಮಾತನಾಡಿ, ಸಾವಿಗೆ ಕಾರಣರಾದವರಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ ಎಂದರು.ಜೆಡಿಎಸ್ ಮುಖಂಡ ಉಪೇಂದ್ರ ಪೈ, ಬಿಜೆಪಿ ಮಂಡಲ ನಿಕಟಪೂರ್ವ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರು, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ತೋಟಪ್ಪ ನಾಯ್ಕ, ಎಬಿವಿಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ದರ್ಶನ ಹೆಗಡೆ, ಜಿಲ್ಲಾ ವಿಶೇಷ ಆಹ್ವಾನಿತ ಗುರುರಾಜ ಶಾನಭಾಗ ಮಾತನಾಡಿದರು.
ಪ್ರತಿಭಟನೆಯ ನಂತರ ತಹಶೀಲ್ದಾರ (ಪ್ರಭಾರ) ರಮೇಶ ಹೆಗಡೆ ಮೂಲಕ ಜಿಲ್ಲಾಧಿಕಾರಿ ಮತ್ತು ಸ್ಥಳಕ್ಕೆ ಆಗಮಿಸಿದ ಕಾರವಾರದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಮೇಶ ವೈ.ಕೆ.ಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಪ್ರತಿಭಟನಾಕಾರರು ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಹೆಣ್ಣು ಮಕ್ಕಳು ಇರುವ ವಸತಿ ಶಾಲೆಗಳಿಗೆ ಮಹಿಳಾ ವಾರ್ಡನ್ ಗಳ ನೇಮಕಕ್ಕೆ ಪ್ರತಿಭಟನಾಕಾರರು ಆಗ್ರಹಿಸಿದರು. ಮನವಿಯನ್ನು ಮೇಲಾಧಿಕಾರಿಗಳಿಗೆ ವರ್ಗಾಯಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಉಮೇಶ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಸತೀಶ ಹೆಗಡೆ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮತ್ತು ಸಾರ್ವಜನಿಕರು ಇದ್ದರು.