ಕಾನಸೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಯ ಸಾವಿನ ಮತ್ತು ಬಂಡಲದ ಮೆಟ್ರಿಕ್ ಪೂರ್ವ ಸರ್ಕಾರಿ ವಸತಿ ನಿಲಯದಲ್ಲಿ ಆಗಿರುವ ಘಟನೆ ಕುರಿತು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಸಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಶಿರಸಿ

ಕಾನಸೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಯ ಸಾವಿನ ಮತ್ತು ಬಂಡಲದ ಮೆಟ್ರಿಕ್ ಪೂರ್ವ ಸರ್ಕಾರಿ ವಸತಿ ನಿಲಯದಲ್ಲಿ ಆಗಿರುವ ಘಟನೆ ಕುರಿತು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಸಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ವಿಭಾಗ ಸಂಚಾಲಕ ಸಂಜಯ್ ಗಾಂವ್ಕರ್ ಮಾತನಾಡಿ ಸರ್ಕಾರ ಮತ್ತು ಸ್ಥಳೀಯ ಶಾಸಕರ ಹಾಗೂ ಸ್ಥಳೀಯ ತಾಲೂಕು ಅಧಿಕಾರಿಗಳ ನಡೆ ಖಂಡಿಸಿದರು.

ರಾಜ್ಯ ಕಾರ್ಯದರ್ಶಿ ದರ್ಶನ್ ಹೆಗಡೆ ಮಾತನಾಡಿ, ಪೊಲೀಸರು ಪ್ರತಿಭಟನಾಕಾರರಿಗೆ ಶಾಂತ ರೀತಿಯಾಗಿ ಪ್ರತಿಭಟನೆ ಮಾಡಲು ಅವಕಾಶ ನೀಡುತ್ತಿಲ್ಲ, ರಾಜಕಾರಣಿಗಳ ಹಾಗೂ ಅಧಿಕಾರಿಗಳ ಕುಮ್ಮಕ್ಕಿನಿಂದ ನಮ್ಮ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಈ ಮಧ್ಯೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಸ್ವಲ್ಪ ಹೊತ್ತು ಮಾತಿನ ಚಕ್ಕಮಕಿ ನಡೆಯಿತು. ಆದರೂ ಪಟ್ಟು ಬಿಡದ ಪ್ರತಿಭಟನಾಕಾರರು ಸಂಬಂಧಪಟ್ಟ ಅಧಿಕಾರಿಗಳು ನಮ್ಮ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ನಮ್ಮ ಮನವಿ ಸ್ವೀಕರಿಸುವವರೆಗೂ ನಾವು ಈ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.

ನಂತರ ತಹಸೀಲ್ದಾರ್ ಪಟ್ಟರಾಜಗೌಡ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ನ್ಯಾಯ ಕೊಡಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಬಿವಿಪಿ ಪದಾಧಿಕಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ನ್ಯಾಯಕ್ಕಾಗಿ ಸೆರಗೊಡ್ಡಿ ಬೇಡಿದ ತಾಯಿ

ಕಾನಸೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನನ್ನ ಮಗನಿಗೆ ಆಗಿರುವ ಘಟನೆ ಬೇರೆ ಯಾವ ಮಕ್ಕಳಿಗೂ ಆಗಬಾರದು ಮತ್ತು ನನ್ನ ಮಗನಿಗೆ ಆಗಿರುವ ಘಟನೆ ಕುರಿತು ಪೊಲೀಸರು ತನಿಖೆ ನಡೆಸಿ ಸೂಕ್ತ ನ್ಯಾಯವನ್ನು ಒದಗಿಸಿಕೊಡಬೇಕೆಂದು ಪೊಲೀಸರ ಮುಂದೆ ಮೃತ ಬಾಲಕ ಗೋಕುಲ ಕೃಷ್ಣ ಗೌಡನ ತಾಯಿ ಜಯಶ್ರೀ ಕಂಬನಿ ಮಿಡಿದು ಸೆರಗೊಡ್ಡಿ ಬೇಡಿಕೊಂಡರು.