ಚಲಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್‌ನಿಂದ ಆಯತಪ್ಪಿ ಬಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಗಾಯಗೊಂಡ ಘಟನೆ ಸೋಮವಾರ ತಾಲೂಕಿನ ಸಂಗೂರು ಗ್ರಾಮದ ಬಳಿ ನಡೆದಿದೆ.

ಹಾವೇರಿ: ಚಲಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್‌ನಿಂದ ಆಯತಪ್ಪಿ ಬಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಗಾಯಗೊಂಡ ಘಟನೆ ಸೋಮವಾರ ತಾಲೂಕಿನ ಸಂಗೂರು ಗ್ರಾಮದ ಬಳಿ ನಡೆದಿದೆ.

ಹಾನಗಲ್ಲನಿಂದ ದಾವಣಗೆರೆಗೆ ತೆರಳುತ್ತಿದ್ದ ಸಾರಿಗೆ ಬಸ್‌ನಲ್ಲಿ ಬಾಗಿಲ ಬಳಿ ನಿಂತು ಪ್ರಯಾಣಿಸುತ್ತಿದ್ದ ವಿನಯ್ ಕಮತರ ಎಂಬ ವಿದ್ಯಾರ್ಥಿ, ಜನದಟ್ಟಣೆಯಿಂದಾಗಿ ಆಯತಪ್ಪಿ ಕೆಳಗೆ ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಗ್ರಾಮಸ್ಥರಿಂದ ಪ್ರತಿಭಟನೆ...

ವಿದ್ಯಾರ್ಥಿ ಬಸ್‌ನಿಂದ ಬಿದ್ದು ಗಾಯಗೊಂಡ ಘಟನೆ ತಿಳಿಯುತ್ತಿದ್ದಂತೆ ಸಂಗೂರು ಗ್ರಾಮಸ್ಥರು ಸಾರಿಗೆ ಬಸ್ ತಡೆದು ಕೆಲಕಾಲ ಪ್ರತಿಭಟನೆ ನಡೆಸಿದರು. ಶಕ್ತಿ ಯೋಜನೆ ಜಾರಿಯಾದ ಬಳಿಕ 60 ಆಸನಗಳ ಸಾಮರ್ಥ್ಯವಿರುವ ಬಸ್‌ಗಳಲ್ಲಿ 120ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ವಿದ್ಯಾರ್ಥಿಗಳು ಹಾಗೂ ನಿತ್ಯ ಪ್ರಯಾಣಿಕರು ಕಿಕ್ಕಿರಿದ ಬಸ್‌ಗಳಲ್ಲಿ ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಈ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದರೂ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದಿರುವುದೇ ಇಂತಹ ಘಟನೆಗಳಿಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಈ ಮಾರ್ಗದಲ್ಲಿ ತಕ್ಷಣ ಹೆಚ್ಚುವರಿ ಬಸ್‌ಗಳನ್ನು ಓಡಿಸಬೇಕು. ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಸುರಕ್ಷತೆಗೆ ಸಾರಿಗೆ ಇಲಾಖೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ನಂತರ ಘಟನಾ ಸ್ಥಳಕ್ಕೆ ಬಂದ ಸಾರಿಗೆ ಸಂಸ್ಥೆ ಅಧಿಕಾರಿಗಳು ಹೆಚ್ಚುವರಿ ಬಸ್ ಬಿಡುವ ಕುರಿತು ಭರವಸೆ ನೀಡಿದರು. ನಂತರ ಪ್ರತಿಭಟನೆ ಕೈಬಿಡಲಾಯಿತು.