ಮಾನವೀಯ ಗುಣ ಮೈಗೂಡಿಸಿಕೊಳ್ಳಿ: ಭಗವಂತ ಖೂಬಾ

| Published : Jul 17 2024, 12:49 AM IST

ಸಾರಾಂಶ

ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಉನ್ನತವಾದ ಗುರಿಯನ್ನು ಇಟ್ಟುಕೊಂಡು ಅದನ್ನು ಸಾಧಿಸಲು ನಿರಂತರವಾಗಿ ಶ್ರಮಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಹೇಳಿದರು. ಜ್ಞಾನಸುಧಾ ವಿದ್ಯಾರ್ಥಿನಿಗೆ ಲಂಡನ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನಲ್ಲಿ ಪ್ರವೇಶ ಪಡೆದ ಹಿನ್ನೆಲೆ ಬೀದರ್‌ನಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಬೀದರ್‌

ವಿದ್ಯಾರ್ಥಿ ಜೀವನದಲ್ಲಿ ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡಿ ಬೌದ್ಧಿಕ ಮಟ್ಟ ವೃದ್ಧಿಸಿಕೊಳ್ಳುವುದು ಎಷ್ಟು ಮುಖ್ಯವೋ, ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ತಿಳಿಸಿದರು.

ನಗರದ ಮಾಮನಕೇರಿಯಲ್ಲಿರುವ ಜ್ಞಾನಸುಧಾ ವಿದ್ಯಾಲಯದ ಜ್ಞಾನರಂಗ ಸಭಾಂಗಣದಲ್ಲಿ ಆಯೋಜಿಸಿದ್ದ ಲಂಡನ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನಲ್ಲಿ ಎಂಎ ಎಕನಾಮಿಕ್ಸ್‌ ಪ್ರವೇಶಕ್ಕೆ ಅರ್ಹತೆ ಪಡೆದ ಜ್ಞಾನಸುಧಾ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿನಿ ವಸುಂಧರಾ ಭಗವಂತ ಖೂಬಾ ಅವರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಉನ್ನತವಾದ ಗುರಿಯನ್ನು ಇಟ್ಟುಕೊಂಡು ಅದನ್ನು ಸಾಧಿಸಲು ನಿರಂತರವಾಗಿ ಶ್ರಮಿಸಬೇಕು. ಆ ಗುರಿಯ ಮೂಲಕ ದೇಶಕ್ಕೆ ತಮ್ಮದೆಯಾದ ಅಮೂಲ್ಯವಾದ ಕೊಡುಗೆ ನೀಡಲು ಪ್ರಯತ್ನಿಸಬೇಕಲ್ಲದೆ ಸಮಾಜದಲ್ಲಿ ಗೌರವಯುತ ಬದುಕು ನಡೆಸಲು ವಿದ್ಯಾರ್ಥಿಗಳು ಮೊದಲು ತಮ್ಮ ಜ್ಞಾನ ಸಂಪತ್ತನ್ನು ಹೆಚ್ಚಿಸಿಕೊಳ್ಳುವುದರೊಂದಿಗೆ ಮೌಲ್ಯಯುತ ಬದುಕು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಪೂರ್ಣಿಮಾ ಜಿ. ಮಾತನಾಡಿ, ‘ನಮ್ಮ ಜ್ಞಾನಸುಧಾ ವಿದ್ಯಾಲಯದಲ್ಲಿ ಎಲ್‌ಕೆಜಿಯಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿನಿ ವಸುಂಧರಾ ಖೂಬಾ ತಮ್ಮ ಮುಂದಿನ ವಿದ್ಯಾಭ್ಯಾಸವನ್ನು ಲಂಡನ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನಲ್ಲಿ ಮಾಡಲು ಅರ್ಹತೆ ಪಡೆದಿರುವುದು ನಮ್ಮ ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಸುಂಧರಾ ನಿಷ್ಠೆಯಿಂದ ವ್ಯಾಸಂಗ ಮಾಡಿ ಅರ್ಥಶಾಸ್ತ್ರದಲ್ಲಿ ಪರಿಣಿತಿ ಪಡೆದು ದೇಶದ ಆರ್ಥಿಕ ಏಳಿಗೆಗೆ ತಮ್ಮದೆಯಾದ ಕೊಡುಗೆ ನೀಡುವ ನಿಟ್ಟಿನಲ್ಲಿ ಶ್ರಮಿಸಲಿ ಎಂದು ಶುಭ ಹಾರೈಸಿದರು.

ಸಂಸ್ಥೆಯ ನಿರ್ದೇಶಕರಾದ ಡಾ. ಮುನೇಶ್ವರ ಲಾಖಾ ಮಾತನಾಡಿ, ಮಕ್ಕಳ ಭವಿಷ್ಯಕ್ಕಾಗಿ ಪಾಲಕರು ಬಹಳಷ್ಟು ಶ್ರಮಪಡುತ್ತಾರೆ. ಆ ಶ್ರಮ ಸಾರ್ಥಕವಾಗಬೇಕಾದರೆ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ವಸುಂಧರಾ ಖೂಬಾ ಅವರು, ಪರಿಶ್ರಮವಿಲ್ಲದೆ ಯಾವುದೇ ಸಾಧನೆ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ವೈಯಕ್ತಿಕ ಅಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು. ತರಗತಿಯಲ್ಲಿ ಶಿಕ್ಷಕರು ಬೋಧನೆ ಮಾಡುವ ವಿಷಯವನ್ನು ಸರಿಯಾಗಿ ಆಲಿಸಿಕೊಂಡು ನಂತರ ಆಸಕ್ತಿಯಿಂದ ಅಭ್ಯಾಸ ಮಾಡಬೇಕು ಎಂದು ತಿಳಿಸಿದರು.

ಪ್ರಾಚಾರ್ಯರಾದ ಸುನಿತಾ ಸ್ವಾಮಿ, ಉಪಪ್ರಾಚಾರ್ಯರಾದ ಕಲ್ಪನಾ, ಮೇಲ್ವಿಚಾರಕರಾದ ರಜನಿ, ಸಾಯಿಗೀತಾ, ವಸಿಮಾ ಉಪಸ್ಥಿತರಿದ್ದರು.