ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ, ಸಾಮಾಜಿಕ ಕಾಳಜಿ ಅಗತ್ಯ: ಎನ್.ಆನಂದಮೂರ್ತಿ

| Published : Jan 10 2025, 12:49 AM IST

ಸಾರಾಂಶ

ಗ್ರಾಮೀಣ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆ ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ರಾಜ್ಯ ‌ಮಟ್ಟದಲ್ಲಿ ಭಾಗವಹಿಸಿ ಗುರುತಿಸಿಕೊಂಡಿರುವುದು ಶ್ಲಾಘನೀಯ. ಕಾಲೇಜಿನಲ್ಲಿ ಪಾಠಕ್ಕೆ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಜೀವನದಲ್ಲಿ ಮಾನವೀಯ ಮೌಲ್ಯಗಳು, ಸಾಮಾಜಿಕ ಪ್ರಜ್ಞೆ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದು ಕೊಂಗಾಡಿಯಪ್ಪ ಪ.ಪೂ. ಕಾಲೇಜಿನ ಪ್ರಾಂಶುಪಾಲ ಎನ್.ಆನಂದಮೂರ್ತಿ ಹೇಳಿದರು.

ಅವರು ತೂಬಗೆರೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2024- 25ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕೇವಲ ಪುಸ್ತಕ ಮತ್ತು ಇಂಟರ್ನೆಟ್‍ಗಳಿಂದ ಮಾತ್ರವಲ್ಲದೇ ಸಮಾಜ ಹಾಗೂ ಅನುಭವಸ್ಥರಿಂದಲೂ ಜ್ಞಾನ ಸಂಪಾದನೆ ಮಾಡುವುದು ಅಗತ್ಯ. ವಿದ್ಯಾರ್ಥಿ ಜೀವನದಲ್ಲಿ ಪಡೆದುಕೊಂಡ ಜ್ಞಾನವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಾಗಲೇ ಧ್ಯೇಯದ ಕಡೆಗೆ ಸಾಗಬಹುದು. ಕಠಿಣ ಪರಿಶ್ರಮದಿಂದ ಗುರಿಯನ್ನು ಸುಲಭವಾಗಿ ಸಾಧಿಸಬಹುದು. ಜೀವನದಲ್ಲಿ ಸಮಾಜ, ಕೆಲಸ ಮತ್ತು ಕುಟುಂಬವನ್ನು ಸಮಾನವಾಗಿ ನಿಭಾಯಿಸುವುದು ಅತ್ಯಗತ್ಯ ಎಂದರು.

ನಿವೃತ್ತ ಪ್ರಾಂಶುಪಾಲ ಚಂದ್ರ ಮರಕಲ ಮಾತನಾಡಿ, ಗ್ರಾಮೀಣ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆ ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ರಾಜ್ಯ ‌ಮಟ್ಟದಲ್ಲಿ ಭಾಗವಹಿಸಿ ಗುರುತಿಸಿಕೊಂಡಿರುವುದು ಶ್ಲಾಘನೀಯ. ಕಾಲೇಜಿನಲ್ಲಿ ಪಾಠಕ್ಕೆ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ವಿದ್ಯಾರ್ಥಿ ಜೀವನ ಮನುಷ್ಯನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುವ ಕಾಲಘಟ್ಟ. ಗುಣಮಟ್ಟದ ಶಿಕ್ಷಣದಿಂದ ಮಾತ್ರ ಉತ್ತಮ ಪ್ರಜೆಗಳು ಹಾಗೂ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಉಷಾ ವಿ. ಅಧ್ಯಕ್ಷತೆ ವಹಿಸಿದ್ದರು. ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಅರವಿಂದ, ಕೆಪಿಸಿಸಿ ಸದಸ್ಯ ಮುನಿರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಸದಸ್ಯ ಮುನಿಕೃಷ್ಣಪ್ಪ, ಮುಖಂಡರಾದ ಸತ್ಯನಾರಾಯಣಪ್ಪ, ವೆಂಕಟೇಶ್‌, ರವಿಸಿದ್ದಪ್ಪ, ದೇವೇಂದ್ರಸ್ವಾಮಿ, ಉದಯ ಆರಾಧ್ಯ ಮತ್ತಿತರರು ಹಾಜರಿದ್ದರು.