ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮತ್ತು ಸಂಸ್ಕಾರಯುತ ಶಿಕ್ಷಣ ಬೇಕಿದೆ: ಡೀಸಿ ಡಾ.ಕುಮಾರ

| Published : Jan 10 2025, 12:49 AM IST

ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮತ್ತು ಸಂಸ್ಕಾರಯುತ ಶಿಕ್ಷಣ ಬೇಕಿದೆ: ಡೀಸಿ ಡಾ.ಕುಮಾರ
Share this Article
  • FB
  • TW
  • Linkdin
  • Email

ಸಾರಾಂಶ

ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬರ ಮನೆಯಲ್ಲಿಯೂ ಮೊಬೈಲ್‌ನ ಹಾವಳಿ ಹೆಚ್ಚಾಗಿದೆ. ಇದರಿಂದ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ಉತ್ತಮ ಸಾಧನೆ ಮಾಡಲು ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಂ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳು ಅಡ್ಡಿ ಆತಂಕವಾಗಿರುವ ವಸ್ತುಗಳಾಗಿವೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮತ್ತು ಸಂಸ್ಕಾರಯುತ ಶಿಕ್ಷಣ ದೊರೆತರೆ ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗುತ್ತಾರೆ. ಕುವೆಂಪು ಅವರ ಸಂದೇಶ, ಆದರ್ಶ ಮತ್ತು ಮೌಲ್ಯಗಳನ್ನು ಮಕ್ಕಳಲ್ಲಿ ಬಿತ್ತಿದರೆ ಸಮಾಜದ ಸತ್ಪ್ರಜೆಗಳಾಗುತ್ತಾರೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಭಿಪ್ರಾಯಪಟ್ಟರು.

ಪಟ್ಟಣದ ಶ್ರೀಕುವೆಂಪು ಸ್ಮಾರಕ ಪೂರ್ವ ಪ್ರಾಥಮಿಕ, ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ವತಿಯಿಂದ ಬುಧವಾರ ಸಂಜೆ ಆಯೋಜಿಸಿದ್ದ 21ನೇ ವರ್ಷದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬರ ಮನೆಯಲ್ಲಿಯೂ ಮೊಬೈಲ್‌ನ ಹಾವಳಿ ಹೆಚ್ಚಾಗಿದೆ. ಇದರಿಂದ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ಉತ್ತಮ ಸಾಧನೆ ಮಾಡಲು ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಂ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳು ಅಡ್ಡಿ ಆತಂಕವಾಗಿರುವ ವಸ್ತುಗಳಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಪೋಷಕರು ಮೊಬೈಲ್ ನೋಡಿಕೊಂಡು ಮಕ್ಕಳನ್ನು ಓದಿ ಎಂದು ಹೇಳಲು ಯಾವ ನೈತಿಕತೆ ಇರುವುದಿಲ್ಲ. ಮಕ್ಕಳು ಓದಬೇಕೆಂದರೆ ಪೋಷಕರು ಟಿವಿ ಮತ್ತು ಮೊಬೈಲ್ ಆಫ್‌ಮಾಡಿ ಇಡಬೇಕು ಎಂದು ಕಿವಿಮಾತು ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಹೆಸರಿನಲ್ಲಿ ಕಳೆದ 20 ವರ್ಷಗಳಿಂದ ಶಾಲೆ ನಡೆಸುತ್ತಿರುವುದು ಅತ್ಯಂತ ಸಂತಸದ ವಿಚಾರ. ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ ಬಡ ಮಕ್ಕಳಿಗೆ ಕೈಗೆಟಕುವ ರೀತಿಯಲ್ಲಿ ಶಿಕ್ಷಣ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಿವೃತ್ತ ಪ್ರಾಂಶುಪಾಲ ಡಾ.ಎಚ್.ಎಸ್.ರವೀಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೇಶ್ ಮಾತನಾಡಿದರು. ತಾಲೂಕು ಒಕ್ಕಲಿಗರ ಎಜುಕೇಷನ್ ಟ್ರಸ್ಟ್‌ನ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಸಿ.ಎನ್.ಮಂಜುನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ವೇಳೆ ಪಟ್ಟಣದ ಆದಿಚುಂಚನಗಿರಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎಚ್.ಎಸ್. ರವೀಂದ್ರ, ಬ್ರಹ್ಮದೇವರಹಳ್ಳಿಯ ರಮಾನಂದನಾಥ ಪ್ರೌಢಶಾಲೆ ನಿವೃತ್ತ ದೈಹಿಕ ಶಿಕ್ಷಕ ಎಂ.ಎನ್.ಪರಮಶಿವಯ್ಯ ಸೇರಿದಂತೆ ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ್ದ ವಿದ್ಯಾರ್ಥಿಗಳಾದ ಎಂ.ಜೆ.ಚೌತಿಕ್, ಬಿ.ಎನ್. ಯಶವಂತ್ ಹಾಗೂ ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನಗಳಿಸಿದ್ದ ಎನ್.ಪೃಥ್ವಿಗೌಡ ಅವರನ್ನು ಸನ್ಮಾನಿಸಲಾಯಿತು.

ಬಳಿಕ ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಸಂಸ್ಥೆ ಪದಾಧಿಕಾರಿಗಳಾದ ಕೆಂಪೇಗೌಡ, ಎಂ.ಎನ್.ರಾಮಸ್ವಾಮಿಗೌಡ, ಕಲ್ಲುದೇವನಹಳ್ಳಿ ಶಿವಣ್ಣ, ಬಿ.ಬೊಮ್ಮೇಗೌಡ, ಪಿ.ಡಿ.ತಿಮ್ಮಯ್ಯ, ಬಿ.ರಾಜೇಗೌಡ, ಶಾಲೆ ಮುಖ್ಯಶಿಕ್ಷಕ ಡಿ.ಮೋಹನ್‌ಕುಮಾರ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಕೆ.ಸಿ.ಮಂಜುನಾಥ್ ಸೇರಿದಂತೆ ಹಲವರು ಇದ್ದರು.