ಹಾಸ್ಟೆಲ್‌ನಲ್ಲಿ ಇರುವ ವಿದ್ಯಾರ್ಥಿಗಳು ಹಲವಾರು ದಿನಗಳಿಂದ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ, ಸರಿಯಾದ ವ್ಯವಸ್ಥೆ ಇಲ್ಲ ಎಂಬುದಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದರೂ ಯಾವುದೇ ಸ್ಪಂದನೆ ದೊರಕಿಲ್ಲ ಎಂದು ಆರೋಪಿಸಿದರು. ಪ್ರತಿಭಟನಾನಿರತ ವಿದ್ಯಾರ್ಥಿಗಳ ಹೇಳಿಕೆ ಪ್ರಕಾರ, ನಿನ್ನೆ ರಾತ್ರಿ ಹೆಚ್ಚುವರಿ ಸುಮಾರು ೨೦ ವಿದ್ಯಾರ್ಥಿಗಳಿಗೆ ಊಟ ನೀಡಲು ವಾರ್ಡನ್ ಶ್ರೀಕಂಠೇಗೌಡ ನಿರಾಕರಿಸಿದ್ದು, ಊಟ ಕೇಳಿದಾಗ ತಮಗೆ ಧಮ್ಕಿ ಹಾಕಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಬೇಸತ್ತ ವಿದ್ಯಾರ್ಥಿಗಳು ಹಾಸ್ಟೆಲ್ ಆವರಣದಲ್ಲಿ ಸೇರಿ ಅಹೋರಾತ್ರಿ ಧರಣಿ ಆರಂಭಿಸಿದರು.

ಕನ್ನಡಪ್ರಭ ವಾರ್ತೆ ಹಾಸನನಗರದ ಆಕಾಶವಾಣಿ ಹಿಂಭಾಗದಲ್ಲಿರುವ ಬಿಸಿಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ರಾತ್ರಿ ಊಟ ನೀಡದ ಆರೋಪದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಹಾಸ್ಟೆಲ್‌ನಲ್ಲಿ ಇರುವ ವಿದ್ಯಾರ್ಥಿಗಳು ಹಲವಾರು ದಿನಗಳಿಂದ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ, ಸರಿಯಾದ ವ್ಯವಸ್ಥೆ ಇಲ್ಲ ಎಂಬುದಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದರೂ ಯಾವುದೇ ಸ್ಪಂದನೆ ದೊರಕಿಲ್ಲ ಎಂದು ಆರೋಪಿಸಿದರು. ಪ್ರತಿಭಟನಾನಿರತ ವಿದ್ಯಾರ್ಥಿಗಳ ಹೇಳಿಕೆ ಪ್ರಕಾರ, ನಿನ್ನೆ ರಾತ್ರಿ ಹೆಚ್ಚುವರಿ ಸುಮಾರು ೨೦ ವಿದ್ಯಾರ್ಥಿಗಳಿಗೆ ಊಟ ನೀಡಲು ವಾರ್ಡನ್ ಶ್ರೀಕಂಠೇಗೌಡ ನಿರಾಕರಿಸಿದ್ದು, ಊಟ ಕೇಳಿದಾಗ ತಮಗೆ ಧಮ್ಕಿ ಹಾಕಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಬೇಸತ್ತ ವಿದ್ಯಾರ್ಥಿಗಳು ಹಾಸ್ಟೆಲ್ ಆವರಣದಲ್ಲಿ ಸೇರಿ ಅಹೋರಾತ್ರಿ ಧರಣಿ ಆರಂಭಿಸಿದರು. ಕೆಲವರು ಕಣ್ಣೀರಿಡುತ್ತಾ ತಮ್ಮ ಸಂಕಷ್ಟವನ್ನು ವಿವರಿಸಿದ ದೃಶ್ಯಗಳು ಮನಕಲಕುವಂತಾಗಿದ್ದವು. ವಿದ್ಯಾರ್ಥಿಗಳು ಆರೋಪಿಸಿರುವಂತೆ, ಇರಾನ್‌- ಇಸ್ರೇಲ್ ಯುದ್ಧದ ಪರಿಣಾಮವಾಗಿ ಗ್ಯಾಸ್ ಕೊರತೆ ಉಂಟಾಗಿದೆ ಎಂಬ ಕಾರಣವನ್ನು ನೀಡಿ ಹೆಚ್ಚುವರಿ ವಿದ್ಯಾರ್ಥಿಗಳಿಗೆ ಊಟ ನೀಡಲು ಸಾಧ್ಯವಿಲ್ಲ ಎಂದು ವಾರ್ಡನ್ ಹೇಳಿದ್ದಾರೆ ಎನ್ನಲಾಗಿದೆ. ಆದರೆ ಈ ಕಾರಣವನ್ನು ವಿದ್ಯಾರ್ಥಿಗಳು ತಳ್ಳಿಹಾಕಿ, ಹಾಸ್ಟೆಲ್‌ನಲ್ಲಿ ವಾಸಿಸುವ ಎಲ್ಲ ವಿದ್ಯಾರ್ಥಿಗಳಿಗೆ ಸಮರ್ಪಕ ಆಹಾರ ಮತ್ತು ಮೂಲಭೂತ ಸೌಲಭ್ಯ ಒದಗಿಸುವುದು ಆಡಳಿತದ ಕರ್ತವ್ಯವಾಗಿದ್ದು, ಈ ರೀತಿಯ ನಿರ್ಲಕ್ಷ್ಯ ಅಕ್ಷಮ್ಯ ಎಂದು ಕಿಡಿಕಾರಿದರು.ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಬಿಸಿಎಂ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಿಸ್ಥಿತಿಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ವಿವರವಾಗಿ ಆಲಿಸಿ, ಘಟನೆಯ ಕುರಿತು ಸಮಗ್ರ ಪರಿಶೀಲನೆ ನಡೆಸುವುದಾಗಿ ಹಾಗೂ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಹಾಸ್ಟೆಲ್‌ನಲ್ಲಿ ಆಹಾರ ವಿತರಣೆ, ಸೌಲಭ್ಯಗಳ ನಿರ್ವಹಣೆ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸಲಾಗಿತು. ಈ ಘಟನೆ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಆಹಾರ ಮತ್ತು ಮೂಲಸೌಕರ್ಯಗಳ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಸಂಬಂಧಿತ ಇಲಾಖೆ ತಕ್ಷಣ ಕ್ರಮ ಕೈಗೊಂಡು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಪೋಷಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.