ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಸಂಪರ್ಕ ಮಾಹಿತಿ ಹಾಗೂ ದೂರು ಸಲ್ಲಿಸುವ ವಿವರ ಪ್ರದರ್ಶಿಸಲಾಗಿದೆ.
ಕಂಪ್ಲಿ: ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತ ವ್ಯವಸ್ಥೆಯುಳ್ಳ ದೇಶ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಿಂದಲೇ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಬೆಳೆಸಿಕೊಂಡು ಸಮಾಜದಲ್ಲಿ ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯ ಎತ್ತಿಹಿಡಿಯಬೇಕು ಎಂದು ಬಳ್ಳಾರಿಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಎಸ್.ಎಸ್. ಬೀಳಗಿ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಕರ್ನಾಟಕ ಲೋಕಾಯುಕ್ತ ವತಿಯಿಂದ ಆಯೋಜಿಸಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಾರ್ವಜನಿಕ ಜೀವನದಲ್ಲಿ ಭ್ರಷ್ಟಾಚಾರವು ವ್ಯವಸ್ಥೆಯ ಮೇಲೆ ಜನರಿಗಿರುವ ನಂಬಿಕೆ ಕುಂದಿಸುತ್ತದೆ. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸ ಮಾಡಿಕೊಡಲು ನಿಗದಿತ ಸರ್ಕಾರಿ ಶುಲ್ಕಕ್ಕಿಂತ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಲ್ಲಿ ಅಥವಾ ಸಕಾಲದಲ್ಲಿ ಕೆಲಸ ಮಾಡಿಕೊಡದೆ ಅನಗತ್ಯವಾಗಿ ಅಲೆದಾಡಿಸಿದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮೌನವಾಗಿರಬಾರದು. ಇಂತಹ ಘಟನೆಗಳು ಕಂಡುಬಂದಲ್ಲಿ ಸಂಬಂಧಿಸಿದ ಲೋಕಾಯುಕ್ತ ಅಧಿಕಾರಿಗಳ ಗಮನಕ್ಕೆ ತಂದು ಭ್ರಷ್ಟಾಚಾರ ತಡೆಗಟ್ಟುವ ಕಾರ್ಯಕ್ಕೆ ಕೈಜೋಡಿಸಬೇಕು ಎಂದರು.
ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಸಂಪರ್ಕ ಮಾಹಿತಿ ಹಾಗೂ ದೂರು ಸಲ್ಲಿಸುವ ವಿವರ ಪ್ರದರ್ಶಿಸಲಾಗಿದೆ. ಸಾರ್ವಜನಿಕರು ಈ ಮಾಹಿತಿ ಬಳಸಿಕೊಂಡು ಭ್ರಷ್ಟಾಚಾರದ ವಿರುದ್ಧ ಧೈರ್ಯವಾಗಿ ಧ್ವನಿ ಎತ್ತಬೇಕು. ವಿದ್ಯಾರ್ಥಿಗಳು ತಮ್ಮ ಕುಟುಂಬದವರು ಹಾಗೂ ಸುತ್ತಮುತ್ತಲಿನ ಜನರಿಗೂ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಮೂಲಕ ಸಮಾಜದಲ್ಲಿ ಪ್ರಾಮಾಣಿಕ ಆಡಳಿತ ವ್ಯವಸ್ಥೆ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಗುರುಣ್ಣ ಎಸ್. ಹೆಬ್ಬಾಳ ಮಾತನಾಡಿ, ಭ್ರಷ್ಟಾಚಾರದಿಂದ ಸಾರ್ವಜನಿಕ ಆಡಳಿತ ವ್ಯವಸ್ಥೆ ಹಾಗೂ ಸಮಾಜದ ಅಭಿವೃದ್ಧಿಯ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿವರಿಸಿದರು.
ಕಾಲೇಜಿನ ಪ್ರಾಚಾರ್ಯ ಎನ್.ಮಾರೆಪ್ಪ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.