ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

| Published : Jun 12 2024, 12:33 AM IST

ಸಾರಾಂಶ

ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ನಗರ ಸಾರಿಗೆ ಸೌಲಭ್ಯವನ್ನು ದೊರಕಿಸಿಕೊಡಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ (ಎಐಎಸ್‌ಎಫ್‌) ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಸನದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಎಐಎಸ್‌ಎಫ್‌ ನೇತೃತ್ವದಲ್ಲಿ ಧರಣಿ । ಜಿಲ್ಲಾಡಳಿತಕ್ಕೆ ಮನವಿ

ಕನ್ನಡಪ್ರಭ ವಾರ್ತೆ ಹಾಸನ

ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ನಗರ ಸಾರಿಗೆ ಸೌಲಭ್ಯವನ್ನು ದೊರಕಿಸಿಕೊಡಬೇಕು, ಹಾಸನ ವಿಶ್ವವಿದ್ಯಾಲಯದ ಮಾರ್ಗದಲ್ಲಿ ಸಂಚರಿಸುವ ರಾಜ್ಯ ರಸ್ತೆ ಸಾರಿಗೆ ಬಸ್‌ಗಳಿಗೂ ನಿಲುಗಡೆ ಮಾಡಬೇಕು ಮತ್ತು ಬಸ್ ತಂಗುದಾಣದ ವ್ಯವಸ್ಥೆ ಒದಗಿಸಿ ಕೊಡಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ (ಎಐಎಸ್‌ಎಫ್‌) ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಅಖಿಲ ಭಾರತ ಯೂತ್ ಫೆಡರೇಷನ್ ರಾಜ್ಯ ಕಾರ್ಯದರ್ಶಿ ಸಂತೋಷ್ ಮತ್ತು ಜಿಲ್ಲಾ ಕಾರ್ಯದರ್ಶಿ ಗಿರೀಶ್ ಮಾತನಾಡಿ, ‘ಹಾಸನದ ಹೇಮಗಂಗೋತ್ರಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಹೇಮಗಂಗೋತ್ರಿ ಅಸ್ಥಿತ್ವದಲ್ಲಿದ್ದು ೬೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಜಿಲ್ಲೆಯ ಆನೇಕ ಗ್ರಾಮಗಳಿಂದ ಸಂಚರಿಸಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ಆದರೆ ಈ ವಿದ್ಯಾರ್ಥಿಗಳಿಗೆ ಅನುಕೂಲವಾದ ಬಸ್ ಸಂಚಾರದ ವ್ಯವಸ್ಥೆ ಇಲ್ಲದೆ ಪ್ರತಿನಿತ್ಯ ಪರದಾಡುವಂತೆ ಆಗಿದೆ. ಅದರಲ್ಲೂ ಬೆಳಗಿನ ೯ ರಿಂದ ೧೧ ಗಂಟೆಯವರೆಗೆ ಹಾಗೂ ಮಧ್ಯಾಹ್ನ ೧ ರಿಂದ ೫ ಗಂಟೆಯವರೆಗೆ ಬಸ್‌ಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಬಹಳ ಕಷ್ಟು ಪಡುತ್ತಿದ್ದಾರೆ’ ಎಂದು ದೂರಿದರು.

‘ಈ ಹಿನ್ನಲೆಯಲ್ಲಿ ಹಾಸನದ ಸಿಟಿ ಬಸ್ ನಿಲ್ದಾಣದಿಂದ ವಿಶ್ವವಿದ್ಯಾಲಯಕ್ಕೆ ಬೆಳಿಗ್ಗೆ ೯ ರಿಂದ ೫ ಗಂಟೆಯವರೆಗೆ ನಗರ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ವಿನಂತಿಸುತ್ತೇವೆ. ಅಲ್ಲದೆ ವಿಶ್ವವಿದ್ಯಾಲಯದ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಬಸ್‌ಗಳಿಗೆ ನಿಲುಗಡೆ ಕೊಡುವಂತೆ ವ್ಯವಸ್ಥೆ ಮಾಡಿಕೊಡಬೇಕೆಂದು ಕೋರುತ್ತೇವೆ’ ಎಂದು ಹೇಳಿದರು.

‘ಈಗಾಗಲೇ ದೇವೇಗೌಡ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗಾಗಿಯೇ ಪ್ರತ್ಯೇಕವಾಗಿ ನಗರ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿರುವಂತೆ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ನಾಮಫಲಕದ ನಗರ ಸಾರಿಗೆ ಬಸ್‌ಗಳನ್ನು ವ್ಯವಸ್ಥೆ ಮಾಡಿಕೊಡಬೇಕು. ನಮ್ಮ ನ್ಯಾಯಯುತ ವಿಚಾರಗಳನ್ನೊಳಗೊಂಡ ಮನವಿಯನ್ನು ಕೆಎಸ್‌ಆರ್‌ಟಿಸಿ ಹಾಸನ ವಿಭಾಗೀಯ ವ್ಯವಸ್ಥಾಪಕರಿಗೆ ಕಳೆದ ತಿಂಗಳು ಮನವಿ ಸಲ್ಲಿಸಿದ್ದು ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ. ಕೂಡಲೇ ವಿದ್ಯಾರ್ಥಿಗಳಿಗೆ ಅನುಕೂವಾಗುವಂತೆ ತಂಗುದಾಣ ನಿರ್ಮಾಣ ಹಾಗೂ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ ಕಾರ್ಯದರ್ಶಿ ಭಾಸ್ಕರ್, ಸಹ ಕಾರ್ಯದರ್ಶಿ ವೀರೇಶ್, ಜಿಲ್ಲಾ ಸಂಚಾಲಕರಾದ ಎಚ್.ಎಸ್.ಪುಷ್ಪಲತಾ ಸೇರಿ ಇತರರು ಇದ್ದರು.