ಸಾರಾಂಶ
ಕನ್ನಡಪ್ರಭ ವಾರ್ತೆ ಶಿರಾ
ಕನ್ನಡ ಭಾಷೆಯನ್ನು ಗೌರವಿಸುವಂಥ ಸಂಸ್ಕಾರ ಪ್ರತಿಯೊಬ್ಬರೂ ಬೆಳೆಸಿಕೊಂಡಾಗ ಮಾತ್ರ ಭಾಷೆಯ ಬೆಳವಣಿಗೆ ಸಾಧ್ಯ, ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಮಾತ್ರ ಆದ್ಯತೆ ನೀಡದೆ, ಗುರು- ಹಿರಿಯರನ್ನು ಗೌರವಿಸುವಂತಹ ಸಂಸ್ಕಾರ ಬೆಳೆಸಿಕೊಳ್ಳಬೇಕು, ವಿದ್ಯಾರ್ಥಿಗಳ ಬೆಳವಣಿಗೆಗೆ, ಸಮಾಜದ ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣ ಒಂದೇ ಮಾರ್ಗ ಎಂದು ನಿವೃತ್ತ ಪ್ರಾಂಶುಪಾಲ ಚಂದ್ರಯ್ಯ ಹೇಳಿದರು.ಅವರು ನಗರದ ಕನ್ನಡ ಭವನದಲ್ಲಿ ಶಿರಾ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳಿಗೆ ಜೀವನೋತ್ಸಾಹ ಹಾಗೂ ಆತ್ಮವಿಶ್ವಾಸ ಹೆಚ್ಚಿಸಿ, ಮುಂದಿನ ಕಲಿಕೆಗೆ ಉತ್ಸಾಹ ತುಂಬುವಲ್ಲಿ ಸಹಕಾರಿಯಾಗುತ್ತದೆ. ನೆನಪಿನ ಶಕ್ತಿ ಹೆಚ್ಚಿಸಿಕೊಂಡು ಕನ್ನಡ ಭಾಷೆ ಪರೀಕ್ಷೆಯಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಗಳಿಸಿರುವುದು ನಿಮ್ಮ ಸಾಮರ್ಥ್ಯವನ್ನು ಸಾಕ್ಷೀಕರಿಸುತ್ತದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಮೌಲ್ಯಯುತ ಶಿಕ್ಷಣದ ಅವಶ್ಯಕತೆ ಇದೆ ಎಂದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಪಿ. ಪಾಂಡುರಂಗಯ್ಯ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಕನ್ನಡ ಭಾಷೆಯ ಬೆಳವಣಿಗೆಗೆ ಪೂರಕವಾಗಿ, ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಶೇಕಡ ೧೦೦ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸುವುದರ ಜೊತೆಗೆ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ಸಂಕಲ್ಪದೊಂದಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಸಿದ್ದಣ್ಣ, ತುಮಕೂರು ವಿಶ್ವವಿದ್ಯಾನಿಲಯದ ಸಹ ಪ್ರಾಧ್ಯಾಪಕಿ ವಂದನಾ, ಹಿಮಂತರಾಜು, ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಎನ್. ಪರಮೇಶ್ ಗೌಡ, ಕಸಬಾ ಹೋಬಳಿ ಘಟಕದ ಅಧ್ಯಕ್ಷೆ ರೇಣುಕಮ್ಮ, ಶಿಕ್ಷಕರಾದ ದೊಡ್ಡಣ್ಣ, ದೊಡ್ಡರಾಜು, ಶಿಕ್ಷಕ ರಮೇಶ್, ಹುಲಿಕುಂಟೆ ಹೋಬಳಿ ಕಸಾಪ ಅಧ್ಯಕ್ಷ ವೀರಭದ್ರ ಸ್ವಾಮಿ, ಶಿಕ್ಷಕಿ ರಶ್ಮಿ ಕುಮಾರ್, ಉಪನ್ಯಾಸಕ ಚಿಕ್ಕಣ್ಣ ಸೇರಿ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ಪಡೆದ ೫ ಶಾಲೆಗಳ ಮುಖ್ಯಸ್ಥರಿಗೆ,ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ೭೮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು.