ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳಿಸಿಕೊಂಡು ಸಾರ್ವಜನಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು.ಅವರು ಶುಕ್ರವಾರ ನಗರದ ಬ್ರಹ್ಮಗಿರಿಯ ರೆಡ್ ಕ್ರಾಸ್ ಭವನದಲ್ಲಿ ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಶಿಬಿರದಲ್ಲಿ ಸಂಪೂರ್ಣವಾಗಿ ಭಾಗವಹಿಸಿ ವ್ಯಕ್ತಿತ್ವ ವಿಕಾಸನದೊಂದಿಗೆ, ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು. ವಿಚಾರ ವಿನೀಮಯ ಹಾಗೂ ಜೀವನದಲ್ಲಿ ಧನಾತ್ಮಕ ಮನೋಭಾವವನ್ನು ಬೆಳೆಸಿಕೊಂಡು ಸಮಾಜಕ್ಕೆ ಕೊಡುಗೆಯನ್ನು ನೀಡುವುದರೊಂದಿಗೆ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗಬೇಕು ಎಂದರು.ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ರಾಯಪ್ಪ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಭಾಸ್ಕರ ಶೆಟ್ಟಿ ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿಕಟಪೂರ್ವ ರಾಜ್ಯ ಎನ್.ಎಸ್.ಎಸ್. ಸಂಪರ್ಕಾಧಿಕಾರಿ ಡಾ.ಗಣನಾಥ ಶೆಟ್ಟಿ ಎಕ್ಕಾರು, ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಖಜಾಂಜಿ ರಮಾದೇವಿ, ಜಂಟಿ ಖಜಾಂಜಿ ಚಂದ್ರಶೇಖರ್, ಕಾಲೇಜಿನ ವಿಜ್ಞಾನ ನಿಕಾಯದ ಡೀನ್ ಶ್ರೀಧರ್ ಪ್ರಸಾದ್ ಕೆ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ವಾಣಿ ಆರ್. ಬಲ್ಲಾಳ್, ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ.ನಿಕೇತನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಸಾಫಲ್ಯ ಟ್ರಸ್ಟ್ ನಿರ್ದೇಶಕ ನಿರುಪಮ ಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಡಿ. ಸ್ವಾಗತಿಸಿ, ಅಮೃತ ಮತ್ತು ಚೈತ್ರ ನಿರೂಪಿಸಿ, ಪ್ರೀತಿ ಶೆಟ್ಟಿ ವಂದಿಸಿದರು.