ಸಾರಾಂಶ
ಹೊಸಪೇಟೆ: ವಿದ್ಯಾರ್ಥಿ ಜೀವನದಲ್ಲಿ ಗುರಿಯೊಂದಿಗೆ ವಿದ್ಯಾಭ್ಯಾಸ ಮಾಡಬೇಕು. ಜತೆಗೆ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಹೇಳಿದರು.
ನಗರದಲ್ಲಿ ಶುಕ್ರವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಿಮಿತ್ತ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಶನಲ್ ಟ್ರಸ್ಟ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ದಶಮಾನೋತ್ಸವದ ಅಂಗವಾಗಿ ನಡೆದ ಜಾಗೃತಿ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ರಕ್ಷಣೆಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿವೆ. ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಓದುವ ಶಾಲೆಗೂ ಮತ್ತು ಊರಿಗೆ ಒಳ್ಳೆಯ ಹೆಸರು ತರುವ ನಿಟ್ಟಿನಲ್ಲಿ ವಿದ್ಯಾಭ್ಯಾಸ ಮಾಡಬೇಕು ಎಂದರು.
ಇದೇ ವೇಳೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಅವರ ತಾಯಿ ನಾಗರತ್ನಮ್ಮ, ಜಿಪಂ ಸಿಇಒ ಅಕ್ರಂ ಷಾ ಅವರ ತಾಯಿ ಸಫೀನಾ ಅವರ ಹೆಸರಲ್ಲಿ ಹೆಣ್ಣು ಮಕ್ಕಳ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಡಲಾಯಿತು. ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಮಕ್ಕಳಿಗೆ ಬೋಧನೆ ಮಾಡಿದರು.ಜಿಲ್ಲಾಧಿಕಾರಿ ಕಚೇರಿಯಿಂದ ನಗರದ ವಿಜ್ಞಾನ ಕಾಲೇಜ್‌ವರೆಗೂ ನೂರಾರು ವಿದ್ಯಾರ್ಥಿನಿಯರು ಪ್ರಭಾತ್ ಪೇರಿ ನಡೆಸಿದರು.
ವಿಜ್ಞಾನ ಕಾಲೇಜ್ ನಲ್ಲಿ ಬಾಲಕರಿಗೆ ಲಿಂಗ ತಾರತಮ್ಯ ತಡೆ ಕುರಿತ ಅರಿವು, ಹೆಣ್ಣು ಭ್ರೂಣ ಹತ್ಯೆ ತಡೆ, ಹೆಣ್ಣು ಮಕ್ಕಳಲ್ಲಿ ಜಾಗೃತಿ ಮೂಡಿಸುವುದು, ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ದೃಷ್ಟಿಕೋನ ಬದಲಾಯಿಸುವುದು, ಎಲ್ಲ ಹೆಣ್ಣು ಮಕ್ಕಳಿಗೆ ಮಾಹಿತಿ ಮತ್ತು ಸೌಲಭ್ಯ ಹಾಗೂ ಅವಕಾಶಗಳನ್ನು ಒದಗಿಸಿಕೊಡುವುದು ಕುರಿತಾಗಿ ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಸಲೀಂ ಪಾಷಾ, ಜಿಲ್ಲಾ ನಿರೂಪಣಾ ಅಧಿಕಾರಿ ಸುಭದ್ರಾದೇವಿ, ಸಿಡಿಪಿಒ ಸಿಂಧು ಅಂಗಡಿ, ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್ ಸಂಸ್ಥೆಯ ಅಧ್ಯಕ್ಷ ಭೀಮರಾಜ ಯು., ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಂಬುಜಾ, ಜಿಲ್ಲಾ ಮಿಷನ್ ಸಂಯೋಜಕರಾದ ಶಿವಣ್ಣ, ನೇತ್ರಾ ಹರ್ತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಾಧಿಕಾರಿ ಗಂಗಾಧರ ಡೊಳ್ಳಿನ, ವಿಜ್ಞಾನ ಕಾಲೇಜ್‌ನ ನಿರ್ದೇಶಕಿ ವಿನುತಾ, ಪ್ರಾಚಾರ್ಯ ಫರೀದಾ, ಆಡಳಿತ ಅಧಿಕಾರಿ ಕಿರಣ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.