ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ಉಡುಪಿ ಡಿಸಿ

| Published : Mar 07 2025, 11:48 PM IST

ಸಾರಾಂಶ

ಶುಕ್ರವಾರ ಉಡುಪಿಯ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ತಯಾರಿ ಹಾಗೂ ಉತ್ತಮ ಫಲಿತಾಂಶ ಗಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲೆಯ 10ನೇ ತರಗತಿಯ ವಿದ್ಯಾರ್ಥಿಗಳು ಭಯವಿಲ್ಲದೆ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸುವಂತೆ, ಅದಕ್ಕೆ ಪೂರಕವಾಗಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೋತ್ಸಹ ನೀಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ ನೀಡಿದರು.

ಶುಕ್ರವಾರ ನಗರದ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ತಯಾರಿ ಹಾಗೂ ಉತ್ತಮ ಫಲಿತಾಂಶ ಗಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪಠ್ಯಕ್ರಮಗಳನ್ನು ಪೂರ್ಣಗೊಳಿಸಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ಪರಿಣಾಮಕಾರಿ ಸಲಹೆ ಹಾಗೂ ಮಾರ್ಗದರ್ಶನಗಳನ್ನು ನೀಡಬೇಕು. ಕೆಲವು ವಿಷಯಗಳ ಓದಿನಲ್ಲಿ ಹಿಂದಿರುವಂತಹ ಮಕ್ಕಳುಗಳಿಗೆ ಕಷ್ಟಕರ ವಿಷಯಗಳಿಗೆ ಆದ್ಯತೆ ನೀಡಿ, ಉತ್ತಮ ಅಧ್ಯಯನ ಮಾಡಲು ಸಹಕರಿಸಬೇಕು ಎಂದರು.

ಕಳೆದ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೇ ಶೇ. 97 ರಷ್ಟು ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿ ಇತ್ತು. ಈ ಬಾರಿಯೂ ಪರೀಕ್ಷಾ ಫಲಿತಾಂಶದಲ್ಲಿ ಶೇಕಡಾವಾರು ಪ್ರಮಾಣ ಕಳೆದ ಬಾರಿಗಿಂತ ಹೆಚ್ಚು ಪಡೆದು ಪ್ರಥಮ ಸ್ಥಾನವನ್ನು ಪಡೆಯಲು ಪರಿಣಾಮಕಾರಿಯಾಗಿ ತಯಾರಿ ನಡೆಸಲು ವಿದ್ಯಾರ್ಥಿಗಳಿಗೆ ಸಹಾಯ ಮಾಡಬೇಕು ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜೊತೆಗೆ ಶಿಸ್ತನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಹೊಂದಬೇಕು. ವ್ಯಸನಗಳಿಂದ ದೂರವಿರಬೇಕು ಎಂದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಡಯಟ್ ಉಪಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಸೈಂಟ್ ಸಿಸಿಲೀಸ್ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲೆಯ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಮತ್ತಿತರರು ಇದ್ದರು.