ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು: ಎ.ಎಸ್.ಪೊನ್ನಣ್ಣ

| Published : Apr 30 2025, 12:32 AM IST

ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು: ಎ.ಎಸ್.ಪೊನ್ನಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಆಧುನಿಕ ಯುಗದಲ್ಲಿ ಪ್ರತಿ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಇದ್ದು, ವಿದ್ಯಾರ್ಥಿಗಳು ಸ್ಪರ್ಧೆಯನ್ನು ಆರೋಗ್ಯಯುತವಾಗಿ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸುವತ್ತ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್‌. ಪೊನ್ನಣ್ಣ ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಆಧುನಿಕ ಯುಗದಲ್ಲಿ ಪ್ರತಿ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಇದ್ದು, ವಿದ್ಯಾರ್ಥಿಗಳು ಸ್ಪರ್ಧೆಯನ್ನು ಆರೋಗ್ಯಯುತವಾಗಿ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಕರೆ ನೀಡಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಗರದ ಕಾಲೇಜು ಸಭಾಂಗಣದಲ್ಲಿ ಕಲೋತ್ಸವ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಸ್ಪಷ್ಟತೆ ಇರಬೇಕು. ತೆಗೆದುಕೊಂಡ ನಿರ್ಧಾರ ಅಚಲವಾಗಿರಬೇಕು. ಜೀವನದಲ್ಲಿ ಶಿಸ್ತು ಇದ್ದಲ್ಲಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ವಿಚಾರಗಳನ್ನು ತಿಳಿದುಕೊಳ್ಳಬೇಕು. ಅವಕಾಶಗಳು ಸಾಕಷ್ಟು ಇದ್ದು, ಅವುಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ನುಡಿದರು. ಸೋಲನ್ನು ಗೆಲುವಾಗಿ ಪರಿವರ್ತಿಸಬೇಕು. ಅದಕ್ಕೆ ಸತತ ಪ್ರಯತ್ನವಿದ್ದಲ್ಲಿ ಜಯ ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ಛಲ ಬಿಡಬಾರದು ಎಂದು ಹೇಳಿದರು. ಪ್ರತಿಯೊಬ್ಬರಲ್ಲಿಯೂ ಸಹ ಒಂದಲ್ಲ ಒಂದು ರೀತಿ ಪ್ರತಿಭೆ ಇದ್ದು, ಅದನ್ನು ಸರಿಯಾಗಿ ಬಳಸಿಕೊಂಡು ಗೆಲುವು ಸಾಧಿಸಲು ಪ್ರಯತ್ನಿಸಬೇಕು. ವಿದ್ಯಾರ್ಥಿ ಜೀವನವು ಅತ್ಯಮೂಲ್ಯವಾಗಿದ್ದು, ಭವಿಷ್ಯದಲ್ಲಿ ಸ್ಮರಿಸುವಂತಹ ಬದುಕನ್ನು ಕಟ್ಟಿಕೊಳ್ಳಬೇಕು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳವಣಿಗೆ ಹೊಂದಬೇಕು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟೇಶ್ ಪ್ರಸನ್ನ, ಕನ್ನಡ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಿಡಿಸಿ ಸದಸ್ಯರಾದ ಅಂಬೆಕಲ್ ನವೀನ್, ಪ್ರಾಧ್ಯಾಪಕರಾದ ಡಾ.ನಿರ್ಮಲ, ಕಾವೇರಿ ಪ್ರಕಾಶ್, ಚೈತ್ರ, ಅನುಪಮ, ಇತರರು ಇದ್ದರು. ಕಲೋತ್ಸವ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡು ಗಮನ ಸೆಳೆದರು.