ಸಾರಾಂಶ
ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ಜಾಗತಿಕ ಸವಾಲು ಎದುರಿಸಿ ಗುರಿಮುಟ್ಟಲು ಕೇವಲ ಅಂಕಗಳಿಕೆ ಮಾನದಂಡವಾಗುವುದಿಲ್ಲ. ಬದಲಾಗಿ ವಿದ್ಯಾರ್ಥಿಗಳು ವಿದ್ಯೆ ಜೊತೆಗೆ ಲೋಕಜ್ಞಾನ ಮತ್ತು ವ್ಯಾವಹಾರಿಕ ಜ್ಞಾನ ಅಭಿವೃದ್ಧಿಪಡಿಸಿಕೊಂಡು ಉನ್ನತ ಸಾಧನೆ ಮಾಡಿ ಜೀವನದಲ್ಲಿ ಗುರಿಮುಟ್ಟಬೇಕು.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ವಿದ್ಯಾರ್ಥಿಗಳು ಅಂಕಗಳಿಕೆಗೆ ಪ್ರಾಮುಖ್ಯತೆ ನೀಡದೇ ವೃತ್ತಿ ಕೌಶಲ್ಯ ಆಧಾರಿತ ಶಿಕ್ಷಣನ್ನು ಪಡೆದುಕೊಂಡು ನಿಮ್ಮ ವ್ಯಕ್ತಿತ್ವವನ್ನು ಸಮಗ್ರವಾಗಿ ರೂಪಿಸಿಕೊಂಡು ಸಾಧನೆ ಮಾಡಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕಿ ಡಾ.ಶೋಭಾ ಕರೆ ನೀಡಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ಹಾಗೂ ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಬಿ.ಎ.ಮಂಜುನಾಥ್‌ಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ಜಾಗತಿಕ ಸವಾಲು ಎದುರಿಸಿ ಗುರಿಮುಟ್ಟಲು ಕೇವಲ ಅಂಕಗಳಿಕೆ ಮಾನದಂಡವಾಗುವುದಿಲ್ಲ. ಬದಲಾಗಿ ವಿದ್ಯಾರ್ಥಿಗಳು ವಿದ್ಯೆ ಜೊತೆಗೆ ಲೋಕಜ್ಞಾನ ಮತ್ತು ವ್ಯಾವಹಾರಿಕ ಜ್ಞಾನ ಅಭಿವೃದ್ಧಿಪಡಿಸಿಕೊಂಡು ಉನ್ನತ ಸಾಧನೆ ಮಾಡಿ ಜೀವನದಲ್ಲಿ ಗುರಿಮುಟ್ಟಬೇಕು ಎಂದರು.ಕಾಲೇಜು ಶಿಕ್ಷಣ ಇಲಾಖೆ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕ ಡಾ.ಚಂದ್ರಶೇಖರ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಪಡೆದು ಸಮಾಜದಲ್ಲಿ ಎಲ್ಲರಿಗೂ ಬೇಕಾದ ಪ್ರಜೆಗಳಾಗಿ ಒಳ್ಳೆಯ ಜೀವನ ರೂಪಿಸಿಕೊಳ್ಳಬೇಕು ಎಂದರು.
ಮಂಡ್ಯ ವಿವಿ ಕುಲಪತಿ ಪ್ರೊ.ಶಿವಚಿತ್ರಪ್ಪ ಮಾತನಾಡಿ, ಜಿಲ್ಲೆಯಲ್ಲಿ ಸ್ನಾತಕೋತ್ತರ ಕೇಂದ್ರಗಳನ್ನು ಹೊಂದಿರುವ ಎಲ್ಲಾ ಕಾಲೇಜುಗಳಲ್ಲಿ ಅಧ್ಯಯನ ಕೇಂದ್ರ ಸ್ಥಾಪಿಸಿ ಡಾಕ್ಟರೇಟ್ ಪ್ರಬಂಧ ಮಂಡಿಸುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.ಶಾಸಕ ಎಚ್.ಟಿ.ಮಂಜು ಅಧ್ಯಕ್ಷತೆ ವಹಿಸಿ ಕಾಲೇಜಿನ ವ್ಯವಸ್ಥಾಪಕ ಬಿ.ಎ.ಮಂಜುನಾಥ್ ಹಾಗೂ ಗಣ್ಯರನ್ನು ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ವಿಶ್ರಾಂತ ಪ್ರಾಂಶುಪಾಲ ಡಾ.ಜಾನೇಗೌಡ, ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಚೇತನ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ಡಾ. ವಿ.ವಿ.ಜಗದೀಶ್ , ರಾಜ್ಯ ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಸಹಾಯಕ ಪ್ರಾಧ್ಯಪಕರಾದ ಡಾ.ಸಿ.ರಮೇಶ್, ಜಯಕೀರ್ತಿ, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರತಿಮಾ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಕೃಷ್ಣೇಗೌಡ, ತಿಪ್ಪೇಗೌಡ, ಪುರಸಭೆ ಸದಸ್ಯರಾದ ಡಿ.ಪ್ರೇಮಕುಮಾರ್, ಎಚ್.ಆರ್.ಲೋಕೇಶ್ ಭಾಗವಹಿಸಿದ್ದರು.ಕಾರ್ಯಕ್ರಮಕ್ಕೂ ಮುನ್ನ ಅತಿಥಿಗಳನ್ನು ಪಟ್ಟಣದ ಪ್ರವಾಸಿ ಮಂದಿರ ವೃತ್ತದಿಂದ ತೆರೆದ ವಾಹನದಲ್ಲಿ ಜಾನಪದ ಕಲಾ ತಂಡಗಳು ವೈಭವದ ಮೆರವಣಿಗೆಯೊಂದಿಗೆ ವೇದಿಕೆಗೆ ಕರೆ ತರಲಾಯಿತು.