ವಿದ್ಯಾರ್ಥಿಗಳು ಶಿಸ್ತಿನ ಜೀವನ ನಡೆಸಿ: ಅನೂಪ್ ಮಾದಪ್ಪ

| Published : Mar 27 2025, 01:07 AM IST

ಸಾರಾಂಶ

ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕೊಡಗು ಜಿಲ್ಲಾ ಪೊಲೀಸ್ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ ಶಿಸ್ತಿನ ಜೀವನವನ್ನು ನಡೆಸಬೇಕು ಎಂದು ಮಡಿಕೇರಿ ವೃತ್ತ ಪೊಲೀಸ್ ನಿರೀಕ್ಷಕ ಅನೂಪ್ ಮಾದಪ್ಪ ಹೇಳಿದರು.

ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕೊಡಗು ಜಿಲ್ಲಾ ಪೊಲೀಸ್ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಎಂದಿಗೂ ಅಮಲು ಬರಿಸುವಂತಹ ಪದಾರ್ಥಗಳಿಗೆ ಮಾರುಹೋಗದೆ ಆರೋಗ್ಯವನ್ನು ಕಾಪಾಡಿಕೊಂಡು ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಕಾನೂನು ಅರಿವು ಮುಖ್ಯವಾಗಿದೆ ಎಂದರು.

ಪ್ರತಿಯೊಬ್ಬರು ಸಂಚಾರಿ ನಿಯಮ, ಸೈಬರ್ ಕ್ರೈಂ, ಡಿಜಿಟಲ್ ಅರೆಸ್ಟ್ ಬಗ್ಗೆ ತಿಳುವಳಿಕೆ ಹೊಂದಿರಬೇಕು ಎಂದು ಅಪರಾಧ ಹಾಗೂ ಕಾನೂನಿನ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ, ಪೋಕ್ಸೋ ಕಾಯ್ದೆ, ಸಂಚಾರಿ ನಿಯಮ ಕಾಯ್ದೆ ಬಗ್ಗೆ ವಿವರಿಸುತ್ತಾ, ವಿದ್ಯಾರ್ಥಿಗಳು ಯಾವುದೇ ಮದ್ಯವ್ಯಸನಗಳಿಗೆ, ಸಾಮಾಜಿಕ ಜಾಲತಾಣಗಳಲ್ಲಿರುವ ಆಮಿಷಗಳಿಗೆ ಮರುಳಾಗದೆ ಎಚ್ಚರಿಕೆಯಂದಿರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮನೋಜ್ ಕುಮಾರ್, ಐಕ್ಯೂ ಸಂಚಾಲಕಿ ಎಸ್. ಆಶಾ, ಬೋಧಕ ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು.