ಸಾರಾಂಶ
ಶಿಕ್ಷಣಕ್ಕಾಗಿ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡೆದುಕೊಳ್ಳಬೇಕು ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಶಿಕ್ಷಣಕ್ಕಾಗಿ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ಹೇಳಿದರು.ಮಡಿಕೇರಿ ತಾಲೂಕು ಭಾಗಮಂಡ ಹೋಬಳಿಯ ತಾವೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ತಾವೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ವಿದ್ಯಾರ್ಥಿಗಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸದಲ್ಲಿ ಅನ್ಯಾಯ ಆಗಬಾರದು ಎಂಬ ಉದ್ದೇಶದಿಂದ, ಸಕಲ ಸವಲತ್ತುಗಳನ್ನು ಕಲ್ಪಿಸಲು ಬದ್ಧವಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡು ತಮ್ಮ ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಜನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯ ಅಧ್ಯಕ್ಷ ಕೋಳಿಬೈಲು ವೆಂಕಟೇಶ್, ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ, ಗ್ಯಾರಂಟಿ ಅನುಷ್ಠಾನದ ಉಪಾಧ್ಯಕ್ಷ ಗಿರೀಶ್, ರಮಾನಾಥ್ ಬೇಕಲ್, ಹರ್ಷ, ಪ್ರಕಾಶ್, ಪಕ್ಷದ ಮುಖಂಡರು, ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.