ಪ್ರೇರಣಾ ಶಿಬಿರವನ್ನು ಉಡುಪಿಯ ಡಯಟ್ ಪ್ರಾಚಾರ್ಯ ಮತ್ತು ಸಂಪನ್ಮೂಲ ವ್ಯಕ್ತಿ ಡಾ. ಅಶೋಕ್ ಕಾಮತ್ ಉದ್ಘಾಟಿಸಿದರು.

ಡಾ. ಅಶೋಕ ಕಾಮತ್ ಕಿವಿಮಾತು, ಶಿರಾಲಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ

ಕನ್ನಡಪ್ರಭ ವಾರ್ತೆ ಭಟ್ಕಳ

ಶಿರಾಲಿಯ ಜನತಾ ವಿದ್ಯಾಲಯದಲ್ಲಿ ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಸರ್ಕಾರಿ ನೌಕರರ ಸಂಘ ಮತ್ತು ಜನತಾ ವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಪ್ರೇರಣಾ ಶಿಬಿರವನ್ನು ಉಡುಪಿಯ ಡಯಟ್ ಪ್ರಾಚಾರ್ಯ ಮತ್ತು ಸಂಪನ್ಮೂಲ ವ್ಯಕ್ತಿ ಡಾ. ಅಶೋಕ್ ಕಾಮತ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಇಷ್ಟಪಟ್ಟು ವಿದ್ಯಾಭ್ಯಾಸ ಮಾಡಿದಲ್ಲಿ ಯಾವ ಸಾಧನೆ ಬೇಕಾದರೂ ಮಾಡಬಹುದು. ವಿದ್ಯಾರ್ಥಿಗಳು ಸಮಯದ ಸದುಪಯೋಗ ಮಾಡಿಕೊಂಡು ಮೊಬೈಲ್‌ನಿಂದ ದೂರವಿದ್ದು ಅಭ್ಯಾಸ ಮಾಡಬೇಕು. ಆಲಸ್ಯ, ನಿರಾಸಕ್ತಿ ಮತ್ತು ಋಣಾತ್ಮಕ ದೃಷ್ಟಿಕೋನವನ್ನು ಬಿಟ್ಟು ಆತ್ಮವಿಶ್ವಾಸದಿಂದ ಅಧ್ಯಯನ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ ಮಾತನಾಡಿ, ಭಟ್ಕಳ ತಾಲೂಕಿನಲ್ಲಿ 2053 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುತ್ತಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಶಿಕ್ಷಕರ ಮೂಲಕ ಸೂಕ್ತ ಮಾರ್ಗದರ್ಶನ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಈಗಾಗಲೇ 3 ಪ್ರೇರಣಾ ಶಿಬಿರಗಳನ್ನು ಸಂಘಟಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಸಾಧನೆ ಮಾಡಲು ಪ್ರೇರಣೆ ನೀಡುವ ಸಲುವಾಗಿ ಈ ಶಿಬಿರ ಏರ್ಪಡಿಸಲಾಗಿದೆ. ಅನುಭವಿಕ ಸಂಪನ್ಮೂಲ ವ್ಯಕ್ತಿಗಳು ತರಬೇತಿಯನ್ನು ನೀಡಲಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದರು.

625 ಅಂಕಗಳಿಗೆ 625 ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ತಲಾ ₹10 ಸಾವಿರ ನೀಡುವುದಾಗಿ ಘೋಷಿಸಿದರು.

ಕುಮಟಾ ಡಯಟ್ ಹಿರಿಯ ಉಪನ್ಯಾಸಕ ನಾಗರಾಜ ಗೌಡ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ. ಎನ್. ನಾಯ್ಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಡಾ. ಅಶೋಕ್ ಕಾಮತ್ ಅವರನ್ನು ಸನ್ಮಾನಿಸಲಾಯಿತು. ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಘವೇಂದ್ರ ನಾಯ್ಕ ಸ್ವಾಗತಿಸಿದರು. ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯೋಜಕಿ ಪೂರ್ಣಿಮಾ ಮೊಗೇರ ವಂದಿಸಿದರು. ಜನತಾ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಿವಿಧ ಪ್ರೌಢಶಾಲೆಯ ಮುಖ್ಯಶಿಕ್ಷಕರು ಉಪಸ್ಥಿತರಿದ್ದರು. ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲೆಗಳ ಆಯ್ದ ಪ್ರತಿಭಾವಂತ ವಿದ್ಯಾರ್ಥಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಂಡರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸುರೇಶ ಮುರ್ಡೇಶ್ವರ ಕಾರ್ಯಕ್ರಮ ನಿರೂಪಿಸಿದರು.