ಸಾರಾಂಶ
ಹಾವೇರಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ಕೈಗೊಂಡು ಉತ್ತಮ ಸಾಧನೆ ತೋರುವ ಮೂಲಕ ಜಿಲ್ಲೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು ಎಂದು ಶಾಸಕ, ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.ನಗರದ ಜಿಲ್ಲಾ ಗುರುಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಏರ್ಪಡಿಸಿದ್ದ ರಾಜ್ಯ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವ ಕಾರ್ಯ ಶ್ಲಾಘನೀಯ. ಕಳೆದ ನಾಲ್ಕು ವರ್ಷಗಳಿಂದ ಈ ಸಂಪ್ರದಾಯವನ್ನು ಬೆಳೆಸಿಕೊಂಡು ಬಂದಿರುವುದು ಇತರರಿಗೆ ಮಾದರಿಯಾಗಿದೆ. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಮಕ್ಕಳು ಉತ್ತಮ ಸಾಧನೆಯನ್ನು ತೋರಿ ತಮ್ಮ ಪಾಲಕರ ಕೀರ್ತಿಯನ್ನು ತಂದಿದ್ದಿರಿ ಎಂದರು.ಸರ್ಕಾರಿ ನೌಕರರ ಜಿಲ್ಲಾ ಘಟಕ ಉತ್ತಮ ಕಾರ್ಯ ಮಾಡುತ್ತಿದ್ದು, ಸಂಘದ ವಸತಿ ಕೊಠಡಿಗಳ ನವೀಕರಣ ಕಾಮಗಾರಿ ಚೆನ್ನಾಗಿ ಮಾಡಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರದಿಂದ ಅವರಿಗೆ ಸೂಕ್ತ ಜಮೀನು ಮಂಜೂರು ಮಾಡಲಾಗುವುದು. ಸಂಘದ ಕಟ್ಟಡ ನಿರ್ಮಾಣ ಮಾಡುವ ಸಂದರ್ಭದಲ್ಲಿ ಅನುದಾನವನ್ನು ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.ಜು.೧೫ರಂದು ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ರಾಜ್ಯ ಸರ್ಕಾರ ೭ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿದೆ. ಸರ್ಕಾರಿ ನೌಕರರು ಇನ್ನಷ್ಟು ಉತ್ತಮ ರೀತಿಯಲ್ಲಿ ಸೇವೆ ಮಾಡಬೇಕೆಂದು ಕರೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಮೃತಗೌಡ ಪಾಟೀಲ ಮಾತನಾಡಿ, ಸಂಘಟನೆ ಕಳೆದ ಐದು ವರ್ಷಗಳಲ್ಲಿ ಮಾಡಿದ ಕೆಲಸ ಕಾರ್ಯಗಳನ್ನು ವಿವರಿಸಿ, ೭ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.ಇದೇ ವೇಳೆ ೨೦೨೩-೨೪ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌ಎಫ್‌ಎನ್. ಗಾಜಿಗೌಡ್ರ, ಜಿಪಂ ಮುಖ್ಯ ಲೆಕ್ಕಾಧಿಕಾರಿ ವಸಂತಕುಮಾರ್, ಡಿಡಿಪಿಯು ಉಮೇಶಪ್ಪ, ಡಿಡಿಪಿಐ ಸುರೇಶ ಹುಗ್ಗಿ, ಕ್ಷೇತ್ರಶಿಕ್ಷಣಾಧಿಕಾರಿ ಮೌನೇಶ ಬಡಿಗೇರ, ಧಾರವಾಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡ್ರ, ಜಿಲ್ಲಾ ಕಾರ್ಯದರ್ಶಿ ಎಂ.ಎ.ಎಣ್ಣಿ, ಸಿದ್ದಣ್ಣ ಯಲಿಗಾರ, ಎಸ್.ಜಿ. ಸುಣಗಾರ, ಮಲ್ಲಿಕಾರ್ಜುನ ಶಾಂತಗೇರಿ, ಎಸ್.ಎಸ್.ನಿಸ್ಸೀಮಗೌಡ್ರ, ಬಿ.ಪಿ.ಬಿದರಿ, ಬಸವರಾಜ ಚಳ್ಳಾಳ, ಬಸವರಾಜ ಅರಳಿ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ತಾಲೂಕಾ ಪದಾಧಿಕಾರಿಗಳು, ಸರ್ಕಾರಿ ನೌಕರರು ಪಾಲ್ಗೊಂಡಿದ್ದರು.