ವಿದ್ಯಾರ್ಥಿಗಳು ಪ್ರತಿನಿತ್ಯ ತರಗತಿಗಳಿಗೆ ತಡವಾಗಿ ತೆರಳುವ ಅಥವಾ ತರಗತಿಗಳನ್ನು ತಪ್ಪಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು
ಶಿಗ್ಗಾಂವಿ: ಶಾಲಾ- ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ಸೌಲಭ್ಯವಿಲ್ಲದೆ ತೊಂದರೆ ಅನುಭವಿಸುತ್ತಿರುವ ವಿದ್ಯಾರ್ಥಿಗಳು ಹೆಚ್ಚುವರಿ ಬಸ್ ಬಿಡುವಂತೆ ಒತ್ತಾಯಿಸಿ ತಾಲೂಕಿನ ಕ್ಯಾಲಕೊಂಡ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಮೂರು ಬಸ್‌ಗಳನ್ನು ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.
ತಾಲೂಕಿನ ಕ್ಯಾಲಕೊಂಡ ಗ್ರಾಮದಿಂದ ಪ್ರತಿನಿತ್ಯ ೭೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹುಲಗೂರ, ಬಸನಾಳ, ಕ್ಯಾಲಕೊಂಡ, ಅತ್ತಿಗೇರಿ ಹಾಗೂ ಶಿಶುನಾಳ ಸೇರಿದಂತೆ ವಿವಿಧ ಗ್ರಾಮಗಳ ಶಾಲಾ- ಕಾಲೇಜುಗಳಿಗೆ ತೆರಳುತ್ತಾರೆ. ಆದರೆ ಹುಲಗೂರ ಕಡೆಯಿಂದ ಬರುವ ಬಸ್‌ಗಳಲ್ಲಿ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವುದರಿಂದ ಬಸ್‌ನಲ್ಲಿ ಹತ್ತಲು ಸ್ಥಳಾವಕಾಶ ದೊರೆಯುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಪ್ರತಿನಿತ್ಯ ತರಗತಿಗಳಿಗೆ ತಡವಾಗಿ ತೆರಳುವ ಅಥವಾ ತರಗತಿಗಳನ್ನು ತಪ್ಪಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು.ಹೆಚ್ಚುವರಿ ಬಸ್ ಬಿಡಲು ಒತ್ತಾಯ: ಶಾಲಾ- ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕ್ಯಾಲಕೊಂಡ ಗ್ರಾಮಕ್ಕೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕು. ಪ್ರತಿನಿತ್ಯದ ಸಾರಿಗೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಶಿಗ್ಗಾಂವಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮೊಬೈಲ್ ಮೂಲಕ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಬಸ್ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು. ಆದರೆ ಹೆಚ್ಚುವರಿ ಬಸ್ ಬಿಡುವ ಕುರಿತು ಸ್ಪಷ್ಟ ಕ್ರಮ ಕೈಗೊಳ್ಳುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು.ನಂತರ ಹುಲಗೂರ ಪೊಲೀಸ್ ಠಾಣೆ ಸಿಬ್ಬಂದಿ ಮಧ್ಯಸ್ಥಿಕೆ ವಹಿಸಿ ವಿದ್ಯಾರ್ಥಿಗಳನ್ನು ಮನವೊಲಿಸಿದರು. ಅಧಿಕಾರಿಗಳು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ಒಂದು ವಾರದೊಳಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಹುಲಗೂರ, ಬಸನಾಳ, ಕ್ಯಾಲಕೊಂಡ, ಅತ್ತಿಗೇರಿ ಹಾಗೂ ಶಿಶುನಾಳ ಗ್ರಾಮಗಳ ಶಾಲಾ- ಕಾಲೇಜು ವಿದ್ಯಾರ್ಥಿಗಳು, ಪ್ರಯಾಣಿಕರು ಮತ್ತು ಕ್ಯಾಲಕೊಂಡ ಗ್ರಾಮದ ಸಾರ್ವಜನಿಕರು ಇದ್ದರು.