ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಯನ್ನು ಬೇರೆಡೆಗೆ ಸ್ಥಳಾಂತರಿಸುವ ಬದಲು, ಇದೇ ಆವರಣದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಶಾಲೆಯನ್ನು ಮುಂದುವರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರಸ್ತುತ ಶಾಲಾ ಆವರಣದ ವಾತಾವರಣ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲಕರವಾಗಿದ್ದು, ವಿದ್ಯಾರ್ಥಿಗಳು ಹಲವು ವರ್ಷಗಳಿಂದ ಇಲ್ಲಿಯೇ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ, ಯಾವುದೇ ಸೂಕ್ತ ಮುನ್ಸೂಚನೆ ನೀಡದೆ ಶಾಲೆಯನ್ನು ದೂರದ ಪ್ರದೇಶಕ್ಕೆ ಸ್ಥಳಾಂತರಿಸಲು ಅಧಿಕಾರಿಗಳು ಮುಂದಾಗಿದ್ದಾರೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ವಸತಿ ಶಾಲೆಯನ್ನು ಬೇರೆಡೆಗೆ ಸ್ಥಳಾಂತರಿಸಲು ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೈಗೊಂಡಿರುವ ನಿರ್ಧಾರವನ್ನು ಖಂಡಿಸಿ ಹಾಸನ ತಾಲೂಕಿನ ಶಾಂತಿಗ್ರಾಮದಲ್ಲಿರುವ ಡಾ. ಬಿ. ಆರ್‌. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ತೀವ್ರ ಪ್ರತಿಭಟನೆ ನಡೆಸಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಯನ್ನು ಬೇರೆಡೆಗೆ ಸ್ಥಳಾಂತರಿಸುವ ಬದಲು, ಇದೇ ಆವರಣದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಶಾಲೆಯನ್ನು ಮುಂದುವರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರಸ್ತುತ ಶಾಲಾ ಆವರಣದ ವಾತಾವರಣ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲಕರವಾಗಿದ್ದು, ವಿದ್ಯಾರ್ಥಿಗಳು ಹಲವು ವರ್ಷಗಳಿಂದ ಇಲ್ಲಿಯೇ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ, ಯಾವುದೇ ಸೂಕ್ತ ಮುನ್ಸೂಚನೆ ನೀಡದೆ ಶಾಲೆಯನ್ನು ದೂರದ ಪ್ರದೇಶಕ್ಕೆ ಸ್ಥಳಾಂತರಿಸಲು ಅಧಿಕಾರಿಗಳು ಮುಂದಾಗಿದ್ದಾರೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಆರೋಪಿಸಿದರು.

ಶಾಲೆ ಸ್ಥಳಾಂತರವಾದರೆ ವಿದ್ಯಾರ್ಥಿಗಳ ದಿನನಿತ್ಯದ ಸಂಚಾರಕ್ಕೆ ತೊಂದರೆಯಾಗುವುದರ ಜತೆಗೆ, ಅವರ ಶಿಕ್ಷಣ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಸ್ಥಳಾಂತರದ ನಿರ್ಧಾರವನ್ನು ತಕ್ಷಣವೇ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಶಾಲೆಯನ್ನು ಪ್ರಸ್ತುತ ಇರುವ ಸ್ಥಳದಲ್ಲಿಯೇ ಮುಂದುವರಿಸಬೇಕು. ಶಾಲೆಯಲ್ಲಿ ಕೊರತೆಯಾಗಿರುವ ಮೂಲಸೌಕರ್ಯಗಳನ್ನು ಇದೇ ಆವರಣದಲ್ಲಿ ಅಭಿವೃದ್ಧಿಪಡಿಸಬೇಕು ಹಾಗೂ ಸ್ಥಳಾಂತರದ ನಿರ್ಧಾರವನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಮುಂದಿಟ್ಟರು.

ತಮ್ಮ ಬೇಡಿಕೆ ಈಡೇರಿಸುವ ಕುರಿತು ಸ್ಪಷ್ಟ ಭರವಸೆ ದೊರೆಯುವವರೆಗೆ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಪಟ್ಟು ಹಿಡಿದರು. ಈ ವೇಳೆ ರಸ್ತೆ ತಡೆ ನಡೆಸಿ ಕೆಲ ಕಾಲ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಸಂಬಂಧಪಟ್ಟ ಅಧಿಕಾರಿಗಳು ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದರು. ಶೀಘ್ರದಲ್ಲೇ ಸಂಬಂಧಪಟ್ಟವರ ಸಭೆ ಕರೆದು ಸಮಸ್ಯೆ ಕುರಿತು ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ಆದರೆ, ಶಾಲೆಯನ್ನು ಸ್ಥಳಾಂತರಿಸುವ ನಿರ್ಧಾರವನ್ನು ಕೈಬಿಟ್ಟು ಪ್ರಸ್ತುತ ಆವರಣದಲ್ಲಿಯೇ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂಬ ತಮ್ಮ ಬೇಡಿಕೆಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಬದ್ಧರಾಗಿದ್ದಾರೆ. ಅಧಿಕಾರಿಗಳ ಮುಂದಿನ ಕ್ರಮದ ಆಧಾರದ ಮೇಲೆ ಹೋರಾಟದ ರೂಪುರೇಷೆಯನ್ನು ನಿರ್ಧರಿಸಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದರು.

ಪ್ರತಿಭಟನೆಯಲ್ಲಿ ರಮೇಶ್ ಹಾಸನ್, ನವೀನ್ ಕುಮಾರ್‌, ಜಿತೇಶ್ ಸೇರಿದಂತೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.