ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮಹತ್ವ, ಸಂವಿಧಾನದ ಆಶಯಗಳು ಹಾಗೂ ಸಂಸದೀಯ ವ್ಯವಸ್ಥೆಯ ಕಾರ್ಯವೈಖರಿಯನ್ನು ಅರಿತು ಜವಾಬ್ದಾರಿಯುತ ನಾಗರಿಕರಾಗಿ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮಹತ್ವ, ಸಂವಿಧಾನದ ಆಶಯಗಳು ಹಾಗೂ ಸಂಸದೀಯ ವ್ಯವಸ್ಥೆಯ ಕಾರ್ಯವೈಖರಿಯನ್ನು ಅರಿತು ಜವಾಬ್ದಾರಿಯುತ ನಾಗರಿಕರಾಗಿ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಭವನದಲ್ಲಿ ಆಯೋಜಿಸಿದ್ದ ವಿಜಯಪುರ ತಾಲೂಕು ಮಟ್ಟದ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ನಾಯಕತ್ವದ ಗುಣಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚಿಸುವ ಮನೋಭಾವ ಬೆಳೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ಯುವ ಸಂಸತ್ತಿನಲ್ಲಿ ವಿದ್ಯಾರ್ಥಿಗಳು ನಡೆಸಿದ ಚರ್ಚೆ, ಪ್ರಶ್ನೋತ್ತರ ಹಾಗೂ ಸಂಸದೀಯ ಕಲಾಪದ ಪ್ರಸ್ತುತಿ ಗಮನಿಸಿದಾಗ, ಇದು ಕೇವಲ ಅಣಕು ಸಂಸತ್ತಿನಂತೆ ಕಾಣದೆ ನೈಜ ಸಂಸತ್ತಿನ ಕಲಾಪವೇ ನಡೆಯುತ್ತಿರುವ ಹಾಗೆ ಅನುಭವವಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತಹಸೀಲ್ದಾರ್ ಪ್ರಶಾಂತ ಚನಗೊಂಡ ಮಾತನಾಡಿ, ವಿದ್ಯಾರ್ಥಿಗಳು ಯುವ ಸಂಸತ್ತಿನಲ್ಲಿ ಅತ್ಯುತ್ತಮವಾಗಿ ಭಾಗವಹಿಸಿರುವುದು ಸಂತಸದ ಸಂಗತಿ. ಈ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ವಿಜಯಪುರ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಲಿ ಎಂದು ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಒ ಗುರುಶಾಂತ ಬೆಳ್ಳುಂಡಗಿ, ಬಿಇಒ ರಾಘವೇಂದ್ರ ಹೊಸೂರ, ಸಹಾಯಕ ನಿರ್ದೇಶಕ ಬಿ.ಜೆ.ಇಂಡಿ, ಜ್ಯೋತಿ, ಸಹಪ್ರಾಧ್ಯಾಪಕ ಡಾ.ಶಿವಾನಂದ ಜಮಾದಾರ, ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳ ನಿಲಯಪಾಲಕರು, ಸಿಬ್ಬಂದಿ, ಶಿಕ್ಷಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.