ಹೊರವಲಯದ ಅಂಬಳೆ ಕೈಗಾರಿಕಾ ಪ್ರದೇಶದಿಂದ ಸುತ್ತಮುತ್ತಲಿನ ಜನವಸತಿ ಪ್ರದೇಶಗಳಿಗೆ ಉಂಟಾಗುತ್ತಿರುವ ಪರಿಸರ ಮಾಲಿನ್ಯ ಹಾಗೂ ವಿವಿಧ ಸಮಸ್ಯೆಗಳ ಕುರಿತು ಸಮಗ್ರ ಅಧ್ಯಯನ ನಡೆಸಿ ವರದಿ ನೀಡುವಂತೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಸಂಸ್ಥೆಯನ್ನು ಕೋರಿದ್ದು, ಇದರೊಂದಿಗೆ ರಸ್ತೆ, ಕಸ ವಿಲೇವಾರಿ, ಕಲುಷಿತ ನೀರು ಸೇರಿದಂತೆ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸುವುದಾಗಿ ಜಿಲ್ಲಾಡಳಿತದ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಹೊರವಲಯದ ಅಂಬಳೆ ಕೈಗಾರಿಕಾ ಪ್ರದೇಶದಿಂದ ಸುತ್ತಮುತ್ತಲಿನ ಜನವಸತಿ ಪ್ರದೇಶಗಳಿಗೆ ಉಂಟಾಗುತ್ತಿರುವ ಪರಿಸರ ಮಾಲಿನ್ಯ ಹಾಗೂ ವಿವಿಧ ಸಮಸ್ಯೆಗಳ ಕುರಿತು ಸಮಗ್ರ ಅಧ್ಯಯನ ನಡೆಸಿ ವರದಿ ನೀಡುವಂತೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಸಂಸ್ಥೆಯನ್ನು ಕೋರಿದ್ದು, ಇದರೊಂದಿಗೆ ರಸ್ತೆ, ಕಸ ವಿಲೇವಾರಿ, ಕಲುಷಿತ ನೀರು ಸೇರಿದಂತೆ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸುವುದಾಗಿ ಜಿಲ್ಲಾಡಳಿತದ ಅಧಿಕಾರಿಗಳು ಭರವಸೆ ನೀಡಿದ್ದಾರೆ.ಅಂಬಳೆ ಕೈಗಾರಿಕಾ ಪ್ರದೇಶದಿಂದ ಉಂಟಾಗುತ್ತಿರುವ ತೊಂದರೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ರೈತರು ಕಳೆದ ಕೆಲವು ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಬುಧವಾರ ''''''''ಅಂಬಳೆ ಚಲೋ'''''''' ಪ್ರತಿಭಟನೆಗೂ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಮಸ್ಯೆಗಳ ಪರಿಶೀಲನೆಗೆ ಮುಂದಾಗಿದೆ.
ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಪುರುರಾಜ್ ಸೋಲಂಕಿ ಅಧ್ಯಕ್ಷತೆಯಲ್ಲಿ ರಚಿಸಲಾದ ಪರಿಶೀಲನಾ ಅಧಿಕಾರಿಗಳ ತಂಡ ಮಂಗಳವಾರ ಧರಣಿ ಸ್ಥಳದಲ್ಲಿಯೇ ಗ್ರಾಮಸಭೆ ನಡೆಸಿ ಗ್ರಾಮಸ್ಥರು ಹಾಗೂ ರೈತ ಮುಖಂಡರಿಂದ ಅಹವಾಲು ಆಲಿಸಿತು. ಬಳಿಕ ಕಸ ವಿಲೇವಾರಿ ಸ್ಥಳ, ರಸ್ತೆ ಹಾಗೂ ಕೈಗಾರಿಕಾ ಪ್ರದೇಶದ ಕಲುಷಿತ ನೀರು ಕೆರೆಗೆ ಸೇರುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.ಸಭೆಯಲ್ಲಿ ಮಾತನಾಡಿದ ಉಪವಿಭಾಗಾಧಿಕಾರಿ ಪುರುರಾಜ್ ಸೋಲಂಕಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯವರು ನ.9ರಂದು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೈಗಾರಿಕಾ ಪ್ರದೇಶದಿಂದ ಜನವಸತಿ ಪ್ರದೇಶಗಳಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಐಎಡಿಬಿ ಹಾಸನದ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಅವರಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
ನ.9ರಂದೇ ಪರಿಶೀಲನೆ ನಡೆಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಅದರಂತೆ ನ.12ರಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು, ಕಾರ್ಯಪಾಲಕ ಅಭಿಯಂತರರು, ಕೆಐಎಡಿಬಿ ಹಾಸನದ ಅಧಿಕಾರಿಗಳು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ್ದಾರೆ.ನ.13ರಂದು ಪ್ರತಿಭಟನಾಕಾರರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಕೈಗಾರಿಕಾ ಪ್ರದೇಶದ ಸುತ್ತಮುತ್ತಲಿನ ಒಂಬತ್ತು ಸ್ಥಳಗಳಿಂದ ನೀರಿನ ಮಾದರಿಗಳನ್ನು ಸಂಗ್ರಹಿಸಿ ಹಾಸನದ ಪ್ರಾದೇಶಿಕ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿ ಬಂದ ಬಳಿಕ ನೀರಿನ ಗುಣಮಟ್ಟ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಅತ್ಯಾಧುನಿಕ ಕೈಗಾರಿಕಾ ಘಟಕದಿಂದ ಉಂಟಾಗುತ್ತಿರುವ ವಾಯುಮಾಲಿನ್ಯದ ಕುರಿತು ಪರಿಶೀಲನೆ ನಡೆಸಲು ಕೇಂದ್ರ ಪರಿಸರ ಇಲಾಖೆಯ ನಿವೃತ್ತ ಅಧಿಕಾರಿಯ ಸಮ್ಮುಖದಲ್ಲಿ ದಿನಾಂಕ ನಿಗದಿಪಡಿಸಿ ತಪಾಸಣೆ ಕೈಗೊಳ್ಳಲು ಕ್ರಮ ವಹಿಸಲಾಗಿದೆ. ಇದೇ ವೇಳೆ ಪರಿಸರ ಮಾಲಿನ್ಯ ನಿಯಂತ್ರಣ ಸಂಬಂಧ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಕೈಗಾರಿಕಾ ಘಟಕಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.ಅಲ್ಲದೆ, ಪರಿಸರ ಅಧಿಕಾರಿಗಳು ಅಂಬಳೆ ಕೈಗಾರಿಕಾ ಪ್ರದೇಶದ ಕೈಗಾರಿಕಾ ಘಟಕವೊಂದಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧದ ವರದಿಯನ್ನು ಕೈಗಾರಿಕಾ ಪ್ರದೇಶದ ಅಸೋಸಿಯೇಷನ್ ಪದಾಧಿಕಾರಿಗಳಿಗೆ ಪತ್ರದ ಮೂಲಕ ತಿಳಿಸಿದ್ದಾರೆ.
ರುಷಲ್ ಡೆಕೋರ್ ಇಂಡಸ್ಟ್ರೀಸ್ ಲಿಮಿಟೆಡ್ಗೆ ಸಂಬಂಧಿಸಿದಂತೆ ತಾಂತ್ರಿಕ ಬೋರ್ಡ್ ಸಭೆಯಲ್ಲಿ ಕೆಲವು ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಈ ಸಂಬಂಧ ನ.7ರಂದು ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಉತ್ತರ ಸಲ್ಲಿಸಲು 30 ದಿನಗಳ ಕಾಲಾವಕಾಶ ಕಲ್ಪಿಸಲಾಗಿದೆ.ರಸ್ತೆ ಅಗಲೀಕರಣ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ನ.12ರಂದು ನಡೆದ ಸಭೆಯಲ್ಲಿ ಲೈಫ್ಲೈನ್ ಇಂಡಸ್ಟ್ರೀಸ್ನವರು ರಸ್ತೆ ನಿರ್ಮಾಣಕ್ಕಾಗಿ 16 ಅಡಿ ಜಾಗ ಬಿಟ್ಟುಕೊಡಲು ಒಪ್ಪಿಗೆ ಸೂಚಿಸಿದ್ದಾರೆ. ಈ ಜಾಗದಲ್ಲಿ ರಸ್ತೆ ಹಾಗೂ ಬಾಕ್ಸ್ ಚರಂಡಿ ನಿರ್ಮಿಸಿಕೊಡುವುದಾಗಿ ಭರವಸೆ ನೀಡಲಾಗಿದೆ. ರುಷಲ್ ಡೆಕೋರ್ ಇಂಡಸ್ಟ್ರೀಸ್ ಲಿಮಿಟೆಡ್ನವರು ಕೂಡ ಐದು ಅಡಿ ಜಾಗವನ್ನು ಬಿಟ್ಟುಕೊಡಲು ಗುರುತು ಮಾಡಿಕೊಟ್ಟಿದ್ದಾರೆ.
ಇನ್ನು ಎಂ.ಎಚ್.ಜಿ.ಎಸ್. ಬಯೋಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ಗೆ ಸಂಬಂಧಿಸಿದಂತೆ ನ.16ರಂದು ಪರಿಶೀಲನೆ ನಡೆಸಲಾಗಿದೆ. ಸಂಸ್ಥೆಗೆ ಹಂಚಿಕೆಯಾಗಿರುವ ಜಾಗದ ವಿಸ್ತೀರ್ಣ, ಉದ್ದೇಶ, ಪರವಾನಗಿ ಹಾಗೂ ವಿಧಿಸಿರುವ ನಿಬಂಧನೆಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ನಿಯಮ ಉಲ್ಲಂಘನೆಯಾಗಿದೆಯೇ ಎಂಬುದನ್ನು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕೆಐಎಡಿಬಿ ಹಾಸನದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಉಪವಿಭಾಗಾಧಿಕಾರಿ ವಿವರಿಸಿದರು. ಸಮಸ್ಯೆಗಳಿಗೆ ವಿಳಂಬವಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.ಸಭೆಯಲ್ಲಿ ಚಿಕ್ಕಮಗಳೂರು ತಹಸೀಲ್ದಾರ್ ರೇಷ್ಮಾ ಶೆಟ್ಟಿ, ಚಿಕ್ಕಮಗಳೂರು ತಾಪಂ ಇಒ ವಿಜಯ್ ಕುಮಾರ್, ಕೈಗಾರಿಕೆಯ ಜಂಟಿ ನಿರ್ದೇಶಕರು ಕೆ.ಎಸ್.ರವಿಪ್ರಸಾದ್, ಕೆಐಎಡಿಬಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮರಿಸ್ವಾಮಿ, ಕೆಎಸ್ಪಿಸಿಬಿ ಪರಿಸರ ಅಧಿಕಾರಿ ಭವ್ಯಾ, ಗ್ರಾಮೀಣ ಕೈಗಾರಿಕೆ ಇಲಾಖೆ ಉಪ ನಿರ್ದೇಶಕರು ಚಂದ್ರಶೇಖರ್, ಪಿಡಿಒ ಗಂಗಾಧರ್ ಇತರರಿದ್ದರು.
33 ಕೈಗಾರಿಕೆಗಳಿಗೆ ನೋಟಿಸ್: 9 ಕಡೆ ನೀರಿನ ಮಾದರಿ ಸಂಗ್ರಹ:ಅಂಬಳೆ ಕೈಗಾರಿಕಾ ಪ್ರದೇಶದಿಂದ ಸುತ್ತಮುತ್ತಲಿನ ಜನವಸತಿ ಪ್ರದೇಶಗಳಿಗೆ ಉಂಟಾಗುತ್ತಿರುವ ತೊಂದರೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಲವು ಕ್ರಮಗಳನ್ನು ಕೈಗೊಂಡಿವೆ. ಮಾಲಿನ್ಯ ನಿಯಂತ್ರಣ ಸಂಬಂಧ 33 ಕೈಗಾರಿಕಾ ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕೈಗಾರಿಕಾ ಪ್ರದೇಶದ ಸುತ್ತಮುತ್ತಲಿನ ಒಂಬತ್ತು ಸ್ಥಳಗಳಿಂದ ನೀರಿನ ಮಾದರಿ ಸಂಗ್ರಹಿಸಿ ಹಾಸನದ ಪ್ರಾದೇಶಿಕ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೈಗಾರಿಕಾ ಘಟಕಗಳ ಕಾರ್ಯನಿರ್ವಹಣೆ, ವಾಯು ಮತ್ತು ಜಲಮಾಲಿನ್ಯ, ಪರವಾನಗಿ ಹಾಗೂ ನಿಯಮಗಳ ಪಾಲನೆ ಕುರಿತು ಪರಿಶೀಲನೆ ಮುಂದುವರಿದಿದೆ. ಐಐಎಸ್ಸಿ ಮೂಲಕವೂ ಸಮಗ್ರ ಅಧ್ಯಯನ ನಡೆಸಿ ವರದಿ ಪಡೆಯಲು ಜಿಲ್ಲಾಡಳಿತ ಮುಂದಾಗಿದೆ.ಮತ್ತೊಮ್ಮೆ ಕೈಗಾರಿಕೆ ನೋಟಿಸ್ ಸೂಚನೆ: ಕೈಗಾರಿಕಾ ಪ್ರದೇಶದಲ್ಲಿ ಇರುವ ಎಲ್ಲ ಕೈಗಾರಿಕೆಗಳಿಗೆ ಮತ್ತೊಂದು ಸುತ್ತಿನ ನೋಟಿಸ್ ಜಾರಿ ಮಾಹಿತಿ ಪಡೆದುಕೊಳ್ಳುವಂತೆ ಕೆಎಸ್ಪಿಸಿಬಿ ಅಧಿಕಾರಿಗಳಿಗೆ ಪುರುರಾಜ್ ಸೋಲಂಕಿ ಸೂಚಿಸಿದ್ದಾರೆ.ಇಟಿಪಿ, ಎಸ್ಟಿಪಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ಸೂಚನೆ: ಕೈಗಾರಿಕಾ ಪ್ರದೇಶದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡುವುದಕ್ಕೆ ಸಂಬಂಧಿಸಿದಂತೆ ತ್ಯಾಜ್ಯ ನೀರು ಸಂಸ್ಕರಣೆ ಘಟಕ (ಎಸ್ಟಿಪಿ), ಎಫ್ಲುಯೆಂಟ್ ಟ್ರೀಟ್ಮೆಂಟ್ ಪ್ಲಾಂಟ್(ಇಟಿಪಿ) ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಕೆ ಮಾಡುವಂತೆ ಕೆಐಎಡಿಬಿ ಅಧಿಕಾರಿಗಳಿಗೆ ಉಪ ವಿಭಾಗಾಧಿಕಾರಿ ಪುರುರಾಜ್ ಸೋಲಂಕಿ ಅವರು ನಿರ್ದೇಶಿಸಿದರು. ಜತೆಗೆ, ಕೈಗಾರಿಕಾ ಪ್ರದೇಶದ ಬಫರ್ ವಲಯದಲ್ಲಿ ರಸ್ತೆ, ಲಿಂಕ್ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದಾರೆ.