ಉತ್ತಮ ಬದುಕು ಕಟ್ಟಿಕೊಳ್ಳಲು ಸಂವಿಧಾನ ಅಧ್ಯಯನ ಮಾಡಿ

| Published : Sep 05 2024, 12:38 AM IST

ಸಾರಾಂಶ

ಚಾಮರಾಜನಗರ ತಾಲೂಕಿನ ಹರವೆ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ಅರಿವು ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲಾ ಅಬಕಾರಿ ಉಪ ಆಯುಕ್ತ ನಾಗಶಯನ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸಂವಿಧಾನ ಅಧ್ಯಯನ ಮಾಡುವುದರಿಂದ ಪ್ರತಿಯೊಬ್ಬರು ಉತ್ತಮ ಬದುಕು ಕಟ್ಟಿಕೊಳ್ಳುವ ಅವಕಾಶವಿದೆ ಎಂದು ಚಾಮರಾಜನಗರ ಜಿಲ್ಲಾ ಅಬಕಾರಿ ಉಪ ಆಯುಕ್ತ ನಾಗಶಯನ ತಿಳಿಸಿದರು.

ತಾಲೂಕಿನ ಹರವೆ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಜನಹಿತಾಶಕ್ತಿ ಹೋರಾಟ ವೇದಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ನಡೆದ ಸಂವಿಧಾನ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಸಂವಿಧಾನವನ್ನು ಅಧ್ಯಯನ ಮಾಡಬೇಕು. ಸಂವಿಧಾನದಲ್ಲಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಅನೇಕ ಅಂಶಗಳಿವೆ. ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಅತ್ಯಂತ ಉಪಯುಕ್ತವಾಗಿದೆ ಎಂದರು.ವಿಚಾರಮಂಡನೆ ಮಾಡಿದ ಭೋಗಾಪುರ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಪಿ.ದೇವರಾಜು ಮಾತನಾಡಿ, ದೇಶದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ತಾಂಡವವಾಡುತ್ತಿದ್ದ ಜಾತಿ ವ್ಯವಸ್ಥೆ, ಅಸಮಾನತೆಯನ್ನು ಹೋಗಲಾಡಿಸಿ, ಸಮಸಮಾಜ ನಿರ್ಮಿಸಲು ಶ್ರಮಿಸಿದವರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರು ಎಂದ ಅವರು, ಸಂವಿಧಾನದ ಅರಿವು ಪಡೆದವರು ಸಮಾಜದಲ್ಲಿ ಉತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ. ದೇಶದಲ್ಲಿರುವ ಜನರಿಗೆ ಒಂದು ರೀತಿಯಲ್ಲಿ ಬದುಕು ಸಾಗಿಸಲು ಅಂಬೇಡ್ಕರ್ ಸಂವಿಧಾನ ಸಹಕಾರಿಯಾಗಿದೆ ಎಂದು ಹೇಳಿದರು.

ಪ್ರಾಂಶುಪಾಲ ಬಿ.ಮಹೇಶ್ ಹರವೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ್ ರಚಿಸಿರುವ ಸಂವಿಧಾನ ಕುರಿತ ಅರಿವು ಕಾರ್ಯಕ್ರಮಗಳನ್ನು ಸಂಘಸಂಸ್ಥೆಗಳ ಜತೆ ಸರ್ಕಾರ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.ದಲಿತ ಮುಖಂಡರಾದ ಮೂಡ್ನಾಕೂಡು ಪ್ರಕಾಶ್, ನಾಗೇಶ್, ಜಿಲ್ಲಾ ಜನಹಿತಾಶಕ್ತಿ ಹೋರಾಟ ವೇದಿಕೆ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್, ಚಾಮರಾಜನಗರ ಸಿದ್ದಾರ್ಥ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ.ರಂಗಸ್ವಾಮಿ, ಉಪನ್ಯಾಸಕರಾದ ನಾಗಮಲ್ಲಪ್ಪ, ಎಲ್,ಮಹದೇವಪ್ಪ, ರಂಗಸ್ವಾಮಿ, ನಾಗಮಲ್ಲಪ್ಪ, ಶಿವಕುಮಾರ್, ಸೌಗಂಧಿ, ಪ್ರತಿಭಾ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.