ಸಾರಾಂಶ
ಅಧಿಕಾರಿಗಳಿಗೆ ಕೆ. ಲಕ್ಷ್ಮೀಪ್ರಿಯಾ ಸೂಚನೆ
ಕನ್ನಡಪ್ರಭ ವಾರ್ತೆ ಕಾರವಾರಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 8100 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕಜೋಳ ಬೆಳೆಯಲಾಗಿದ್ದು, ಈ ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಪ್ರಯೋಜನ ದೊರಕಿಸುವ ನಿಟ್ಟಿನಲ್ಲಿ, ಜಿಲ್ಲೆಯಲ್ಲಿ ಖರೀದಿ ಕೇಂದ್ರ ತೆರೆಯಲು ಇಂದೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಮಾರಾಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಮೆಕ್ಕಜೋಳಕ್ಕೆ ಪ್ರತೀ ಕ್ವಿಂಟಲ್‌ಗೆ ₹2400 ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿದ್ದು, ಜಿಲ್ಲೆಯಲ್ಲಿ ಪ್ರಸ್ತುತ ಕಟಾವು ಪ್ರಕ್ರಿಯೆ ನಡೆಯುತ್ತಿರುವುದರಿಂದ ಮಾರುಕಟ್ಟೆ ದರ ಸರಾಸರಿ ₹1950 ಇದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕಜೋಳ ಮಾರುಕಟ್ಟೆಗೆ ಆಗಮಿಸುವುದರಿಂದ ಬೆಲೆ ಕುಸಿಯುವ ಸಾಧ್ಯತೆಗಳಿರುವುದರಿಂದ, ಜಿಲ್ಲೆಯ ರೈತರಿಗೆ ಸರ್ಕಾರದ ಕನಿಷ್ಠ ಬೆಂಬಲ ಬೆಲೆಯ ಪ್ರಯೋಜನ ಒದಗಿಸಲು, ಖರೀದಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಇಂದೇ ಪ್ರಸ್ತಾವನೆಯನ್ನು ಸಿದ್ದಪಡಿಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯ ಹಳಿಯಾಳ ಮತ್ತು ಮುಂಡಗೋಡು ಭಾಗದಲ್ಲಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕಜೋಳ ಬೆಳೆದಿದ್ದು, ಈ ರೈತರಿಗೆ ಅನುಕೂಲವಾಗುವಂತೆ ಸಮೀಪದ ಕೃಷಿ ಮಾರುಕಟ್ಟೆ ಕೇಂದ್ರಗಳಲ್ಲಿ ಖರೀದಿ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಬೇಕು. ಖರೀದಿ ಕೇಂದ್ರ ತೆರೆದ ನಂತರ, ಈ ಬಗ್ಗೆ ರೈತರಿಗೆ ಅಗತ್ಯ ಮಾಹಿತಿಯನ್ನು ತಲುಪಿಸುವ ಮೂಲಕ ಅವರಿಗೆ ಬೆಂಬಲ ಬೆಲೆಯ ಪ್ರಯೋಜನ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಕಾಶ್ ಗಾಂವಕರ್, ಆಹಾರ ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ್, ಎಪಿಎಂಸಿ ಸಹಾಯಕ ನಿರ್ದೇಶಕ ಮಂಗೇಶ್ ನಾಯ್ಕ್ ಇದ್ದರು.