ಸಾರಾಂಶ
ಉದ್ಯೋಗ ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ
ಕನ್ನಡಪ್ರಭ ವಾರ್ತೆ ಕನಕಗಿರಿ2025-26ನೇ ಸಾಲಿನ ನರೇಗಾ ಕ್ರಿಯಾ ಯೋಜನೆ ತಯಾರಿಸುತ್ತಿದ್ದು, ಫಲಾನುಭವಿಗಳು ಕಾಮಗಾರಿಯ ಬೇಡಿಕೆ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಸೋಮವಾರ ತಾಲೂಕಿನ ಚಿಕ್ಕಡಂಕನಕಲ್ ಗ್ರಾಮದಲ್ಲಿ ಉದ್ಯೋಗ ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನಕ್ಕೆ ಚಾಲನೆ ಹಾಗೂ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಕಾರ್ಮಿಕರಿಂದ ಬೇಡಿಕೆ ಪಡೆಯಲಾಗುತ್ತಿದೆ. ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆ ಸಲ್ಲಿಸುವಂತೆ ತಿಳಿಸಿದರು.ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗೆ ನರೇಗಾ ಅನುಕೂಲವಾಗಿದೆ. ಕೂಲಿಕಾರರಿಗೆ ಕೆಲಸ ನೀಡುವುದರ ಜೊತೆಗೆ ಗ್ರಾಮೀಣ ಭಾಗದಲ್ಲಿ ಆಸ್ತಿಗಳ ಸೃಜನೆ ಆಗುತ್ತಿವೆ ಎಂದರು.
ತಾಪಂ ಇಒ ಕೆ. ರಾಜಶೇಖರ ಮಾತನಾಡಿ, ಉದ್ಯೋಗ ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನದಡಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಸಲ್ಲಿಸಿದ ಬೇಡಿಕೆಗಳನ್ನು ವಾರ್ಡ್ ಸಭೆ ಹಾಗೂ ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆದು, 2025-26ನೇ ಸಾಲಿನ ಸಮಗ್ರ ಕ್ರಿಯಾ ಯೋಜನೆಯನ್ನು ತಯಾರಿಸಿ ಜಿಪಂ ಅನುಮೋದನೆ ಪಡೆಯಲಾಗುವುದು. ಪ್ರತಿಯೊಬ್ಬರೂ ನರೇಗಾ ಯೋಜನೆ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.ಈ ವೇಳೆ ತಹಸೀಲ್ದಾರ್ ವಿಶ್ವನಾಥ ಮುರುಡಿ ಸೇರಿದಂತೆ ವಿವಿಧ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು, ಗ್ರಾಪಂ ಪಿಡಿಒ, ಸದಸ್ಯರು ಹಾಗೂ ಸಿಬ್ಬಂದಿ, ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರು ಇದ್ದರು.ಮತದಾರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇನೆ-ಸಚಿವ ತಂಗಡಗಿ:
ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.ಕನಕಗಿರಿ ತಾಲೂಕಿನ ಚಿಕ್ಕಡಂಕನಕಲ್ ಗ್ರಾಪಂ ವ್ಯಾಪ್ತಿಯ ನಾನಾ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಅಭಯ ಹಸ್ತ ಹಾಗೂ ಜನ ಸಂಪರ್ಕ ಸಭೆಯಲ್ಲಿ ಸೋಮವಾರ ಮಾತನಾಡಿದರು.ಚಿರ್ಚನಗುಡ್ಡ ತಾಂಡಾದಿಂದ ವಡಕಿ ಕ್ರಾಸ್ ವರೆಗಿನ ರಸ್ತೆ ಡಾಂಬರೀಕರಣಕ್ಕೆ ₹೪ ಕೋಟಿ, ಚಿಕ್ಕಡಂಕನಕಲ್‌ನಿಂದ ಸಿದ್ದಾಪುರ ರಸ್ತೆ ಅಭಿವೃದ್ಧಿಗೆ ₹೬ ಕೋಟಿ, ಚಿರ್ಚನಗುಡ್ಡ ತಾಂಡಾದ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ₹೨೦ ಲಕ್ಷ ಹಾಗೂ ಶಾಲಾಭಿವೃದ್ಧಿಗೆ ₹೧೬ ಲಕ್ಷ, ಸಂತ ಸೇವಾಲಾಲ್ ದೇವಸ್ಥಾನ ಜಿರ್ಣೋದ್ಧಾರಕ್ಕೆ ₹೫ ಲಕ್ಷ ನೀಡಲಾಗಿದ್ದು, ತಾಂಡಾದ ಬಾಕಿ ಉಳಿದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ತಹಶೀಲ್ದಾರ ವಿಶ್ವನಾಥ ಮುರುಡಿ, ತಾಪಂ ಇಒ ಟಿ. ರಾಜಶೇಖರ, ಸಿಡಿಪಿಒ ವಿರೂಪಾಕ್ಷ, ಎಇಇ ವೀರೇಶ, ಪ್ರಮುಖರಾದ ಗಂಗಾಧರಸ್ವಾಮಿ, ಬಸವಂತಗೌಡ, ವಿರೂಪಾಕ್ಷ ಆಂದ್ರ, ಅನಿಲ ಬಿಜ್ಜಳ, ಶಿವನಗೌಡ ವಕೀಲ, ವೆಂಕನಗೌಡ ವಕೀಲ, ಕಾಶಿಮಪ್ಪ ಹಿರೇಡಂಕನಕಲ್, ಮಹದೇವಪ್ಪ, ಮಲ್ಲಿಕಾರ್ಜುನ, ಅಮರೇಗೌಡ ಚಿರ್ಚನಗುಡ್ಡ, ಬಾಲರಾಜ ಸೇರಿದಂತೆ ಚಿಕ್ಕಡಂಕನಕಲ್ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಇದ್ದರು.ಕುಡಿಯುವ ನೀರಿನ ಕೆರೆ ನಿರ್ಮಾಣ:
ತಾಲೂಕಿನ ಚಿಕ್ಕಡಂಕನಕಲ್ ಗ್ರಾಮದ ಹಳೇ ಊರಿನ ೪ ಎಕರೆ ಪ್ರದೇಶದಲ್ಲಿ ಕುಡಿಯುವ ನೀರಿನ ಕೆರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದರು. ತುಂಗಭದ್ರಾ ಎಡದಂಡೆ ನಾಲೆಯ ಮೂಲಕ ಈ ಕೆರೆ ತುಂಬಿಸಿ ಇಲ್ಲಿಂದ ಮೂರ‍್ನಾಲ್ಕು ಗ್ರಾಮಗಳಿಗೆ ನೀರು ಸರಬರಾಜು ಮಾಡಲು ಅನುಕೂಲವಾಗಿದೆ. ಇಂತಹ ಕೆಲಸ ಕಾರ್ಯಗಳು ಶಾಶ್ವತವಾಗಿ ಉಳಿಯಲಿವೆ. ಪಕ್ಷಬೇಧ ಮರೆತು ಅಭಿವೃದ್ಧಿ ಸಹಕರಿಸಿದಾಗ ಮಾತ್ರ ನಾವು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಚಿವ ತಂಗಡಗಿ ತಿಳಿಸಿದರು.